ಶಿರಾ: ಕಾಡುಗೊಲ್ಲ ಸಮುದಾಯ ಮೌಡ್ಯ ಹಾಗೂ ಮೂಢನಂಬಿಕೆಗಳಿಂದ ಹೊರಬಂದು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಪ್ರಗತಿ ಸಾಧಿಸಬೇಕು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ನಗರದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಶುಕ್ರವಾರ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಉಚಿತ ಹೊಲಿಗೆಯಂತ್ರ ವಿತರಣೆ ಹಾಗೂ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮಂಜೂರಾತಿ ಆದೇಶ ಪತ್ರ ವಿತರಿಸಿ ಮಾತನಾಡಿದರು.
ಸರ್ಕಾರ ಕಾಡುಗೊಲ್ಲ ಸಮುದಾಯವನ್ನು ಮುಖ್ಯವಾಹಿನಿಗೆ ತರಲು ಎಲ್ಲ ರೀತಿಯ ಸಹಕಾರ ನೀಡುತ್ತಿದೆ. ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಶಿರಾದಲ್ಲಿ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ ಸವಲತ್ತು ವಿತರಿಸುತ್ತಿದ್ದು, ನಿಗಮದಿಂದ ತಾಲ್ಲೂಕಿನವರು ಹೆಚ್ಚು ಪ್ರಯೋಜನ ಪಡೆಯುತ್ತಿದ್ದಾರೆ ಎಂದರು.
ಕಾಡುಗೊಲ್ಲ ಅಭಿವೃದ್ಧಿ ನಿಗಮದಲ್ಲಿ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬರಿಗೂ ಸವಲತ್ತು ನೀಡಲಾಗುತ್ತಿದೆ. ಈ ಬಾರಿ ಸಹ ಹೆಚ್ಚು ಮಂದಿ ಅರ್ಜಿ ಸಲ್ಲಿಸಿ ಸವಲತ್ತು ಪಡೆಯಿರಿ ಎಂದರು.
ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು 15 ವರ್ಷದಿಂದ ಹೋರಾಟ ನಡೆಸಲಾಗುತ್ತಿದೆ. ಹಿಂದೆ ಸಚಿವನಾಗಿದ್ದ ಸಮಯದಲ್ಲಿ ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದ ಶಿಫಾರಸು ಮಾಡಲಾಗಿತ್ತು. ಕೇಂದ್ರ ಸರ್ಕಾರ ಇದಕ್ಕೆ ಕೆಲವು ಆಕ್ಷೇಪಣೆಗಳನ್ನು ವ್ಯಕ್ತಪಡಿಸಿ ವಾಪಸ್ ಕಳುಹಿಸಿದ್ದರು. ಅಧಿಕಾರಕ್ಕೆ ಬಂದ ನಂತರ ಆಕ್ಷೇಪಣೆಗಳಿಗೆ ಸೂಕ್ತ ಉತ್ತರ ಹಾಗೂ ದಾಖಲೆಗಳನ್ನು ಒದಗಿಸಿ ಮತ್ತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದು ಶೀಘ್ರ ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗುವುದು ಎಂದರು.
ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ವೆಂಕಟರಾಜು, ತಹಶೀಲ್ದಾರ್ ಸಚ್ಚಿದಾನಂದ ಕುಚನೂರು, ತಾ.ಪಂ ಇಒ ಆರ್.ಹರೀಶ್, ತಾ.ಪಂ ಮಾಜಿ ಸದಸ್ಯ ಸುದರ್ಶನ್, ಗೋಪಾಲ್, ಹಾರೋಗೆರೆ ಮಹೇಶ್, ಈಶ್ವರಪ್ಪ, ತರೂರು ರಂಗನಾಥ ಯಾದವ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.