ADVERTISEMENT

ನೀರಿನ ವಿಚಾರದಲ್ಲಿ ರಾಜಕಾರಣ ಮಾಡಲ್ಲ: ನಿಖಿಲ್ ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 16 ಜೂನ್ 2025, 16:01 IST
Last Updated 16 ಜೂನ್ 2025, 16:01 IST
ತುಮಕೂರು ಸಿದ್ಧಗಂಗಾ ಮಠಕ್ಕೆ ಸೋಮವಾರ ಭೇಟಿ ನೀಡಿದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಸಿದ್ಧಲಿಂಗ ಸ್ವಾಮೀಜಿ ಆಶೀರ್ವದಿಸಿದರು
ತುಮಕೂರು ಸಿದ್ಧಗಂಗಾ ಮಠಕ್ಕೆ ಸೋಮವಾರ ಭೇಟಿ ನೀಡಿದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಸಿದ್ಧಲಿಂಗ ಸ್ವಾಮೀಜಿ ಆಶೀರ್ವದಿಸಿದರು   

ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿಚಾರದಲ್ಲಿ ರಾಜಕಾರಣ ಮಾಡುವುದಿಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ನಗರದ ಸಿದ್ಧಗಂಗಾ ಮಠಕ್ಕೆ ಸೋಮವಾರ ಭೇಟಿ ನೀಡಿ ಸ್ವಾಮೀಜಿ ಆಶೀರ್ವಾದ ಪಡೆದುಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಹೇಮಾವತಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡಿಲ್ಲ. ರೈತ ಮುಖಂಡರು, ಜನಪ್ರತಿನಿಧಿಗಳ ಜತೆ ಚರ್ಚಿಸಿ, ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು. ಸಂಘರ್ಷಕ್ಕೆ ದೂಡಿ, ಸುಮ್ಮನೆ ಕುಳಿತಿದ್ದಾರೆ ಎಂದು ಆರೋಪಿಸಿದರು.

ADVERTISEMENT

‘ಜೆಡಿಎಸ್ ಮುಳುಗುತ್ತಿರುವ ಹಡಗು’ ಎಂದು ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿ, ‘ಯಾವುದು ಮುಳುಗಿರುವ ದೋಣಿ?’ ಎಂಬುದು ಗೊತ್ತಾಗುತ್ತಿದೆ. ಪಕ್ಷಕ್ಕೆ ರಾಜ್ಯದ ಜನರು ಆಶೀರ್ವಾದ ಮಾಡಿದ್ದಾರೆ. ಅನೇಕ ಚುನಾವಣೆಯಲ್ಲಿ ಇದು ಸಾಬೀತಾಗಿದೆ. ಜೆಡಿಎಸ್ ಪ್ರಾದೇಶಿಕ ಪಕ್ಷವಾಗಿದ್ದು, ಶೇ 20ರಷ್ಟು ಮತಗಳು ಪಕ್ಷದ ಪರವಾಗಿವೆ. ಜಿಲ್ಲೆಯಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶೇ 34ರಷ್ಟು ಮತಗಳನ್ನು ನೀಡಿದ್ದು, ಪಕ್ಷ ಮೊದಲ ಸ್ಥಾನದಲ್ಲಿದೆ. ಚುನಾವಣೆಯಲ್ಲಿ ಸೋತಿರಬಹುದು. ಮತ ಗಳಿಕೆಯಲ್ಲಿ ಇತರ ಪಕ್ಷಗಳಿಗಿಂತ ಮುಂದಿದ್ದೇವೆ’ ಎಂದು ಹೇಳಿದರು.

ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಸಾಕಷ್ಟು ಸಂಖ್ಯೆಯ ಪಕ್ಷದ ಶಾಸಕರು ಭಾಗವಹಿಸದಿರುವ ಬಗ್ಗೆ ಪ್ರತಿಕ್ರಿಯಿಸಿ, ‘ಶಾಸಕರ ಕ್ಷೇತ್ರಗಳಲ್ಲಿ ಶನಿವಾರ, ಭಾನುವಾರ ಕಾರ್ಯಕ್ರಮಗಳು ಇರುತ್ತವೆ. ಸಭೆಗೆ ಭಾರದವರು ಎಚ್.ಡಿ.ಕುಮಾರಸ್ವಾಮಿ ಬಳಿ ಮಾತನಾಡಿದ್ದಾರೆ’ ಎಂದರು.

ತಕ್ಷಣ ಜಿಲ್ಲಾ, ತಾಲ್ಲೂಕು ಪಂಚಾಯಿತಿ, ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ.ಆಂಜಿನಪ್ಪ, ಕಾರ್ಯಾಧ್ಯಕ್ಷ ಟಿ.ಆರ್.ನಾಗರಾಜು, ಮಾಜಿ ಶಾಸಕ ಎಚ್.ನಿಂಗಪ್ಪ, ಮುಖಂಡರಾದ ಕೆ.ಟಿ.ಶಾಂತಕುಮಾರ್, ಧರಣೇಂದ್ರ ಕುಮಾರ್, ಲಕ್ಷ್ಮಿನರಸಿಂಹರಾಜು, ನರಸಿಂಹಮೂರ್ತಿ, ಶ್ರೀನಿವಾಸ್, ಕುಂಭಣ್ಣ, ದಾಂಡೇಲಿ ಗಂಗಣ್ಣ, ಗಂಗಹನುಮಯ್ಯ, ಲೀಲಾವತಿ, ಮೆಡಿಕಲ್ ಮಧು, ಸೋಲಾರ್ ಕೃಷ್ಣಮೂರ್ತಿ, ದರ್ಶನ್ ಯಾದವ್, ಲಕ್ಷ್ಮಮ್ಮ ವೀರಣ್ಣಗೌಡ, ಸುಮ ಜಗನ್ನಾಥ್, ಕುಸುಮ, ತಾಹೇರಾ ಬಾನು ಮತ್ತಿತರರು ಉಪಸ್ಥಿತರಿದ್ದರು.

ಶಾಸಕರಾದ ಬಿ.ಸುರೇಶ್‍ಗೌಡ, ಜಿ.ಬಿ.ಜ್ಯೋತಿಗಣೇಶ್, ಎಚ್.ಎಸ್.ರವಿಶಂಕರ್ ಸೇರಿದಂತೆ ಬಿಜೆಪಿ ಮುಖಂಡರು ಸ್ವಾಗತಿಸಿದರು.

ಕಾಂಗ್ರೆಸ್ ಮುಳುಗುತ್ತಿರುವ ಹಡಗು

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಿಂದ ಜನರು ಬೇಸತ್ತಿದ್ದಾರೆ. ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂಬುದು ಎಲ್ಲರಿಗೂ ಗೊತ್ತಿದೆ. ಇಂತಹ ಪಕ್ಷಕ್ಕೆ ಜೆಡಿಎಸ್‌ನ ಯಾವ ಶಾಸಕರು ಹೋಗುವ ಮನಸ್ಥಿತಿಯಲ್ಲಿ ಇಲ್ಲ ಎಂದು ವಿಧಾನಸಭೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್‍ಬಾಬು ಹೇಳಿದರು. ರಾಜ್ಯದಲ್ಲಿ ಹಲವಾರು ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡಿದ್ದು ಸಂಘಟನೆ ಮಾಡಲು ನಿರ್ಧರಿಸಲಾಗಿದೆ. ಮುಂಬರುವ ಜಿಲ್ಲಾ ತಾಲ್ಲೂಕು ಪಂಚಾಯಿತಿ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಸಂಘಟನೆ ಮಾಡಲಾಗುತ್ತಿದೆ ಎಂದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಕ್ಷೇತ್ರಕ್ಕೆ ಹೇಮಾವತಿ ನೀರು ತೆಗೆದುಕೊಂಡು ಹೋಗಲು ವಾಮಮಾರ್ಗ ಅನುಸರಿಸುತ್ತಿದ್ದಾರೆ. ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ನಿರ್ಮಾಣ ಮಾಡಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.