ಶಿರಾ: ನಗರದ ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಮಾತನಾಡಿ, ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಕ್ರಿಮಿನಲ್ ಪ್ರಕರಣದ ತನಿಖೆಗೆ ರಾಜ್ಯಪಾಲರು ನೀಡಿರುವ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಮುಖ್ಯಮಂತ್ರಿಗಳಿಗೆ ನ್ಯಾಯಾಂಗದ ಮೇಲೆ ಗೌರವವಿದ್ದರೆ ಪಾರದರ್ಶಕ ತನಿಖೆ ನಡೆಸಲು ಮುಖ್ಯಮಂತ್ರಿ ಸ್ಥಾನಕ್ಕೆ ತಕ್ಷಣ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದರು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತೇಗೌಡ ಮಾತನಾಡಿ, ಬಿಜೆಪಿ ಬೆಂಗಳೂರಿನಿಂದ ಮೈಸೂರುವರೆಗೆ ನಡೆಸಿದ ಪಾದಯಾತ್ರೆಗೆ ಮೊದಲ ಜಯ ದೊರೆತಿದೆ. ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯಬೇಕು ಎಂದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಉಮಾ ವಿಜಯರಾಜು, ಗ್ರಾಮಾಂತರ ಮೋರ್ಚಾ ಅಧ್ಯಕ್ಷ ಚಿಕ್ಕಣ್ಣ, ನಗರಸಭೆ ಸದಸ್ಯ ರಂಗರಾಜು, ಮುಖಂಡರಾದ ಬರಗೂರು ಶಿವಕುಮಾರ್, ವಿಜಯರಾಜು, ಸಂತೇಪೇಟೆ ನಟರಾಜು, ಬರಗೂರು ಯುವರಾಜು, ಕದಿರೆಹಳ್ಳಿ ಮೂರ್ತಿ, ಚಿಕ್ಕನಕೋಟೆ ಕರಿಯಣ್ಣ, ಪ್ರತಾಪ್ ಮಾಗೋಡು, ಎಂಜಲಗೆರೆ ಮೂರ್ತಿ, ಈರಣ್ಣ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.