ADVERTISEMENT

ಬೀದಿ ಬದಿ ವ್ಯಾಪಾರಿಗಳಿಗೆ ಪುನರ್ವಸತಿ ಕಲ್ಪಿಸಿ

ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಫುಟ್‌ಪಾತ್ ವ್ಯಾಪಾರಿಗಳ ಸಂಘದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ಜುಲೈ 2020, 16:28 IST
Last Updated 29 ಜುಲೈ 2020, 16:28 IST
ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಬೀದಿ ಬದಿ ವ್ಯಾಪಾರಿಗಳ ಸಂಘಟನೆ ಮುಖಂಡರು
ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಬೀದಿ ಬದಿ ವ್ಯಾಪಾರಿಗಳ ಸಂಘಟನೆ ಮುಖಂಡರು   

ತುಮಕೂರು: ಕೊರೊನಾ ನೆಪದಲ್ಲಿ ಫುಟ್‌‍ಪಾತ್ ವ್ಯಾಪಾರಿಗಳಿಗೆ ಪುನರ್ವಸತಿ ಕಲ್ಪಿಸದೆ ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಆರೋಪಿಸಿ ಹಾಗೂ ಮಳವಳ್ಳಿಯಲ್ಲಿ ಫುಟ್‍ಪಾತ್ ವ್ಯಾಪಾರಿಗಳ ಮೇಲಿನ ದೌರ್ಜನ್ಯ ಖಂಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಫುಟ್‍ಪಾತ್ ವ್ಯಾಪಾರಿಗಳ ಸಂಘ ಹಾಗೂ ಸಿಐಟಿಯು ಸದಸ್ಯರು ಬುಧವಾರ ಪ್ರತಿಭಟಿಸಿದರು.

ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್, ‘ಫುಟ್‌ಪಾತ್ ವ್ಯಾಪಾರಿಗಳಿಗೆ ಪುನರ್ ವಸತಿ ಕಲ್ಪಿಸುವ ಸಂಬಂಧ ಜಾಗ ಗುರುತಿಸಿ ವ್ಯಾಪಾರಿ ವಲಯಗಳನ್ನು ನಿರ್ಮಿಸಲಾಗುವುದು’ ಎಂದು ಭರವಸೆ ನೀಡಿದರು.

ನಗರ, ಪಟ್ಟಣಗಳಲ್ಲಿ ಬೀದಿಬದಿ ವ್ಯಾಪಾರಿಗಳ ಸ್ಥಳಾಂತರ, ಪುನರ್ ವಸತಿ ಮತ್ತಿತರ ಸಮಸ್ಯೆಗಳು ಎದುರಾದಾಗ ನಗರ ವೆಂಡಿಂಗ್ ಕಮಿಟಿಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕು. ಪೊಲೀಸರು ಏಕಾಏಕಿ ತೆರವುಗೊಳಿಸಬಾರದು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ADVERTISEMENT

ಕಷ್ಟದಲ್ಲಿರುವ ಬೀದಿಬದಿ ವ್ಯಾಪಾರಿಗಳಿಗೆ ರಾಜ್ಯ ಸರ್ಕಾರ ನೆರವು ನೀಡಬೇಕು. ಅಸಂಘಟಿತ ಕಾರ್ಮಿಕರು ಎಂದು ಪರಿಗಣಿಸಿ ಅಂಬೇಡ್ಕರ್ ಸಹಾಯಹಸ್ತ ಯೋಜನೆಯಡಿ ಸ್ಮಾರ್ಟ್‍ಕಾರ್ಡ್ ನೀಡಬೇಕು. ಅವರ ಕುಟುಂಬದ ಆರೋಗ್ಯ ರಕ್ಷಣೆ, ಮಕ್ಕಳ ವಿದ್ಯಾಭ್ಯಾಸ, ವೃದ್ಧಾಪ್ಯದಲ್ಲಿ ಪಿಂಚಣಿ ಯೋಜನೆ ರೂಪಿಸಬೇಕು. ಈಗಾಗಲೇ ಅರ್ಜಿ ಸಲ್ಲಿಸಿರುವ ಬೀದಿಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಬೇಕು. ಸ್ಥಳೀಯ ಸಂಸ್ಥೆಗಳಿಂದ ಸಮೀಕ್ಷೆ ನಡೆಸಬೇಕು ಎಂದು ಮನವಿಯಲ್ಲಿ ಕೋರಿದರು.

ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಕೆ.ಸುಬ್ರಹ್ಮಣ್ಯ, ಖಜಾಂಚಿ ಲಕ್ಷ್ಮಮ್ಮ, ಜಗದೀಶ್, ರಾಜಶೇಖರ್, ರವಿ, ಪಾರ್ವತಮ್ಮ, ಮುತ್ತುರಾಗ್, ವಸೀಂ, ಮಿನಿ ಸಿದ್ಧಿವಿನಾಯಕ ಮಾರುಕಟ್ಟೆ ವ್ಯಾಪಾರಿಗಳ ಸಂಘದ ಶ್ರೀಧರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.