ತುಮಕೂರು: ಅಧಿಕಾರ ದುರುಪಯೋಗ ಪಡಿಸಿಕೊಂಡವರು, ಭೂ ನುಂಗಣ್ಣರನ್ನು ಶಿಕ್ಷಿಸುವಂತೆ ಕೋರಿ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರು ನಗರದ ಕೋಟೆ ಆಂಜನೇಯಸ್ವಾಮಿ ದೇಗುಲದಲ್ಲಿ ಬುಧವಾರ ವಿಶೇಷ ಪೂಜೆ ಸಲ್ಲಿಸಿದರು. ದೇವರಿಗೆ ಮನವಿ ಸಲ್ಲಿಸಿ ಕೇಳಿಕೊಂಡರು.
ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯಿಂದ ಬಿಜಿಎಸ್ ವೃತ್ತ ಬಳಿ ಪ್ರತಿಭಟನೆ ನಡೆಯಿತು. ಅಲ್ಲಿಂದ ಆಂಜನೇಯ ಸ್ವಾಮಿ ದೇವಸ್ಥಾನದ ವರೆಗೆ ಮೆರವಣಿಗೆ ನಡೆಯಿತು. ಕಾರ್ಯಕರ್ತರು ಡಾ.ಬಿ.ಆರ್.ಅಂಬೇಡ್ಕರ್, ಸಂವಿಧಾನ ಪೀಠಿಕೆ, ಮಹಾತ್ಮ ಗಾಂಧೀಜಿ ಭಾವಚಿತ್ರ ಹಿಡಿದು ಸಾಗಿದರು.
ವೇದಿಕೆಯ ಅಧ್ಯಕ್ಷ ಎಚ್.ಜಿ.ರಮೇಶ್, ‘ಮಧುಗಿರಿ ತಾಲ್ಲೂಕಿನ ತುಮ್ಮಲು ಗ್ರಾಮದ ಸರ್ಕಾರಿ ಜಮೀನು ಪರಭಾರೆ ಮಾಡಿದ್ದಾರೆ. ಸರ್ಕಾರಿ ಆಸ್ತಿಗೆ ಭೂಪರಿವರ್ತನೆ ಮಾಡಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರೇ ಸಹಿ ಮಾಡಿದ್ದಾರೆ. ಅವರು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದರೆ ಇಷ್ಟೆಲ್ಲ ಹೋರಾಟ ಮಾಡಬೇಕಾದ ಅವಶ್ಯಕತೆ ಇರಲಿಲ್ಲ’ ಎಂದು ಹೇಳಿದರು.
ಅಕ್ರಮದ ಕುರಿತು ನಗರ ಠಾಣೆಗೆ ದೂರು ಕೊಟ್ಟ 15 ದಿನಗಳ ನಂತರ ಪೊಲೀಸರು ಹಿಂಬರಹ ನೀಡಿದ್ದಾರೆ. ಮೇಲಧಿಕಾರಿಗಳು ಕೆಳ ಹಂತದ ಅಧಿಕಾರಿಗಳನ್ನು ತಮ್ಮ ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳುವ ಕೆಲಸ ಮಾಡುತ್ತಾರೆ. ಆದರೆ ಪೊಲೀಸರು ಕರ್ತವ್ಯ ನಿರ್ವಹಿಸಲು ಮುಕ್ತ ಅವಕಾಶವಿದ್ದು, ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಈಗಾಗಲೇ ವಕೀಲರ ಮುಖಾಂತರ ನ್ಯಾಯಾಲಯದಲ್ಲಿ ಪಿಸಿಆರ್ ಪ್ರಕರಣ ದಾಖಲಿಸಲಾಗಿದೆ. ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು. ತಪ್ಪು ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗುವುದು ಎಂದರು.
ವೇದಿಕೆ ಪದಾಧಿಕಾರಿಗಳಾದ ವಿಷ್ಣು ವಿಜಯ, ಕೆ.ಜಿ.ದೀಪಕ್, ಕೆ.ಎನ್.ನರಸೇಗೌಡ ಮೊದಲಾದವರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.