ADVERTISEMENT

ತುಮಕೂರು | ರಾಜ್ಯಮಟ್ಟದ ಕಬಡ್ಡಿ ಟೂರ್ನಿ ಶುರು

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2025, 6:43 IST
Last Updated 18 ಅಕ್ಟೋಬರ್ 2025, 6:43 IST
ತುಮಕೂರು ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಕ್ರೀಡಾಪಟುಗಳಿಗೆ ಶುಭ ಕೋರಿದರು. ವಿಧಾನ ಪರಿಷತ್‌ ಸದಸ್ಯ ಡಿ.ಟಿ.ಶ್ರೀನಿವಾಸ್‌, ಜಿಲ್ಲಾಧಿಕಾರಿ ಶುಭ ಕಲ್ಯಾಣ್‌, ಜಿ.ಪಂ ಸಿಇಒ ಜಿ.ಪ್ರಭು ಇತರರು ಉಪಸ್ಥಿತರಿದ್ದರು
ತುಮಕೂರು ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಕ್ರೀಡಾಪಟುಗಳಿಗೆ ಶುಭ ಕೋರಿದರು. ವಿಧಾನ ಪರಿಷತ್‌ ಸದಸ್ಯ ಡಿ.ಟಿ.ಶ್ರೀನಿವಾಸ್‌, ಜಿಲ್ಲಾಧಿಕಾರಿ ಶುಭ ಕಲ್ಯಾಣ್‌, ಜಿ.ಪಂ ಸಿಇಒ ಜಿ.ಪ್ರಭು ಇತರರು ಉಪಸ್ಥಿತರಿದ್ದರು   

ತುಮಕೂರು: ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ ಚಾಲನೆ ನೀಡಲಾಯಿತು.

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ಪಂದ್ಯಾವಳಿ ಆಯೋಜಿಸಲಾಗಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಿಂದ ಬಾಲಕ, ಬಾಲಕಿಯರ ತಂಡಗಳು ಟೂರ್ನಿಯಲ್ಲಿ ಭಾಗವಹಿಸಿವೆ. ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಪಂದ್ಯಗಳು ನಡೆಯಲಿವೆ. 30 ಜಿಲ್ಲೆಗಳಿಂದ 2 ತಂಡಗಳಂತೆ ಒಟ್ಟು 66 ತಂಡಗಳು, 792 ಕ್ರೀಡಾಪಟುಗಳು ಪಾಲ್ಗೊಂಡಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಪಂದ್ಯಾವಳಿಗೆ ಚಾಲನೆ ನೀಡಿದರು. ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.

ADVERTISEMENT

ನಂತರ ಪರಮೇಶ್ವರ ಮಾತನಾಡಿ, ‘ಕ್ರೀಡೆ ವಿದ್ಯಾರ್ಥಿಗಳಲ್ಲಿ ಶಿಸ್ತಿನ ಮನೋಭಾವ, ಸಹಕಾರ ಮತ್ತು ನಾಯಕತ್ವದ ಗುಣ ಬೆಳೆಸುತ್ತದೆ. ಕ್ರೀಡಾಂಗಣವು ವಿದ್ಯಾರ್ಥಿಗಳ ವ್ಯಕ್ತಿತ್ವದ ಬೆಳವಣಿಗೆಯ ಪಾಠಶಾಲೆಯಾಗಿದೆ. ಪಂದ್ಯಾವಳಿಯು ಪ್ರತಿಭೆ ಪ್ರದರ್ಶಿಸಲು ಉತ್ತಮ ವೇದಿಕೆಯಾಗಲಿದೆ. ಸೋಲು ವಿಫಲತೆ ಅಲ್ಲ, ಅದು ಮುಂದಿನ ಗೆಲುವಿನ ದಾರಿ. ಸೋಲಿನಲ್ಲೂ ಪಾಠವಿದೆ. ಸೋಲು ಮುಂದಿನ ಪ್ರಯತ್ನಕ್ಕೆ ಪ್ರೇರಣೆ ನೀಡುತ್ತದೆ’ ಎಂದು ಹೇಳಿದರು.

ವಿಧಾನ ಪರಿಷತ್‌ ಸದಸ್ಯ ಡಿ.ಟಿ.ಶ್ರೀನಿವಾಸ್‌, ‘ಶಿಕ್ಷಣ ಜೀವನದ ಬೆಳಕಾದರೆ, ಕ್ರೀಡೆ, ಕಲೆ, ಸಂಸ್ಕೃತಿ ಮತ್ತು ಸಾಹಿತ್ಯ ಬೆಳಕಿಗೆ ಬಣ್ಣ ಮತ್ತು ಸೌಂದರ್ಯ ನೀಡುತ್ತದೆ. ಇವುಗಳ ಸಮನ್ವಯವೇ ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನಕ್ಕೆ ನಿಜವಾದ ಶಕ್ತಿ’ ಎಂದರು.

ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ.ಚಂದ್ರಶೇಖರ್‌ಗೌಡ, ಜಿಲ್ಲಾಧಿಕಾರಿ ಶುಭ ಕಲ್ಯಾಣ್‌, ಜಿ.ಪಂ ಸಿಇಒ ಜಿ.ಪ್ರಭು, ಜಿಲ್ಲಾ ಪೊಲಿಸ್‌ ವರಿಷ್ಠಾಧಿಕಾರಿ ಕೆ.ವಿ.ಅಶೋಕ್‌, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪ ನಿರ್ದೇಶಕ ಬಾಲಗುರುಮೂರ್ತಿ ಮೊದಲಾದವರು ಹಾಜರಿದ್ದರು.

ತುಮಕೂರಿನಲ್ಲಿ ಶುಕ್ರವಾರ ಜಿಲ್ಲಾ ಆಡಳಿತದಿಂದ ಆಯೋಜಿಸಿದ್ದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.