ADVERTISEMENT

‘ಶಿಷ್ಟಾಚಾರ ಉಲ್ಲಂಘನೆ ಸಲ್ಲದು’

ಪಂಚಾಯಿತಿ ಆಡಳಿತಾಧಿಕಾರಿಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2020, 15:24 IST
Last Updated 10 ಜುಲೈ 2020, 15:24 IST
ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳ ಸಭೆಯಲ್ಲಿ ಶಾಸಕ ಡಿ.ಸಿ.ಗೌರಿಶಂಕರ್ ಮಾತನಾಡಿದರು
ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳ ಸಭೆಯಲ್ಲಿ ಶಾಸಕ ಡಿ.ಸಿ.ಗೌರಿಶಂಕರ್ ಮಾತನಾಡಿದರು   

ತುಮಕೂರು: ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ಬಿಲ್ ಕಲೆಕ್ಟರ್, ಕಂಪ್ಯೂಟರ್ ಆಪರೇಟರ್‌ಗಳು ರೈತರ ಬಳಿ ಹಣಕ್ಕೆ ಬೇಡಿಕೆ ಇಡುವ ಬಗ್ಗೆ ದೂರುಗಳು ಬಂದಿವೆ. ಆಡಳಿತಾಧಿಕಾರಿಗಳು ಇದಕ್ಕೆ ಕಡಿವಾಣ ಹಾಕಬೇಕು. ಕೆಲ ಪಂಚಾಯಿತಿಗಳಲ್ಲಿ ಶಿಷ್ಟಾಚಾರ ಪಾಲಿಸದೆ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಲಾಗುತ್ತಿದೆ. ಇದರಿಂದ ಅಧಿಕಾರಿಗಳ ಸೇವೆಗೆ ಕಪ್ಪುಚುಕ್ಕೆ ಆಗಲಿದೆ ಎಂದು ಶಾಸಕ ಡಿ.ಸಿ.ಗೌರಿಶಂಕರ್ ತಿಳಿಸಿದರು.

ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪಂಚಾಯಿತಿ ಆಡಳಿತಾಧಿಕಾರಿಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಪಂಚಾಯಿತಿಗಳಿಗೆ ಹೊಸದಾಗಿ ನೇಮಕವಾಗಿರುವ ಆಡಳಿತಾಧಿಕಾರಿಗಳು ಯಾರ ಮುಲಾಜಿಗೂ ಒಳಗಾಗದೇ ಬಡವರ ಪರ ಕೆಲಸ ಮಾಡಬೇಕು. ಯಾರ ಒತ್ತಡಕ್ಕೂ ಮಣಿಯದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕು ಎಂದು ಸೂಚಿಸಿದರು.

ADVERTISEMENT

ಕೊರೊನಾ ನಿಯಂತ್ರಣಕ್ಕೆ ಮಾಸ್ಕ್, ಸ್ಯಾನಿಟೈಸರ್ ಖರೀದಿಸಲು ಪಂಚಾಯಿತಿಗಳಿಗೆ ಸಾಧ್ಯವಾಗದಿದ್ದರೆ ಅಗತ್ಯವಿರುವ ಗ್ರಾ.ಪಂ.ಗಳಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ಕೊಡಿಸುವೆ. ತಾಲ್ಲೂಕಿನ 35 ಗ್ರಾ.ಪಂ.ಗಳಿಗೆ ಕೊರೊನಾ ಪರೀಕ್ಷೆ ಯಂತ್ರೋಪಕರಣಗಳನ್ನು ವೈಯಕ್ತಿಕವಾಗಿ ನೀಡುವೆ ಎಂದು ತಿಳಿಸಿದರು.

ಗ್ರಾಮಾಂತರ ಕ್ಷೇತ್ರದಲ್ಲಿ ಅಕ್ರಮವಾಗಿ ನಿವೇಶನಗಳನ್ನು ರೂಪಿಸಲಾಗುತ್ತಿದೆ. ಮೂಲ ಸೌಕರ್ಯಗಳನ್ನು ಒದಗಿಸದೆ ನಿವೇಶನಗಳನ್ನು ಖಾತೆ ಮಾಡಿಸಿದರೆ ಅಧಿಕಾರಿಗಳೇ ಹೊಣೆ ಎಂದು ಎಚ್ಚರಿಸಿದರು.

ಯಲ್ಲಾಪುರ, ಮುತ್ಸಂದ್ರ, ವಡ್ಡರಹಳ್ಳಿ, ಸೋರೆಕುಂಟೆ, ಲಿಂಗದಹಳ್ಳಿಯಲ್ಲಿ ನೀರು ಸಮಸ್ಯೆ ಹೆಚ್ಚಿದೆ. ಹೊನಸಿಗೆರೆಯಲ್ಲಿ ರೈತರ ಕೊಳವೆಬಾವಿಯಿಂದ ನೀರು ಪೂರೈಕೆ ಮಾಡಲಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲು ಮುಂದಿನವಾರ ಕೆಡಿಪಿ ಸಭೆ ಕರೆಯಿರಿ ಎಂದು ತಾ.ಪಂ ಕಾರ್ಯನಿರ್ವಹಣಾಧಿಕಾರಿಗೆ ಸೂಚಿಸಿದರು.

ತಾ.ಪಂ ಸದಸ್ಯ ದೀಪು, ರಂಗಸ್ವಾಮಯ್ಯ, ಮುಖಂಡರಾದ ಹಿರೇಹಳ್ಳಿ ಮಹೇಶ್, ಪಾಲನೇತ್ರಯ್ಯ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.