ADVERTISEMENT

ತುಮಕೂರು: ₹7 ಕೋಟಿಯಲ್ಲಿ ಜಕಣಾಚಾರಿ ಭವನ

​ಪ್ರಜಾವಾಣಿ ವಾರ್ತೆ
Published 2 ಜನವರಿ 2026, 7:08 IST
Last Updated 2 ಜನವರಿ 2026, 7:08 IST
ತುಮಕೂರು ತಾಲ್ಲೂಕಿನ ಕೈದಾಳ ಚನ್ನಕೇಶವಸ್ವಾಮಿ ದೇವಾಲಯದ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಂಸ್ಮರಣಾ ಕಾರ್ಯಕ್ರಮದಲ್ಲಿ ಅಮರಶಿಲ್ಪಿ ಜಕಣಾಚಾರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಶಾಸಕರಾದ ಬಿ.ಸುರೇಶ್‌ಗೌಡ, ಜಿ.ಬಿ.ಜ್ಯೋತಿಗಣೇಶ್, ಪ್ರಮುಖರಾದ ನಿಕೇತ್ ರಾಜ್ ಮೌರ್ಯ, ಕೆ.ಎಸ್.ಸಿದ್ಧಲಿಂಗಪ್ಪ, ಪಿ.ಎಲ್.ರಮೇಶ್ ಇತರರು ಪಾಲ್ಗೊಂಡಿದ್ದರು
ತುಮಕೂರು ತಾಲ್ಲೂಕಿನ ಕೈದಾಳ ಚನ್ನಕೇಶವಸ್ವಾಮಿ ದೇವಾಲಯದ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಂಸ್ಮರಣಾ ಕಾರ್ಯಕ್ರಮದಲ್ಲಿ ಅಮರಶಿಲ್ಪಿ ಜಕಣಾಚಾರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಶಾಸಕರಾದ ಬಿ.ಸುರೇಶ್‌ಗೌಡ, ಜಿ.ಬಿ.ಜ್ಯೋತಿಗಣೇಶ್, ಪ್ರಮುಖರಾದ ನಿಕೇತ್ ರಾಜ್ ಮೌರ್ಯ, ಕೆ.ಎಸ್.ಸಿದ್ಧಲಿಂಗಪ್ಪ, ಪಿ.ಎಲ್.ರಮೇಶ್ ಇತರರು ಪಾಲ್ಗೊಂಡಿದ್ದರು   

ತುಮಕೂರು: ಅಮರಶಿಲ್ಪಿ ಜಕಣಾಚಾರಿ ಹೆಸರಿನಲ್ಲಿ ಸ್ಮಾರಕ ಭವನವನ್ನು ₹7 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿದ್ದು, ಶೀಘ್ರವೇ ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಬಿ.ಸುರೇಶ್‌ಗೌಡ ಹೇಳಿದರು.

ತಾಲ್ಲೂಕಿನ ಕೈದಾಳದ ಐತಿಹಾಸಿಕ ಚನ್ನಕೇಶವಸ್ವಾಮಿ ದೇವಾಲಯದ ಆವರಣದಲ್ಲಿ ಗುರುವಾರ ಜಿಲ್ಲಾ ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮುಂದಿನ ದಿನಗಳಲ್ಲಿ ಗೂಳೂರು, ಕೈದಾಳ, ಹೆತ್ತೇನಹಳ್ಳಿಯನ್ನು ಪ್ರವಾಸಿ ತಾಣಗಳಾಗಿ ಅಭಿವೃದ್ಧಿಪಡಿಸಲಾಗುವುದು. ಹೊಯ್ಸಳರ ಕಾಲದ ಅದ್ಭುತ ಶಿಲ್ಪಕಲೆಯ ತಾಣವಾದ ಕೈದಾಳವನ್ನು ಪ್ರವಾಸಿ ಕೇಂದ್ರವಾಗಿ ರೂಪಿಸಬೇಕಿದೆ ಎಂದರು.

ADVERTISEMENT

ಭಾರತೀಯ ಸಂಸ್ಕೃತಿ, ಪರಂಪರೆಯಲ್ಲಿ ಶಿಲ್ಪಕಲೆಗೆ ಉನ್ನತ ಸ್ಥಾನವಿದೆ. ಕಲ್ಲನ್ನು ಕಲೆಯಾಗಿಸುವ ಶಿಲ್ಪಿಗಳು ಕೇವಲ ಕೆಲಸಗಾರರಲ್ಲ. ನಮ್ಮ ಇತಿಹಾಸದ ರಾಯಭಾರಿಗಳು. ಆದರೆ ಈಗ ಆಧುನಿಕತೆಯ ಅಬ್ಬರದಲ್ಲಿ ಶಿಲ್ಪ ಕಲೆ, ಕಲಾವಿದರು ತೆರೆಮರೆಗೆ ಸರಿಯುತ್ತಿದ್ದಾರೆ. ಕಲಾವಿದರನ್ನು ಪ್ರೋತ್ಸಾಹಿಸುವ ಮೂಲಕ ಒಂದು ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಬೇಕಿದೆ ಎಂದು ಸಲಹೆ ಮಾಡಿದರು.

ಶಾಸಕ ಜಿ.ಬಿ.ಜ್ಯೋತಿಗಣೇಶ್, ‘ಜಕಣಾಚಾರಿ ಜನ್ಮಸ್ಥಳ, ಅವರು ನಿರ್ಮಿಸಿದ ಸುಂದರ ಚನ್ನಕೇಶವ ದೇವಾಲಯದ ಆವರಣದಲ್ಲೇ ಸಂಸ್ಮರಣಾ ಕಾರ್ಯಕ್ರಮ ನಡೆಯುತ್ತಿರುವುದು ಹೆಮ್ಮೆಯ ಸಂಗತಿ. ಅಂದಿನ ಇತಿಹಾಸ, ಜಕಣಾಚಾರಿ ಜೀವನ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸವಾಗಬೇಕು ಎಂದು ಅಭಿಪ್ರಾಯಪಟ್ಟರು.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಉಪಾಧ್ಯಕ್ಷ ಎಂ.ನಿಕೇತ್ ರಾಜ್ ಮೌರ್ಯ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು.ಮಿರ್ಜಿ, ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ಎಲ್.ರಮೇಶ್ ಮೊದಲಾದವರು ಉಪಸ್ಥಿತರಿದ್ದರು.

ನಗರದಲ್ಲಿ ಬೈಕ್ ರ‍್ಯಾಲಿಗೆ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಚಾಲನೆ ನೀಡಿದರು.

ತುಮಕೂರಿನಲ್ಲಿ ಗುರುವಾರ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣೆ ಅಂಗವಾಗಿ ಬೈಕ್ ರ್‍ಯಾಲಿ ನಡೆಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.