ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ: 35 ಸಾವಿರ ನೋಂದಣಿ

155 ಪರೀಕ್ಷಾ ಕೇಂದ್ರ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2023, 15:37 IST
Last Updated 27 ಮಾರ್ಚ್ 2023, 15:37 IST

ತುಮಕೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಜಿಲ್ಲೆಯಲ್ಲಿ 35,069 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಮಾರ್ಚ್‌ 31ರಿಂದ ಪರೀಕ್ಷೆ ಆರಂಭವಾಗಲಿದೆ.

ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯ 22,259 ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯ 12,810 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಡಿಡಿಪಿಐ ಸಿ. ನಂಜಯ್ಯ ಅವರು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾಹಿತಿ ನೀಡಿದರು.

ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯಲ್ಲಿ 91 ಪರೀಕ್ಷಾ ಕೇಂದ್ರ, ಮಧುಗಿರಿ ವ್ಯಾಪ್ತಿಯಲ್ಲಿ 64 ಪರೀಕ್ಷಾ ಕೇಂದ್ರಗಳಿವೆ ಎಂದರು.

ADVERTISEMENT

ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ‘ಪರೀಕ್ಷೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಲಾಗಿದೆ. ಯಾವುದೇ ಅಕ್ರಮ ನಡೆಯದಂತೆ ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು’ ಎಂದು ಸೂಚಿಸಿದರು.

ಪರೀಕ್ಷಾ ದಿನಗಳಂದು ಕೇಂದ್ರದ ಸುತ್ತಲಿನ 200 ಮೀಟರ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿರಬೇಕು. ನಿರ್ಬಂಧಿತ ಪ್ರದೇಶಗಳಿಗೆ ಯಾವುದೇ ಅನಧಿಕೃತ ವ್ಯಕ್ತಿಗಳಿಗೆ ಪ್ರವೇಶ ನೀಡಬಾರದು ಎಂದು ತಿಳಿಸಿದರು.

ಜಿ.ಪಂ. ಸಿಇಒ ಕೆ. ವಿದ್ಯಾಕುಮಾರಿ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಮರಿಯಪ್ಪ, ಡಿಎಚ್‌ಒ ಡಾ.ಡಿ.ಎನ್‌. ಮಂಜುನಾಥ್‌ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.