ADVERTISEMENT

ತುಮಕೂರು: ಬಸ್‌ಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2023, 4:14 IST
Last Updated 28 ನವೆಂಬರ್ 2023, 4:14 IST
ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಹೆಚ್ಚುವರಿ ಬಸ್ ಸಂಚಾರ ಆರಂಭಿಸುವಂತೆ ಆಗ್ರಹಿಸಿ ವಿಜಯಸೇನೆ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು
ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಹೆಚ್ಚುವರಿ ಬಸ್ ಸಂಚಾರ ಆರಂಭಿಸುವಂತೆ ಆಗ್ರಹಿಸಿ ವಿಜಯಸೇನೆ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು   

ತುಮಕೂರು: ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬಸ್‌ ಸಮಸ್ಯೆ ತೀವ್ರವಾಗಿದ್ದು, ಹೆಚ್ಚುವರಿ ಬಸ್ ಸಂಚಾರ ಆರಂಭಿಸುವಂತೆ ಆಗ್ರಹಿಸಿ ವಿಜಯಸೇನೆ ಸಂಘಟನೆಯ ವಿದ್ಯಾರ್ಥಿ ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

‘ಶಕ್ತಿ’ ಯೋಜನೆ ಜಾರಿಯಾದ ನಂತರ ಬಸ್‌ಗಳಲ್ಲಿ ಸ್ಥಳಾವಕಾಶವೇ ಇಲ್ಲವಾಗಿದೆ. ಜನರ ಸಂಚಾರ ಸಾಕಷ್ಟು ಪ್ರಮಾಣದಲ್ಲಿ ಹೆಚ್ಚಾಗಿದ್ದು, ಬಸ್ ಹತ್ತಲು ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ. ಗ್ರಾಮೀಣ ಭಾಗದಲ್ಲಿ ಈ ಸಮಸ್ಯೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಕಾಲದಲ್ಲಿ ಶಾಲಾ, ಕಾಲೇಜುಗಳಿಗೆ ವಿದ್ಯಾರ್ಥಿಗಳು ಹಾಜರಾಗುವುದು ಕಷ್ಟಕರವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಶಕ್ತಿ ಯೋಜನೆ ಜಾರಿ ನಂತರ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದ್ದು, ಅದಕ್ಕೆ ತಕ್ಕಂತೆ ಬಸ್‌ಗಳ ಸಂಖ್ಯೆ ಹೆಚ್ಚಿಸಿಲ್ಲ. ಇರುವ ಬಸ್‌ಗಳಲ್ಲೇ ಪ್ರಯಾಣ ಮಾಡಬೇಕಿದೆ. ಭರ್ತಿಯಾಗಿ ಬರುವ ಬಸ್‌ಗಳು ನಿಲ್ಲಿಸುವುದೇ ಇಲ್ಲ. ವಿದ್ಯಾರ್ಥಿಗಳನ್ನು ಕಂಡರೆ ನಿಲ್ಲಿಸದೆ ಮುಂದೆ ಹೋಗುತ್ತವೆ. ಗ್ರಾಮೀಣ ಭಾಗದ ಮಕ್ಕಳು ನಗರ, ಪಟ್ಟಣ ಪ್ರದೇಶದಕ್ಕೆ ಬಂದು ವಿದ್ಯಾಭ್ಯಾಸ ಮಾಡಲು ಸಾಧ್ಯವಾಗುತ್ತಿಲ್ಲ. ಶಕ್ತಿ ಯೋಜನೆ ನಿಲ್ಲಿಸಬೇಕು. ಇಲ್ಲವೆ ಬಸ್ ಸಂಖ್ಯೆ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು. ಸರ್ಕಾರ, ಕೆಎಸ್‌ಆರ್‌ಟಿಸಿ ವಿರುದ್ಧ ಘೋಷಣೆಗಳನ್ನು ಕೂಗಿದರು.

ADVERTISEMENT

ಕರುನಾಡ ವಿಜಯಸೇನೆ ಜಿಲ್ಲಾ ವಿದ್ಯಾರ್ಥಿ ಘಟಕದ ಅಧ್ಯಕ್ಷ ಪವನ್ ಯಾದವ್, ‘ಹಳ್ಳಿ, ಕುಗ್ರಾಮಗಳಿಂದ ಸಾವಿರಾರು ವಿದ್ಯಾರ್ಥಿಗಳು ಶಾಲಾ, ಕಾಲೇಜುಗಳಿಗೆ ಬರುತ್ತಾರೆ. ನಗರಕ್ಕೆ ಬರಲು ಬಸ್ ಸೌಲಭ್ಯ ಇಲ್ಲವಾಗಿದೆ. ಬಸ್‌ಗಳಲ್ಲಿ ಶಕ್ತಿ ಯೋಜನೆಯ ಉಪಯೋಗ ಪಡೆಯುವ ಮಹಿಳೆಯರೇ ಹೆಚ್ಚು ತುಂಬಿರುತ್ತಾರೆ. ಬಸ್ ತುಂಬಿದ ನಂತರ ವಿದ್ಯಾರ್ಥಿಗಳನ್ನು ಹತ್ತಿಸದೆ ಹೋಗುತ್ತಾರೆ. ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಿದ್ದರೆ, ವಿದ್ಯಾರ್ಥಿಗಳು ಪರದಾಡುವಂತಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸೆಮಿಸ್ಟರ್ ಪದ್ಧತಿ ಇರುವುದರಿಂದ ವಿದ್ಯಾಭ್ಯಾಸ ಕಷ್ಟಕರವಾಗಿದ್ದು, ಬೆಳಗ್ಗೆ ಹಾಗೂ ಸಂಜೆ ವೇಳೆ ಹೆಚ್ಚುವರಿ ಬಸ್‌ಗಳನ್ನು ಓಡಿಸಿ ಅನುಕೂಲ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಅರುಣ್ ಕೃಷ್ಣಯ್ಯ, ‘ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳಬೇಕು. ಹಳ್ಳಿಗಳಿಗೆ ಹೆಚ್ಚುವರಿ ಬಸ್ ಸಂಚಾರ ಆರಂಭಿಸಬೇಕು’ ಎಂದು ಆಗ್ರಹಿಸಿದರು.

ಸಂಘಟನೆ ಪದಾಧಿಕಾರಿಗಳಾದ ಪುನೀತ್, ಹರೀಶ್, ಹೇಮಂತ್, ಮನ್ಸೂರ್, ಯುವರಾಜ್, ಪವನಕುಮಾರ್, ಸಿ.ಎಂಹರೀಶ್ ಮತ್ತಿತರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.