ADVERTISEMENT

ತುಮಕೂರು: ಔಷಧ ಕಾರ್ಖಾನೆಗೆ ನೋಟಿಸ್ ಜಾರಿ

​ಪ್ರಜಾವಾಣಿ ವಾರ್ತೆ
Published 3 ಜುಲೈ 2025, 6:29 IST
Last Updated 3 ಜುಲೈ 2025, 6:29 IST
ಶುಭ ಕಲ್ಯಾಣ್
ಶುಭ ಕಲ್ಯಾಣ್   

ತುಮಕೂರು: ಸುರಕ್ಷತೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಲಾರೆಸ್ಸ್ ಬಯೋ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಗೆ ನೋಟಿಸ್ ಜಾರಿ ಮಾಡಲಾಗಿದೆ.

ತೆಲಂಗಾಣ ಔಷಧ ಕಾರ್ಖಾನೆಯಲ್ಲಿ ಸಂಭವಿಸಿದ ಅನಾಹುತದ ಹಿನ್ನೆಲೆಯಲ್ಲಿ ಬುಧವಾರ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲಿಸಿದರು.

ಕಾರ್ಖಾನೆಯಲ್ಲಿ ಕೈಗೊಂಡಿರುವ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿದರು. ಪೂರ್ಣ ಪ್ರಮಾಣದಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿರುವುದನ್ನು ಗಮನಿಸಿದರು. ಕಾರ್ಖಾನೆಗೆ ನೋಟಿಸ್ ಜಾರಿ ಮಾಡಬೇಕು. ಕಾರ್ಖಾನೆಯಿಂದ ಪರಿಸರದ ಮೇಲಾಗುತ್ತಿರುವ ಪರಿಣಾಮಗಳ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಪರಿಸರ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ರವಿಚಂದ್ರ ಅವರಿಗೆ ಸೂಚಿಸಿದರು.

ADVERTISEMENT

ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸುತ್ತಿರುವ ಕುರಿತು ಪೂರ್ಣ ಪ್ರಮಾಣದಲ್ಲಿ ಸ್ಪಷ್ಟತೆ ಇಲ್ಲದಿರುವುದರಿಂದ ಆಡಿಟ್ ಮಾಡಿಸಿ ವರದಿ ಸಲ್ಲಿಸುವಂತೆ ಕಾರ್ಖಾನೆ ಹಾಗೂ ಬಾಯ್ಲರ್ ಇಲಾಖೆ ಉಪನಿರ್ದೇಶಕ ಕೃಷ್ಣಪ್ಪ ಅವರಿಗೆ ನಿರ್ದೇಶಿಸಿದರು.

ಕಾರ್ಖಾನೆಯಲ್ಲಿ ಕೈಗೊಂಡಿರುವ ಸುರಕ್ಷತಾ ಕ್ರಮಗಳು, ಅಗ್ನಿಶಾಮಕ ವ್ಯವಸ್ಥೆ, ತುರ್ತು ನಿರ್ಗಮನ ದಾರಿಗಳು, ಕಾರ್ಮಿಕರಿಗೆ ನೀಡಲಾಗುವ ತರಬೇತಿ ಹಾಗೂ ಇತರ ಸುರಕ್ಷತಾ ಉಪಕರಣಗಳ ಸ್ಥಿತಿಗತಿ ಪರಿಶೀಲಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಕಾರ್ಮಿಕ ಅಧಿಕಾರಿ ಇಬ್ರಾಹಿಂ, ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.