ADVERTISEMENT

ಹಳ್ಳಿಗೆ ಟ್ಯಾಂಕರ್‌ ನೀರೇ ಗಟ್ಟಿ

ಕೊರಟಗೆರೆ: ದುಗ್ಗೇನಹಳ್ಳಿ, ಕಾದಿಲಾಪುರದಲ್ಲಿ ನೀರಿಗೆ ತತ್ವಾರ

ಎ.ಆರ್.ಚಿದಂಬರ
Published 24 ಏಪ್ರಿಲ್ 2020, 5:38 IST
Last Updated 24 ಏಪ್ರಿಲ್ 2020, 5:38 IST
ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿಯ ದುಗ್ಗೇನಹಳ್ಳಿ ಗ್ರಾಮಕ್ಕೆ ಟ್ಯಾಂಕರ್ ಮೂಲಕ ನೀರು ಪೂರೈಕೆ
ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿಯ ದುಗ್ಗೇನಹಳ್ಳಿ ಗ್ರಾಮಕ್ಕೆ ಟ್ಯಾಂಕರ್ ಮೂಲಕ ನೀರು ಪೂರೈಕೆ   

ಕೊರಟಗೆರೆ: ಬಿರು ಬೇಸಿಗೆಯಿಂದ ತಾಲ್ಲೂಕಿನ ಕೆಲವು ಕಡೆಗಳಲ್ಲಿ ಅಂತರ್ಜಲ ಬತ್ತಿದ್ದು, ಕುಡಿಯುವ ನೀರಿಗೆ ಸಮಸ್ಯೆ ಎದುರಾಗಿದೆ.

ನೀರಿನ ಸಮಸ್ಯೆ ಕಂಡುಬಂದ ಗ್ರಾಮಗಳಿಗೆ ತಾಲ್ಲೂಕು ಆಡಳಿತ ಹಾಗೂ ಗ್ರಾಮೀಣ ಕುಡಿಯುವ ನೀರು ಇಲಾಖೆಯು ಟ್ಯಾಂಕರ್ ಮೂಲಕ ನೀರು ಒದಗಿಸುವ ಕೆಲಸ ಮಾಡುತ್ತಿದೆ. ಆದರೂ ಟ್ಯಾಂಕರ್ ನೀರು ಸಾಕಾಗುತ್ತಿಲ್ಲ ಎಂಬ ಕೂಗು ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

ತಾಲ್ಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದುಗ್ಗೇನಹಳ್ಳಿ ಗ್ರಾಮದಲ್ಲಿ ಕೊಳವೆ ಬಾವಿಯಲ್ಲಿ ನೀರು ಬತ್ತಿರುವ ಕಾರಣ 20 ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಟ್ಯಾಂಕರ್ ಮೂಲಕ ಗ್ರಾಮಕ್ಕೆ ನೀರು ಒದಗಿಸಲಾಗುತ್ತಿದೆ. ಗ್ರಾಮದಲ್ಲಿ ಸುಮಾರು 95 ಮನೆಗಳಿವೆ, 500ಕ್ಕೂ ಹೆಚ್ಚು ಜನಸಂಖ್ಯೆ ಇದೆ. ಇದರೊಂದಿಗೆ ಪ್ರತಿ ಮನೆಯಲ್ಲೂ ಜಾನುವಾರುಗಳಿರುವುದರಿಂದ ನೀರು ಸಾಕಾಗುತ್ತಿಲ್ಲ ಎನ್ನುವುದು ಗ್ರಾಮಸ್ಥರ ಅಳಲು.

ADVERTISEMENT

ತಾಲ್ಲೂಕಿನ ಅಕ್ಕಿರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾದಿಲಾಪುರದಲ್ಲೂ ಇದೇ ರೀತಿ ನೀರಿನ ಸಮಸ್ಯೆ ಉಲ್ಬಣಿಸಿದೆ. ಗ್ರಾಮಕ್ಕೆ ಟ್ಯಾಂಕರ್ ನೀರು ಪೂರೈಕೆಯಾಗುತ್ತಿದೆ. ಗ್ರಾಮ ಪಂಚಾಯಿತಿ ಪಿಡಿಓ ಹಾಗೂ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಸಮಸ್ಯೆ ಉಲ್ಬಣವಾಗದಂತೆ ನಿತ್ಯ ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮ ವಹಿಸಿದ್ದಾರೆ.

ಟ್ಯಾಂಕರ್ ನೀರು ಪೂರೈಕೆಗೆ ಈ ವರ್ಷ ನೂತನ ಕ್ರಮ ಅನುಸರಿಸುತ್ತಿದ್ದು, ನೀರು ಪೂರೈಸುವ ವಾಹನಗಳಿಗೆ ಜಿಪಿಆರ್‌ಎಸ್ ಅಳವಡಿಸಿ ಆ ಮೂಲಕ ನಿತ್ಯ ಎಷ್ಟು ನೀರು ಪೂರೈಕೆಯಾಗುತ್ತಿದೆ ಎಂಬ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.