ADVERTISEMENT

ಮತ್ತೆ ಹೋರಾಟಕ್ಕೆ ಸಜ್ಜಾದ ಕುರುಬರು

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2021, 8:39 IST
Last Updated 15 ಫೆಬ್ರುವರಿ 2021, 8:39 IST
ಕುರುಬ ಸಮಾಜವನ್ನು ಎಸ್.ಟಿ ಪಟ್ಟಿಗೆ ಸೇರ್ಪಡೆ ಮಾಡಲು ಒತ್ತಾಯಿಸಿ ಕನಕ ಗುರುಪೀಠ ನಡೆಸಿದ ಪಾದಯಾತ್ರೆ ದಾವಣಗೆರೆಗೆ ಬಂದಿದ್ದ ಸಂದರ್ಭದ ಚಿತ್ರ
ಕುರುಬ ಸಮಾಜವನ್ನು ಎಸ್.ಟಿ ಪಟ್ಟಿಗೆ ಸೇರ್ಪಡೆ ಮಾಡಲು ಒತ್ತಾಯಿಸಿ ಕನಕ ಗುರುಪೀಠ ನಡೆಸಿದ ಪಾದಯಾತ್ರೆ ದಾವಣಗೆರೆಗೆ ಬಂದಿದ್ದ ಸಂದರ್ಭದ ಚಿತ್ರ   

ತುಮಕೂರು: ಪರಿಶಿಷ್ಟ ಪಂಗಡದ ಮೀಸಲಾತಿಗೆ ಒತ್ತಾಯಿಸಿ ಪಾದಯಾತ್ರೆ, ಸಮಾವೇಶ ನಡೆಸಿದ ಕುರುಬ ಸಮುದಾಯದವರು ಈಗ ಮತ್ತೊಮ್ಮೆ ಹೋರಾಟಕ್ಕೆ ಸಜ್ಜಾಗಿದ್ದಾರೆ.

ಮೀಸಲಾತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆ.19ರಂದು ಬೆಂಗಳೂರಿನ ಮೌರ್ಯ ಹೋಟೆಲ್ ವೃತ್ತದ ಎದುರು ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಡಿ.ವೆಂಕಟೇಶಮೂರ್ತಿ ಇಲ್ಲಿ ಸೋಮವಾರ ತಿಳಿಸಿದರು.

ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡದ ಮೀಸಲಾತಿಗೆ ಸೇರ್ಪಡೆ ಮಾಡಲು ಕುಲಶಾಸ್ತ್ರ ಅಧ್ಯಯನದ ವರದಿಯನ್ನು ಸರ್ಕಾರ ಕೂಡಲೇ ತರಿಸಿಕೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

ADVERTISEMENT

ರಾಜ್ಯದಲ್ಲಿ ಈವರೆಗೆ ಜಿಲ್ಲಾ ಜಾತಿ ಪರಿಶೀಲನಾ ಸಮಿತಿಗಳು ಜಾತಿ ಸಿಂಧುತ್ವ ಪ್ರಮಾಣ ಪತ್ರಗಳನ್ನು ನೀಡುತ್ತಿದ್ದವು. ಆದರೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಿಂದ ವರದಿ ಪಡೆದು ಜಾತಿ ಸಿಂಧುತ್ವ ಪ್ರಮಾಣ ಪತ್ರಗಳನ್ನು ನೀಡಬೇಕು ಎಂದು ಸರ್ಕಾರ ಹೊಸದಾಗಿ ಆದೇಶಿಸಿದೆ. ಕೊಡಗು ಹಾಗೂ ಕೆಲ ಜಿಲ್ಲೆಗಳಲ್ಲಿ ಕಾಡು ಕುರುಬ, ಜೇನು ಕುರುಬ ಸೇರಿದಂತೆ ಕುರುಬರ ಐದು ಪಂಗಡಗಳಿಗೆ ಪರಿಶಿಷ್ಟ ಪಂಗಡದ ಮೀಸಲಾತಿ ನೀಡಲಾಗುತ್ತಿದೆ. ಈ ಹೊಸ ಆದೇಶದಿಂದ ಸಮಸ್ಯೆಯಾಗಲಿದ್ದು, ಹಿಂದೆ ಇದ್ದ ನಿಯಮವನ್ನೇ ಅನುಸರಿಸಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ಎಚ್.ಕಾಂತರಾಜು ನೀಡಿರುವ ಜಾತಿ ಗಣತಿ ವರದಿಯನ್ನು ಕೂಡಲೇ ಬಿಡುಗಡೆ ಮಾಡಬೇಕು. ಕುಲಶಾಸ್ತ್ರ ಅಧ್ಯಯನ ನಡೆಸಿ, ಹಿಂದುಳಿದ ವರ್ಗಗಳ ಆಯೋಗದ ವರದಿ ಪಡೆಯದೆ ಮುಂದುವರಿದ ಜಾತಿಗಳನ್ನು 2ಎ ಮೀಸಲಾತಿ ಪಟ್ಟಿಗೆ ಸೇರಿಸಬಾರದು. ಕುರುಬರ ಅಭಿವೃದ್ಧಿ ಪ್ರಾಧಿಕಾರ ರಚನೆಮಾಡಿ ₹500 ಕೋಟಿ ಅನುದಾನ ನೀಡಬೇಕು ಎಂದು ಆಗ್ರಹಿಸಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.