ADVERTISEMENT

ತುಮಕೂರು: ಎಸ್ಸೆಸ್ಸೆಲ್ಸಿ ಮಕ್ಕಳಲ್ಲಿ ಕೊರೊನಾ ಇಲ್ಲ: ಡಿಸಿ ಡಾ.ಕೆ.ರಾಕೇಶ್ ಕುಮಾರ್

ಪ್ರತಿದಿನ ಎರಡು ಬಾರಿ ಪರೀಕ್ಷಾ ಕೇಂದ್ರಗಳ ಸ್ಯಾನಿಟೈಸ್

​ಪ್ರಜಾವಾಣಿ ವಾರ್ತೆ
Published 24 ಜೂನ್ 2020, 16:43 IST
Last Updated 24 ಜೂನ್ 2020, 16:43 IST
ಡಾ.ಕೆ.ರಾಕೇಶ್ ಕುಮಾರ್
ಡಾ.ಕೆ.ರಾಕೇಶ್ ಕುಮಾರ್   

ತುಮಕೂರು: ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ಯಾವ ಮಕ್ಕಳಲ್ಲೂ ಸದ್ಯ ಕೊರೊನಾ ಸೋಂಕು ಪತ್ತೆಯಾಗಿಲ್ಲ. ಒಂದು ವೇಳೆ ಸೋಂಕು ಕಂಡು ಬಂದರೆ ಅಥವಾ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ ಇದ್ದರೆ ಆ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯಲ್ಲಿ ಮೊದಲ ಬಾರಿ ಪರೀಕ್ಷೆ ಬರೆಯುವವರು (ಪ್ರೆಶರ್ಸ್‌) ಎಂದೇ ಪರಿಗಣಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯ 85 ಪರೀಕ್ಷಾ ಕೇಂದ್ರಗಳಲ್ಲಿ 23,783 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಮಧುಗಿರಿ ಶೈಕ್ಷಣಿಕ ಜಿಲ್ಲೆಯ 59 ಪರೀಕ್ಷಾ ಕೇಂದ್ರಗಳಲ್ಲಿ 13,534 ಮಕ್ಕಳು ನೋಂದಾಯಿಸಿಕೊಂಡಿದ್ದಾರೆ’ ಎಂದರು.

ಪ್ರತಿದಿನ ಎರಡು ಬಾರಿ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಲಾಗುತ್ತದೆ. ಕೇಂದ್ರದ ಪ್ರವೇಶ ದ್ವಾರದಲ್ಲಿಯೇ ಆರೋಗ್ಯ ತಪಾಸಣಾ ಕೇಂದ್ರ ತೆರೆದು ವಿದ್ಯಾರ್ಥಿಗಳು ಮಾಸ್ಕ್ ಧರಿಸಿರುವುದನ್ನು ಖಾತ್ರಿಪಡಿಸಿಕೊಳ್ಳಲಾಗುತ್ತದೆ. ಪ್ರತಿ ವಿದ್ಯಾರ್ಥಿಗೆ ಸ್ಯಾನಿಟೈಸ್ ಸೌಲಭ್ಯ ಕಲ್ಪಿಸಲಾಗುತ್ತದೆ. ಪ್ರತಿ 200 ಮಕ್ಕಳಿಗೆ ಒಬ್ಬ ಆರೋಗ್ಯ ಸಿಬ್ಬಂದಿ ಅಥವಾ ದೈಹಿಕ ಶಿಕ್ಷಣ ಶಿಕ್ಷಕರು ಥರ್ಮಲ್ ಸ್ಕ್ರೀನಿಂಗ್ ಮಾಡಲು ನಿರ್ದೇಶನ ನೀಡಲಾಗಿದೆ. ಈಗಾಗಲೇ ಪರೀಕ್ಷಾ ಕೇಂದ್ರ, ಕೊಠಡಿಯ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಗೊಂದಲಕ್ಕೆ ಅವಕಾಶ ಇರುವುದಿಲ್ಲ ಎಂದು ವಿವರಿಸಿದರು.

ADVERTISEMENT

ಸಾರಿಗೆ ಸೌಲಭ್ಯ: ಕೆಎಸ್‌ಆರ್‌ಟಿಸಿ ಬಸ್‍ಗಳು ಪರೀಕ್ಷಾ ಸಮಯಕ್ಕೆ ಅನುಗುಣವಾಗಿ ಸಂಚರಿಸುತ್ತವೆ. ಪ್ರವೇಶ ಪತ್ರ ತೋರಿಸಿದರೆ ಪ್ರಯಾಣ ಉಚಿತ. ಕೆಎಸ್‌ಆರ್‌ಟಿಸಿ ಬಸ್ ಮಾರ್ಗ ಇಲ್ಲದ ಕಡೆಗಳಲ್ಲಿ ಖಾಸಗಿ ಶಾಲಾ ಬಸ್‍ಗಳ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಕಾರಣಕ್ಕೂ ಯಾವುದೇ ವಿದ್ಯಾರ್ಥಿ ಪರೀಕ್ಷೆಯಿಂದ ವಂಚಿತರಾಗಬಾರದು. ಪರೀಕ್ಷೆಗೆ ಸರಿಯಾದ ಸಮಯಕ್ಕೆ ಬರಲು ವಿಳಂಬವಾದರೆ ಸಮಯದಲ್ಲಿ ವಿನಾಯಿತಿ ನೀಡಲಾಗುತ್ತದೆ ಎಂದು ತಿಳಿಸಿದರು.

ಯಾವುದೇ ಗೊಂದಲ ಆಗದಂತೆ ಪರೀಕ್ಷೆ ನಡೆಯಲು ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಿದ್ದೇವೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಸುತ್ತಳತೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಶುಭಾ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಡಿಡಿಪಿಐ ಕಾಮಾಕ್ಷಮ್ಮ ಗೋಷ್ಠಿಯಲ್ಲಿ ಇದ್ದರು.

ಕಂಟೈನ್‌ಮೆಂಟ್ ವಲಯದ 26 ಮಕ್ಕಳು

ಜಿಲ್ಲೆಯಲ್ಲಿ ಕಂಟೈನ್‍ಮೆಂಟ್ ವಲಯದ 26 ಮಕ್ಕಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಅವರಿಗೆ ಆರೋಗ್ಯ ತಪಾಸಣೆ ನಡೆಸಿ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಿದ್ದೇವೆ. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಎರಡು ಹೆಚ್ಚುವರಿ ಕೊಠಡಿಗಳ ವ್ಯವಸ್ಥೆ ಇರುತ್ತದೆ. ಪ್ರತಿ ತಾಲ್ಲೂಕಿಗೆ 3ರಿಂದ 4 ಹೆಚ್ಚುವರಿ ಪರೀಕ್ಷಾ ಕೇಂದ್ರಗಳನ್ನು ಮೀಸಲಿಡಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.