ತುಮಕೂರು: ಪರಿಶಿಷ್ಟ ಜಾತಿ ಮತ್ತು ವರ್ಗದ ಜನರು ನಿರ್ಣಾಯಕ ಸ್ಥಾನಗಳನ್ನು ಆಕ್ರಮಿಸದಿದ್ದರೆ ಮುಂದಿನ ದಿನಗಳಲ್ಲಿ ಉಳಿಗಾಲ ಇಲ್ಲ ಎಂದು ಕರ್ನಾಟಕ ರಾಜ್ಯ ಎಸ್‌ಸಿ, ಎಸ್‌ಟಿ ಸರ್ಕಾರಿ ನೌಕರರ ಸಮನ್ವಯ ಸಮಿತಿ ಅಧ್ಯಕ್ಷ ಶಿವಶಂಕರ್ ಎಚ್ಚರಿಸಿದರು.
ನಗರದಲ್ಲಿ ಇತ್ತೀಚೆಗೆ ನಡೆದ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ವಿಜೇತರಾದ ಎಸ್‌ಸಿ, ಎಸ್‌ಟಿ ನೌಕರರಿಗೆ ಅಭಿನಂದನೆ ಮತ್ತು ಜಿಲ್ಲೆಯಿಂದ ವರ್ಗಾವಣೆಗೊಂಡ ಅಧಿಕಾರಿಗಳಿಗೆ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಂಬೇಡ್ಕರ್ ಅವರು ರಾಜಕೀಯ ಅಧಿಕಾರ ಎಲ್ಲ ಅಧಿಕಾರಗಳ ಮೂಲ ಕೀಲಿ ಕೈ ಎಂದಿದ್ದಾರೆ. ರಾಜಕೀಯ ಅಧಿಕಾರ ಎಂದರೆ ಶಾಸಕ, ಸಂಸದರೇ ಆಗಬೇಕು ಎಂದಿಲ್ಲ. ಯಾವುದೇ ನಿರ್ಣಾಯಕ ಸ್ಥಾನವೂ ಸಮುದಾಯದ ಅವಕಾಶಗಳನ್ನು ಪೂರೈಸಲು ಅಗತ್ಯವಾದ ನೆರವು ನೀಡಲಿದೆ ಎಂದರು.
ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಪರಿಶಿಷ್ಟ ಜಾತಿ ಮತ್ತು ವರ್ಗಗಳ ನೌಕರರು, ಅದರಲ್ಲಿಯೇ ನಿರ್ಣಾಯಕ ಸ್ಥಾನಗಳನ್ನು ಆಕ್ರಮಿಸಿಕೊಳ್ಳಲು ಮುಂದಾಗಬೇಕು. ಇಲ್ಲದಿದ್ದಲ್ಲಿ ಸ್ಥಾಪಿತ ವ್ಯವಸ್ಥೆಯನ್ನು ಮೆಟ್ಟಿ ನಿಲ್ಲಲ್ಲು ಸಾಧ್ಯವಿಲ್ಲ ಎಂದು ಹೇಳಿದರು.
ಕಾರ್ಯಕ್ರಮದ ಉದ್ಘಾಟಿಸಿದ ಕೆಪಿಟಿಸಿಎಲ್ ಮುಖ್ಯ ಎಂಜಿನಿಯರ್ ಆದಿ ನಾರಾಯಣ್, ಇಂದು ಪರಿಶಿಷ್ಟ ಜಾತಿ ಮತ್ತು ವರ್ಗದ ಸರ್ಕಾರಿ ನೌಕರರು ಬಹಿರಂಗವಾಗಿ ತಮ್ಮ ಜಾತಿ ಹೆಸರು ಹೇಳಲು ಹಿಂಜರಿಯುತ್ತಿದ್ದಾರೆ. ಜಾತಿ ಹೆಸರಿನಲ್ಲಿ ಸಂಘಟಿತರಾಗದಿದ್ದಲ್ಲಿ ಹಲವು ರೀತಿಯಲ್ಲಿ ಹಿನ್ನೆಡೆಗಳನ್ನು ಅನುಭವಿಸಬೇಕಾಗುತ್ತದೆ. ಪೆಟ್ಟು ತಿಂದು ಸುಧಾರಿಸಿಕೊಂಡ ನಂತರವಾದರೂ ನಮ್ಮಲ್ಲಿನ ಭಿನ್ನಾಭಿಪ್ರಾಯ ಮರೆತು ಸಂಘಟಿತರಾಗೋಣ ಎಂದು ಸಲಹೆ ನೀಡಿದರು.
ಸಮನ್ವಯ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ವೈ.ಕೆ.ಬಾಲಕೃಷ್ಣಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದ. ಜಿಲ್ಲೆಯ ವಿವಿಧ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಮತ್ತು ನಿರ್ದೇಶಕರನ್ನು ಅಭಿನಂದಿಸಲಾಯಿತು. ಜಿಲ್ಲೆಯಿಂದ ವರ್ಗಾವಣೆಯಾಗಿರುವ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಡಾ.ದೇವರಾಜ್, ಪರಿಶಿಷ್ಟ ಪಂಗಡದ ಕಲ್ಯಾಣಾಧಿಕಾರಿ ರಾಜಕುಮಾರ್ ಅವರಿಗೆ ಬೀಳ್ಕೊಡುಗೆ ನೀಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.