ADVERTISEMENT

ತುಮಕೂರು: 17ರಿಂದ ಪೋಲಿಯೊ ಲಸಿಕೆ ಅಭಿಯಾನ

​ಪ್ರಜಾವಾಣಿ ವಾರ್ತೆ
Published 9 ಜನವರಿ 2021, 4:10 IST
Last Updated 9 ಜನವರಿ 2021, 4:10 IST
ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಕುರಿತ ಭಿತ್ತಿಪತ್ರವನ್ನು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಬಿಡುಗಡೆ ಮಾಡಿದರು
ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಕುರಿತ ಭಿತ್ತಿಪತ್ರವನ್ನು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಬಿಡುಗಡೆ ಮಾಡಿದರು   

ತುಮಕೂರು: ಜಿಲ್ಲೆಯಲ್ಲಿ ಜ.17ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ 5 ವರ್ಷದೊಳಗಿನ 2,11,330 ಮಕ್ಕಳಿಗೆ ಪೋಲಿಯೊ ಹನಿ ಹಾಕುವ ಗುರಿ ಹೊಂದಲಾಗಿದೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್, ‘ಕೋವಿಡ್-19 ಮಾರ್ಗಸೂಚಿ ಅನುಸರಿಸಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಲಸಿಕೆ ಗುಣಮಟ್ಟ ಕಾಪಾಡಲು ಜ.10ರಿಂದ 20ರ ವರೆಗೆ ನಿರಂತರವಾಗಿ ವಿದ್ಯುತ್‍ ಸರಬರಾಜು ಮಾಡಬೇಕು. ಭಾನುವಾರವೂ ಶಾಲೆಗಳನ್ನು ತೆರೆದು ‌ಅಭಿಯಾನದ ಕುರಿತು ಶಾಲಾ ಮಕ್ಕಳಿಂದ ಜಾಗೃತಿ ಜಾಥಾ ಹಮ್ಮಿಕೊಳ್ಳಬೇಕು. ಅಂಗನವಾಡಿ ಕೇಂದ್ರಗಳಲ್ಲಿಯೂ ಲಸಿಕಾ ಕೇಂದ್ರಗಳನ್ನು ತೆರೆಯಬೇಕು. ಮನೆ– ಮನೆಗೆಭೇಟಿ ನೀಡಿ ಕರಪತ್ರ,ಭಿತ್ತಿಪತ್ರಗಳನ್ನು ವಿತರಿಸಿ ಪೋಷಕರಿಗೆ ಅರಿವು ಮೂಡಿಸಲು ಕಾರ್ಯ ಕರ್ತೆಯರನ್ನು ನಿಯೋಜಿಸಬೇಕು’ ಎಂದು ಸೂಚಿಸಿದರು.

ರೈಲ್ವೆ ನಿಲ್ದಾಣ, ಬಸ್‍ ನಿಲ್ದಾಣ, ಟೋಲ್‍ಗಳಲ್ಲಿಯೂ ಲಸಿಕಾ ಕೇಂದ್ರಗಳನ್ನು ತೆರೆಯಬೇಕು. ರೈಲು, ಬಸ್ ನಿಲ್ದಾಣದಲ್ಲಿರುವ ಟಿವಿಗಳಲ್ಲಿ ಕಾರ್ಯಕ್ರಮದ ಬಗ್ಗೆ ಮಾಹಿತಿ ಬಿತ್ತರಿಸಬೇಕು ಎಂದರು.

ADVERTISEMENT

ಡಾ.ಕೇಶವರಾಜ್, ‘ಜಿಲ್ಲೆಯಲ್ಲಿ 1,225 ಕೇಂದ್ರ (ಲಸಿಕಾ ಬೂತ್) ಹಾಗೂ 67 ಟ್ರಾನ್ಸಿಟ್ ಲಸಿಕಾ ಕೇಂದ್ರಗಳನ್ನು ತೆರೆಯಲಾಗುವುದು. ಲಸಿಕೆ ನೀಡಲು 221 ವಾಹನಗಳು, 5,070 ಆರೋಗ್ಯ ಸಿಬ್ಬಂದಿ, 276 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ’ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಟಿ.ಎ.ವೀರಭದ್ರಯ್ಯ, ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ.ನಾಗೇಶ್, ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿ ಡಾ.ಮೋಹನ್‍ದಾಸ್, ಡಾ.ಚೇತನ್, ಡಾ.ಮಹಿಮ, ಡಾ.ಪುರುಷೋತ್ತಮ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.ನಟರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.