ಪ್ರಜಾವಾಣಿ ವಾರ್ತೆ
ಕುಣಿಗಲ್: ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಉತ್ತಮ ಕ್ರೀಡಾಪಟುಗಳಿದ್ದಾರೆ. ಸೂಕ್ತ ಮಾರ್ಗದರ್ಶನ, ತರಬೇತಿ ನೀಡಲು ದೈಹಿಕ ಶಿಕ್ಷಣ ಉಪನ್ಯಾಸಕರಿಲ್ಲದೆ ಕ್ರೀಡಾ ಪ್ರತಿಭೆಗಳು ಅವಕಾಶದಿಂದ ವಂಚಿತರಾಗುತ್ತಿದ್ದು, ಇಲಾಖೆ ಮತ್ತು ಸರ್ಕಾರದ ಗಮನಕ್ಕೆ ತರಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಾಲ ಗುರುಮೂರ್ತಿ ತಿಳಿಸಿದರು.
ಪಟ್ಟಣದ ಜಿಕೆಬಿಎಂಎಸ್ ಮೈದಾನದಲ್ಲಿ ಗುರುವಾರ ಶಾಲಾ ಶಿಕ್ಷಣ ಇಲಾಖೆ ಮತ್ತು ಜ್ಞಾನ ಸಂಪದ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ನಡೆದ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಮಾತನಾಡಿದರು.
ಕ್ರೀಡೆಯಲ್ಲಿ ಪ್ರತಿಯೊಬ್ಬರಿಗೂ ಗುರಿ ಮುಖ್ಯ. ತನ್ನ ಗುರಿ ಮುಟ್ಟಲು ಗುರು ಮುಖ್ಯ. ವಿದ್ಯಾರ್ಥಿಗಳು ಪಠ್ಯದ ಜೊತೆ ಇತರೆ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ಉತ್ತಮ ಆರೋಗ್ಯ ಸಿಗುತ್ತದೆ. ಎಲ್ಲರೂ ಸ್ಪರ್ಧಾತ್ಮಕ ಮನೋಭಾವದಿಂದ ಆಡಿದಾಗ ಕ್ರೀಡಾಕೂಟಗಳು ಯಶಸ್ವಿಯಾಗುತ್ತವೆ ಎಂದರು.
ಕ್ರೀಡಾ ಜ್ಯೋತಿ ಸ್ವೀಕರಿಸಿದ ಮಾಜಿ ಶಾಸಕ ಬಿ.ಬಿ. ರಾಮಸ್ವಾಮಿಗೌಡ, ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ವಿನಯ ಮುಖ್ಯ. ಕ್ರೀಡಾಕೂಟಗಳಲ್ಲಿ ಭಾಗವಹಿಸುವಾಗ ತೀರ್ಪುಗಾರರ ತೀರ್ಪಿಗೆ ಎಲ್ಲರೂ ಒಪ್ಪಬೇಕು. ತೀರ್ಪುಗಾರರು ಸಹ ನ್ಯಾಯಯುತವಾಗಿ ತೀರ್ಪು ನೀಡಬೇಕು ಎಂದರು.
ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕಪನಿಪಾಳ್ಯ ರಮೇಶ್, ಜ್ಞಾನ ಸಂಪಾದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಶಂಕರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಣ್ಣ, ಪ್ರಾಂಶುಪಾಲರು ಹಾಗೂ ಕ್ರೀಡಾಪಟುಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.