ADVERTISEMENT

ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ

156 ಪರೀಕ್ಷಾ ಕೇಂದ್ರ: 35,925 ವಿದ್ಯಾರ್ಥಿಗಳು

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2022, 2:03 IST
Last Updated 28 ಮಾರ್ಚ್ 2022, 2:03 IST

ತುಮಕೂರು: ಕೋವಿಡ್‌ ಕಾರಣದಿಂದಾಗಿ ಕಳೆದ ವರ್ಷ ಎರಡು ದಿನಕ್ಕೆ ಸೀಮಿತವಾಗಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಈ ಬಾರಿ 6 ದಿನಗಳ ಕಾಲ ನಡೆಯಲಿದ್ದು, ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು
ಸಜ್ಜಾಗಿದ್ದಾರೆ.

ಜಿಲ್ಲೆಯಲ್ಲಿ ಸೋಮವಾರದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗುತ್ತಿದ್ದು, ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷಾ ಪೂರ್ವ ಮತ್ತು ನಂತರ ಸ್ಯಾನಿಟೈಸರ್‌ ಮಾಡುವ ಮೂಲಕ ಕೋವಿಡ್‌ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೊರೊನಾದಿಂದಾಗಿ ಪರೀಕ್ಷೆಯಿಂದ ದೂರ ಉಳಿದಿದ್ದ ಮಕ್ಕಳು ಪರೀಕ್ಷೆಗಾಗಿ ಉತ್ಸಾಹದಿಂದ
ಕಾಯುತ್ತಿದ್ದಾರೆ.

ತುಮಕೂರು ಶೈಕ್ಷಣಿಕ ಜಿಲ್ಲೆಯಲ್ಲಿ 22,858 ಹಾಗೂ ಮಧುಗಿರಿಯಲ್ಲಿ 13,067 ವಿದ್ಯಾರ್ಥಿಗಳು ಸೇರಿದಂತೆ ಎರಡೂ ಶೈಕ್ಷಣಿಕ ಜಿಲ್ಲೆಗಳಲ್ಲಿ ಒಟ್ಟು 35,925 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

ADVERTISEMENT

ತುಮಕೂರಿನಲ್ಲಿ 91 ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ 65 ಪರೀಕ್ಷಾ ಕೇಂದ್ರಗಳು ಒಳಗೊಂಡಂತೆಎರಡೂ ಶೈಕ್ಷಣಿಕ ಜಿಲ್ಲೆಗಳಲ್ಲಿ ಒಟ್ಟು 156 ಪರೀಕ್ಷಾ ಕೇಂದ್ರಗಳನ್ನು ಸಿದ್ಧಪಡಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಎಲ್ಲ ಸೌಲಭ್ಯಗಳನ್ನು
ಕಲ್ಪಿಸಲಾಗಿದೆ.

ತುಮಕೂರು ಶೈಕ್ಷಣಿಕ ಜಿಲ್ಲೆಯಲ್ಲಿ ಒಟ್ಟು 680 ಮಂದಿ ಖಾಸಗಿ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು, ಅವರಿಗಾಗಿ 4 ಪ್ರತ್ಯೇಕ ಪರೀಕ್ಷಾ ಕೇಂದ್ರಗಳನ್ನು ಸಿದ್ಧಪಡಿಸಲಾಗಿದೆ. ಅದೇ ರೀತಿ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ 1 ಪರೀಕ್ಷಾ ಕೇಂದ್ರದಲ್ಲಿ 258 ಖಾಸಗಿ ಅಭ್ಯರ್ಥಿಗಳು ಪರೀಕ್ಷೆ
ಬರೆಯಲಿದ್ದಾರೆ.

ಪರೀಕ್ಷಾ ಮಂಡಳಿಯ ಮಾರ್ಗಸೂಚಿಯಂತೆ ಪರೀಕ್ಷೆಯಲ್ಲಿ ಲೋಪವಾಗುವುದನ್ನು ತಡೆಯಲು ಎಲ್ಲ ಕೇಂದ್ರಗಳಲ್ಲಿ ಸಿ.ಸಿ ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪರೀಕ್ಷೆ ನಡೆಯುವ ದಿನಗಳಂದು ವಿದ್ಯಾರ್ಥಿಗಳು ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಪರೀಕ್ಷಾ ಕೇಂದ್ರಗಳಿಗೆ 290 ಪೊಲೀಸ್ ಸಿಬ್ಬಂದಿ, 290 ಪ್ಯಾರಾಮೆಡಿಕಲ್ ಸಿಬ್ಬಂದಿ, 382 ಸ್ವಯಂ ಸೇವಕರನ್ನು ನಿಯೋಜಿಸಲಾಗಿದೆ. ಪ್ರಶ್ನೆ ಪತ್ರಿಕೆ ತಲುಪಿಸಲು 62 ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆಯ ಸಮಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಫಲಿತಾಂಶ ಹೆಚ್ಚಳಕ್ಕೆ ಸೂಕ್ತ ಕ್ರಮಕೈಗೋಳ್ಳುವ ನಿಟ್ಟಿನಲ್ಲಿ ಜಿಲ್ಲೆಯ ಶಿಕ್ಷಕರಿಗೆ ಈಗಾಗಲೇ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳಲ್ಲಿನ ಪರೀಕ್ಷೆಯ ಭಯ ಮತ್ತು ಗೊಂದಲಗಳನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಮ್ಮಿಕೊಂಡಿದ್ದ ನೇರ ಫೋನ್‌–ಇನ್‌ ಕಾರ್ಯಕ್ರಮದಲ್ಲಿ ಹಲವಾರು ವಿದ್ಯಾರ್ಥಿಗಳು ಭಾಗವಹಿಸಿ, ತಮ್ಮ ಗೊಂದಲಗಳಿಗೆ ಪರಿಹಾರ ಕಂಡುಕೊಂಡಿದ್ದರು. ಪರೀಕ್ಷೆಯನ್ನು ಯಾವುದೇ ಗೊಂದಲವಿಲ್ಲದೆ ಧೈರ್ಯವಾಗಿ ಎದುರಿಸುವ ನಿಟ್ಟಿನಲ್ಲಿ ಮಕ್ಕಳಿಗೆ ಪೋಷಕರು ಮತ್ತು ಶಿಕ್ಷಕರು ಧೈರ್ಯ ತುಂಬುವ ಕೆಲಸ
ಮಾಡಿದ್ದಾರೆ.

ಪರೀಕ್ಷೆ ಬರೆಯಲು ಆಗಮಿಸುವ ಅಭ್ಯರ್ಥಿಗಳಿಗೆ ಕೋವಿಡ್‌ ಲಕ್ಷಣಗಳು ಕಂಡು ಬಂದರೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಪ್ರತ್ಯೇಕ ಕೊಠಡಿ ಸಿದ್ಧಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.