ತುಮಕೂರು: ‘ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವ ಶಾಂತಿ’ ಎಂಬ ಸಂದೇಶಗಳನ್ನು ಜಗದ್ಗುರು ರೇಣುಕಾಚಾರ್ಯರು ಜಗತ್ತಿಗೆ ಸಾರಿದ್ದಾರೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಭಿಪ್ರಾಯಪಟ್ಟರು.
ನಗರದಲ್ಲಿ ಬುಧವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲೆಯ ವೀರಶೈವ, ಲಿಂಗಾಯತ ಸಮಾಜದ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಮಾನವ ಧರ್ಮಕ್ಕೆ ಜಯವಾಗಲಿ ಎಂಬ ಸಂದೇಶದ ಮೂಲಕ ವಿಶ್ವದಲ್ಲಿ ಶಾಂತಿ, ನೆಮ್ಮದಿ ಬಯಸಿದ್ದರು. ವಿಶ್ವಕಂಡ ಮೇರು ವ್ಯಕ್ತಿತ್ವದ ದಾರ್ಶನಿಕರು. ಇಂತಹ ಮಹನೀಯರು ಸದಾ ಸ್ಮರಣೀಯರು ಎಂದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ‘ಶಂಕರಾಚಾರ್ಯ, ರಾಮಾನುಜಾಚಾರ್ಯರ ರೀತಿಯಲ್ಲೇ ಶಕ್ತಿ ವಿಶಿಷ್ಟ ಅದ್ವೈತ ಸಿದ್ಧಾಂತವನ್ನು ರೇಣುಕಾಚಾರ್ಯರು ಪ್ರತಿಪಾದಿಸಿದರು. ರೇಣುಕಾಚಾರ್ಯರು ವೀರಶೈವ ಧರ್ಮ ಸ್ಥಾಪಿಸಿದರೆ, ನಂತರ ಇದನ್ನು ಬಸವಣ್ಣನವರು ಶರಣ ಸಂಸ್ಕೃತಿ ಎಂದು ಪ್ರತಿಪಾದಿಸಿದರು’ ಎಂದು ಹೇಳಿದರು.
ಜಗದ್ಗುರು ಪಂಚಾಚಾರ್ಯ ಸೇವಾ ಟ್ರಸ್ಟ್ ಅಧ್ಯಕ್ಷ ಟಿ.ಆರ್.ಸದಾಶಿವಯ್ಯ, ‘ಧರ್ಮ ಎಲ್ಲಿ ಇರುತ್ತದೆಯೋ ಅಲ್ಲಿ ಶಾಂತಿ ನೆಲೆಸಿರುತ್ತದೆ ಎಂಬ ವಿಚಾರವನ್ನು ರೇಣುಕಾಚಾರ್ಯರು ಪ್ರತಿಪಾದಿಸಿದ್ದರು’ ಎಂದರು.
ಶಿವಶ್ರೀ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜಿ.ಎಸ್.ಸಿದ್ಧರಾಜು, ‘ಧರ್ಮದಿಂದಲೇ ಶಾಂತಿ ಎಂಬ ಸಂದೇಶ ಸಾರಿದ್ದಾರೆ. ಅವರ ದಾರಿಯಲ್ಲಿ ನಾವೆಲ್ಲರೂ ಸಾಗಬೇಕು’ ಎಂದು ತಿಳಿಸಿದರು.
ಜಗದ್ಗುರು ಪಂಚಾಚಾರ್ಯ ಸೇವಾ ಟ್ರಸ್ಟ್ ನಿರ್ದೇಶಕರಾದ ಓಂಕಾರಸ್ವಾಮಿ, ಜಿ.ಎಸ್.ಶ್ರೀಧರ, ಬಸವರಾಜು, ನಟರಾಜು, ವೀರಭದ್ರಸ್ವಾಮಿ, ಸುರೇಶ್ ಕುಮಾರ್ ಉಪಸ್ಥಿತರಿದ್ದರು. ವಿವಿಧ ಸಂಘ ಸಂಸ್ಥೆಗಳ ಕಲಾವಿದರು ಗೀತೆ ಗಾಯನ ನಡೆಸಿಕೊಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.