ADVERTISEMENT

ನರೇಗಾ ಯೋಜನೆ ಅನುಷ್ಠಾನಕ್ಕೆ ಸೂಚನೆ

ದಿಶಾ ಸಮಿತಿ ಸಭೆಯಲ್ಲಿ ಸಂಸದರ ತಾಕೀತು

​ಪ್ರಜಾವಾಣಿ ವಾರ್ತೆ
Published 30 ಜೂನ್ 2021, 4:18 IST
Last Updated 30 ಜೂನ್ 2021, 4:18 IST
ತುಮಕೂರು ಜಿಲ್ಲಾಪಂಚಾಯಿತಿ ಸಭಾಂಗಣದಲ್ಲಿ ನಡೆದ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿದ ಸಂಸದ ಜಿ.ಎಸ್.ಬಸವರಾಜು
ತುಮಕೂರು ಜಿಲ್ಲಾಪಂಚಾಯಿತಿ ಸಭಾಂಗಣದಲ್ಲಿ ನಡೆದ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿದ ಸಂಸದ ಜಿ.ಎಸ್.ಬಸವರಾಜು   

ತುಮಕೂರು: ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಸಮರ್ಪಕ ಅನುಷ್ಠಾನ, ಅನುದಾನ ಸದ್ಬಳಕೆ, ಕೃಷಿ ಮತ್ತು ತೋಟಗಾರಿಕೆ ಚಟುವಟಿಕೆಗೆ ಉತ್ತೇಜನ, ಪರಿಶಿಷ್ಟ ಜಾತಿ, ಪಂಗಡದವರಿಗೆ ಆದ್ಯತೆ, ಕಾರ್ಮಿಕರಿಗೆ ಕಾಲಮಿತಿಯಲ್ಲೇ ಕೂಲಿ ಪಾವತಿ ಸೇರಿ ಯೋಜನೆ ಸಮಗ್ರ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು ಎಂದು ಸಂಸದ ಜಿ.ಎಸ್. ಬಸವರಾಜು ಹಾಗೂ ಎ.ನಾರಾಯಣಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ದಿಶಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸದ ಜಿ.ಎಸ್. ಬಸವರಾಜು, ಗ್ರಾಮೀಣ ಪ್ರದೇಶದ ಸಮಗ್ರ ಅಭಿವೃದ್ಧಿ ಉದ್ದೇಶದಿಂದ ನರೇಗಾ ಯೋಜನೆ ಅನುಷ್ಠಾನಕ್ಕೆ ತರಲಾಗಿದೆ. ಈ ಯೋಜನೆಯಲ್ಲಿ ಲೋಪದೋಷವಾಗದಂತೆ ಅನುಷ್ಠಾನಗೊಳಿಸಬೇಕು.

ಕೃಷಿ, ತೋಟಗಾರಿಕೆ ಸೇರಿದಂತೆ ನರೇಗಾ ಯೋಜನೆಯಡಿ ಅನುಷ್ಠಾನಗೊಳಿಸುವುದು ಎಲ್ಲವನ್ನೂ ಸಮಗ್ರವಾಗಿ ಅನುಷ್ಟಾನಗೊಳಿಸಿ ಈ ಯೋಜನೆ ಯಶಸ್ವಿಯಾಗುವಂತೆ ಕ್ರಮ ವಹಿಸಲು ಸೂಚಿಸಿದರು.

ADVERTISEMENT

ರಾಷ್ಟ್ರೀಯ ಸಾಮಾಜಿಕ ಭದ್ರತಾ ಯೋಜನೆಯಡಿ ಬರುವ ಎಲ್ಲ ವೇತನ ಸೌಲಭ್ಯಗಳನ್ನು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸಬೇಕು. ಯಾವುದೇ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗಬಾರದು. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಕಾಲಮಿತಿಯೊಳಗೆ ಮನೆಗಳ ನಿರ್ಮಾಣಕ್ಕೆ ಕ್ರಮ ವಹಿಸಬೇಕು ಎಂದರು.

ಸಂಸದ ಎ. ನಾರಾಯಣಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಅಂಗನವಾಡಿ ಮತ್ತು ಶಾಲಾ ಕಟ್ಟಡ, ಶಾಲಾ ಶೌಚಾಲಯಗಳನ್ನು ನಿರ್ಮಿಸಬೇಕು. ದುಸ್ಥಿತಿಯಲ್ಲಿರುವ ಶಾಲಾ ಕೊಠಡಿಗಳನ್ನು ದುರಸ್ತಿಗೊಳಿಸಬೇಕು. ಕೆರೆ-ಕಟ್ಟೆಗಳ ಅಭಿವೃದ್ಧಿಗೂ ಆದ್ಯತೆ ನೀಡಿ ಅಂತರ್ಜಲ ಹೆಚ್ಚಳಕ್ಕೆ ಕ್ರಮ ವಹಿಸಬೇಕು. ರೈತರ ಅಭಿವೃದ್ಧಿಗೆ ಹೆಚ್ಚು ಒತ್ತು ಕೊಡಬೇಕು ಎಂದು
ಹೇಳಿದರು.

ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಮಾತನಾಡಿ, ನರೇಗಾ ಯೋಜನೆಯಡಿ ಅನುಷ್ಠಾನಕ್ಕೆ ಕೈಗೊಂಡಿರುವ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಮುಂದಿನ ಸಭೆ ವೇಳೆಗೆ ಈಗ ಸೂಚಿಸಿರುವ ಎಲ್ಲ ಯೋಜನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಮಾತನಾಡಿ, ಮಳೆಗಾಲ ಪ್ರಾರಂಭಗೊಂಡಿರುವುದರಿಂದ ನರೇಗಾ ಯೋಜನೆಯಡಿ ಅರಣ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಶಾಲೆಗಳಲ್ಲಿ ಗಿಡಗಳನ್ನು ನೆಡಬೇಕು ಎಂದರು.

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಟಿ.ಕೆ. ರಮೇಶ್ ಮಾತನಾಡಿದರು. ದಿಶಾ ಸಮಿತಿ ಸದಸ್ಯ ಕುಂದರನಹಳ್ಳಿ ರಮೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪುರವಾಡ್, ಉಪವಿಭಾಗಾಧಿಕಾರಿ ಅಜಯ್
ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.