ತುಮಕೂರು: ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ಶನಿವಾರ ತರಗತಿ ಬಹಿಷ್ಕರಿಸಿದರು. ಎಐಡಿಎಸ್‌ಒ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಸ್ವಯಂ ಪ್ರೇರಿತರಾಗಿ ತರಗತಿಯಿಂದ ದೂರ ಉಳಿದರು. ವಿಳಂಬ ನೀತಿ ಅನುಸರಿಸುತ್ತಿರುವ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
‘ಖಾಸಗಿ ಕಾಲೇಜುಗಳಲ್ಲಿ ತರಗತಿ ಪೂರ್ಣಗೊಳಿಸಿ ಸೆಮಿಸ್ಟರ್ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಸರ್ಕಾರಿ ಕಾಲೇಜುಗಳಲ್ಲಿ ಕನಿಷ್ಠ ಉಪನ್ಯಾಸಕರ ನೇಮಕವಾಗಿಲ್ಲ. ವಿದ್ಯಾರ್ಥಿಗಳು 30ರಿಂದ 40 ಕಿ.ಮೀ ಪ್ರಯಾಣಿಸಿ ಕಾಲೇಜಿಗೆ ಬರುತ್ತಿದ್ದಾರೆ. ತರಗತಿಗಳು ನಡೆಯದೆ ಮನೆಗೆ ಮರಳುತ್ತಿದ್ದಾರೆ’ ಎಂದು ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಸಿ.ಬಿ.ಲಕ್ಕಪ್ಪ ಹೇಳಿದರು.
ಸರ್ಕಾರ, ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ. ಒಂದೂ ತರಗತಿ ನಡೆಯದಿದ್ದರೂ ವಿ.ವಿಗಳು ಸೆಮಿಸ್ಟರ್ ಪರೀಕ್ಷೆ ವೇಳಾಪಟ್ಟಿ, ಶುಲ್ಕ ಪಾವತಿಯ ಸುತ್ತೋಲೆ ಹೊರಡಿಸಿರುವುದು ಖಂಡನೀಯ. ತರಗತಿ ನಡೆಸದೆ ಪರೀಕ್ಷೆ ಮಾಡಬಾರದು ಎಂದು ಆಗ್ರಹಿಸಿದರು.
ಎಐಡಿಎಸ್‌ಒ ಸದಸ್ಯರಾದ ಭರತ್, ವೃಷಭ, ಸೈಯದ್, ಪುನೀತ್, ರೋಜಾ ಮತ್ತು ರಕ್ಷಿತಾ ಇತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.