
ತುಮಕೂರು: ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಮುಂದಿನ ಜನವರಿಯಲ್ಲಿ ಹಿರಿಯರ ಒಲಿಂಪಿಕ್ಸ್ ಕ್ರೀಡಾಕೂಟ ನಡೆಯಲಿದೆ.
ಕ್ರೀಡಾಕೂಟ ನಡೆಯುವ ಸ್ಥಳಕ್ಕೆ ಶುಕ್ರವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಭೇಟಿ ನೀಡಿ ಪರಿಶೀಲಿಸಿದರು. ನಂತರ ಅಧಿಕಾರಿಗಳೊಂದಿಗೆ ಸಿದ್ಧತೆ ಬಗ್ಗೆ ಸಭೆ ನಡೆಸಿದರು.
ಕ್ರೀಡಾ ಕೂಟಕ್ಕೆ ಬರುವ ಕ್ರೀಡಾಪಟುಗಳು, ತೀರ್ಪುಗಾರರಿಗೆ ಸುಸಜ್ಜಿತವಾದ ವಸತಿ, ಊಟದ ವ್ಯವಸ್ಥೆ ಮಾಡಬೇಕು. ನಗರದಲ್ಲಿರುವ ಸರ್ಕಾರಿ, ಖಾಸಗಿ ಶಾಲಾ, ಕಾಲೇಜುಗಳ ಹಾಸ್ಟೆಲ್‍ಗಳಲ್ಲಿ ಕ್ರೀಡಾಪಟುಗಳು ತಂಗಲು ವ್ಯವಸ್ಥೆ ಕಲ್ಪಿಸಬೇಕು. ವಾಸ್ತವ್ಯಕ್ಕೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದು ನಿರ್ದೇಶಿಸಿದರು.
ಕ್ರೀಡಾಕೂಟದ ಯಶಸ್ವಿಗೆ ಈಗಾಗಲೇ ಅಧಿಕಾರಿಗಳು ಹಾಗೂ ಅಧಿಕಾರೇತರ ಸದಸ್ಯರನ್ನು ಒಳಗೊಂಡ ಸಮಿತಿ, ಉಪಸಮಿತಿಗಳನ್ನು ರಚಿಸಲಾಗಿದೆ. ಈ ಸಮಿತಿಗಳು ನಿಗದಿಪಡಿಸಿರುವ ಸಿದ್ಧತಾ ಕಾರ್ಯಗಳನ್ನು ಯಾವುದೇ ಲೋಪವಾಗದಂತೆ ವ್ಯವಸ್ಥಿತವಾಗಿ ಕೈಗೊಳ್ಳಬೇಕೆಂದು ಎಂದರು.
ಜಿ.ಪಂ ಉಪಕಾರ್ಯದರ್ಶಿ (ಅಭಿವೃದ್ಧಿ) ಕೆ.ಪಿ.ಸಂಜೀವಪ್ಪ, ಉಪಕಾರ್ಯದರ್ಶಿ (ಆಡಳಿತ) ಈಶ್ವರಪ್ಪ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ಇತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.