ADVERTISEMENT

ಪರೀಕ್ಷಾ ಕೊಠಡಿಯಲ್ಲಿ ಅಧ್ಯಯನಕ್ಕೆ ಅವಕಾಶ

ಎಸ್ಸೆಸ್ಸೆಲ್ಸಿ; 144 ಕೇಂದ್ರಗಳಲ್ಲಿ ಪರೀಕ್ಷೆ; 37,306 ವಿದ್ಯಾರ್ಥಿಗಳು ನೋಂದಣಿ

​ಪ್ರಜಾವಾಣಿ ವಾರ್ತೆ
Published 22 ಜೂನ್ 2020, 15:04 IST
Last Updated 22 ಜೂನ್ 2020, 15:04 IST

ತುಮಕೂರು: ಜೂನ್ 25ರಿಂದ ಜುಲೈ 4ರ ವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಜಿಲ್ಲಾಡಳಿತ ಸಕಲ ವ್ಯವಸ್ಥೆ ಮಾಡಿಕೊಂಡಿದೆ. ತುಮಕೂರು ದಕ್ಷಿಣ ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಒಟ್ಟು 144 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ತುಮಕೂರು ಶೈಕ್ಷಣಿಕ ಜಿಲ್ಲೆಯಲ್ಲಿ 23,783, ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ 13,523 ಸೇರಿದಂತೆ ಒಟ್ಟು 37,306 ವಿದ್ಯಾರ್ಥಿಗಳು ನೋಂದಣಿ ಆಗಿದ್ದಾರೆ. 20,329 ಬಾಲಕರು, 16,977 ಬಾಲಕಿಯರು ಇದ್ದಾರೆ.

ಪರೀಕ್ಷಾ ಕೇಂದ್ರಗಳ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿಯೂ ದೈಹಿಕ ಶಿಕ್ಷಣ ಶಿಕ್ಷಕರು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ವಯಂ ಸೇವಕರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ಸಹಕರಿಸಲಿದ್ದಾರೆ.

ADVERTISEMENT

ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರದಲ್ಲಿಯೇ ಆರೋಗ್ಯ ತಪಾಸಣಾ ಕೇಂದ್ರ ತೆರೆದು ವಿದ್ಯಾರ್ಥಿಗಳು ಮಾಸ್ಕ್ ಧರಿಸಿರುವುದನ್ನು ಖಾತ್ರಿಪಡಿಸಿಕೊಳ್ಳಲಾಗುತ್ತದೆ. ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗುತ್ತದೆ. ಪ್ರತಿ ವಿದ್ಯಾರ್ಥಿಗೆ ಸ್ಯಾನಿಟೈಸ್ ಸೌಲಭ್ಯ ಕಲ್ಪಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಕೊಠಡಿ ಹಂಚಿಕೆ, ಕಟ್ಟಡಗಳ ಮಾಹಿತಿಯನ್ನು ಸಂಬಂಧಿಸಿದ ಶಾಲೆಗಳ ಮೂಲಕ ಒಂದು ದಿನ ಮುಂಚಿತವಾಗಿ ತಿಳಿಸಲಾಗುತ್ತದೆ. ಕೊಠಡಿ ಹಂಚಿಕೆಯ ಬಗ್ಗೆ ಜೂನ್ 24ರಂದು ಮುಂಜಾಗ್ರತೆಯೊಂದಿಗೆ ಪರೀಕ್ಷಾ ಕೇಂದ್ರಕ್ಕೆ ತೆರಳಿ ನೋಡಿಕೊಳ್ಳಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿದೆ.

ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಅಳತೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತದೆ. ಈ ವ್ಯಾಪ್ತಿಯಲ್ಲಿ ಬೆಳಿಗ್ಗೆ 7.30ರಿಂದ ಮಧ್ಯಾಹ್ನ 2ರ ವರೆಗೆ ಜೆರಾಕ್ಸ್, ಸ್ಟೇಷನರಿ ಅಂಗಡಿಗಳನ್ನು ತೆರೆಯುವಂತಿಲ್ಲ.

ಅಧ್ಯಯನಕ್ಕೆ ಅವಕಾಶ: ಪರೀಕ್ಷೆಗಳು ಬೆಳಿಗ್ಗೆ 10.30ರಿಂದ ಆರಂಭವಾಗಲಿದ್ದು, ವಿದ್ಯಾರ್ಥಿಗಳು ಬೆಳಿಗ್ಗೆ 8.30ಕ್ಕೆ ಕೇಂದ್ರಗಳಿಗೆ ಪ್ರವೇಶ ಪಡೆಯಬಹುದು. ಪರೀಕ್ಷಾ ಕೇಂದ್ರ ಪ್ರವೇಶಿಸಿದ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಯಲ್ಲಿ 9.45ರ ವರೆಗೆ ಅಧ್ಯಯನ ಮಾಡಿಕೊಳ್ಳಲು ಅವಕಾಶ ಇದೆ. 9.45ರ ನಂತರ ಪುಸ್ತಕಗಳನ್ನು ಕೊಠಡಿ ಹೊರಗೆ ನಿಗದಿತ ಜಾಗದಲ್ಲಿಡಬೇಕು. ವಿದ್ಯಾರ್ಥಿಗಳು ಕಾಯಿಸಿ ಆರಿಸಿದ ನೀರನ್ನು ಮನೆಯಿಂದಲೇ ತರಬೇಕು. ಅವಶ್ಯಕತೆ ಇದ್ದಲ್ಲಿ ಊಟದ ಡಬ್ಬಿಯನ್ನು ಮನೆಯಿಂದಲೇ ತರಬಹುದಾಗಿದೆ.

ಕೆಎಸ್‌ಆರ್‌ಟಿಸಿ ಬಸ್ ಮಾರ್ಗವಿರುವ ಕಡೆಗಳಲ್ಲಿ ಬಸ್‍ಗಳು ಪರೀಕ್ಷಾ ಸಮಯಕ್ಕೆ ಅನುಗುಣವಾಗಿ ಸಂಚರಿಸುತ್ತವೆ. ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಬಸ್ ಮಾರ್ಗ ಇಲ್ಲದ ಕಡೆಗಳಲ್ಲಿ ಪೋಷಕರ ಕೋರಿಕೆ ಮೇರೆಗೆ ಖಾಸಗಿ ಶಾಲಾ ಬಸ್‍ಗಳ ವ್ಯವಸ್ಥೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.