ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರ ಕಚೇರಿ
ಮಧುಗಿರಿ: ಮಧುಗಿರಿ ಶೈಕ್ಷಣಿಕ ಜಿಲ್ಲೆಯಾಗಿ ಹಲವು ವರ್ಷ ಕಳೆದರೂ ಶಿಕ್ಷಕರ ಕೊರತೆಯಿಂದಾಗಿ ಶೈಕ್ಷಣಿಕ ಅಭಿವೃದ್ಧಿ ಕುಂಟುತ್ತಾ ಸಾಗಿದೆ.
ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರಾಥಮಿಕ ಹಂತದಲ್ಲೇ ಬೇರೆಡೆ ದಾಖಲು ಮಾಡುತ್ತಿದ್ದಾರೆ. ಗುಣಮಟ್ಟದ ಶಿಕ್ಷಣಕ್ಕಾಗಿ ಪ್ರತಿವರ್ಷ ಶಾಲೆಗಳನ್ನು ಹುಡುಕುವುದೇ ಪೋಷಕರಿಗೆ ದೊಡ್ಡ ಸವಾಲಾಗಿದೆ. ಖಾಸಗಿ ಶಾಲೆ ಹಾಗೂ ನಗರ ಪ್ರದೇಶಗಳತ್ತಾ ಪೋಷಕರು ಮುಖ ಮಾಡುತ್ತಿದ್ದಾರೆ.
ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಶಿಕ್ಷಕರು, ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು ವರ್ಷ ಕಳೆದಂತೆ ಕಡಿಮೆಯಾಗುತ್ತಿದೆ. ಗುಣಮಟ್ಟದ ಶಿಕ್ಷಣ ಕೊರತೆಯಿಂದ ಪೋಷಕರು ಖಾಸಗಿ ಶಾಲೆಗಳಿಗೆ ಮುಖ ಮಾಡಿದ್ದು, ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿವೆ. ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿ ಮಾಡಿದರೆ ಮತ್ತೆ ಸರ್ಕಾರಿ ಶಾಲೆಗಳಿಗೆ ಜೀವ ಬರಲಿದೆ ಎನ್ನುತ್ತಾರೆ ಪೋಷಕ ರಾಮಪ್ಪ.
ಮಧುಗಿರಿ ಶೈಕ್ಷಣಿಕ ಜಿಲ್ಲೆಗೆ ಮಧುಗಿರಿ, ಕೊರಟಗೆರೆ, ಶಿರಾ ಮತ್ತು ಪಾವಗಡ ತಾಲ್ಲೂಕು ಸೇರ್ಪಡೆಯಾಗಿವೆ. ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಒಟ್ಟು 684 ಸರ್ಕಾರಿ ಪ್ರಾಥಮಿಕ ಶಾಲೆ, 520 ಹಿರಿಯ ಪ್ರಾಥಮಿಕ ಶಾಲೆ ಹಾಗೂ 96 ಪ್ರೌಢಶಾಲೆಗಳಿವೆ. ಸರ್ಕಾರಿ ಕಿರಿಯ, ಹಿರಿಯ ಪ್ರಾಥಮಿಕ ಶಾಲೆಗಳಿಗೆ 3,560 ಮತ್ತು ಸರ್ಕಾರಿ ಪ್ರೌಢಶಾಲೆಗಳಿಗೆ 860 ಶಿಕ್ಷಕರ ಹುದ್ದೆ ಮಂಜೂರಾಗಿವೆ. ಸದ್ಯ ಸರ್ಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 3,003 ಹಾಗೂ ಪ್ರೌಢಶಾಲೆಗಳಲ್ಲಿ 577 ಮಂದಿ ಶಿಕ್ಷಕರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಸರ್ಕಾರಿ ಕಿರಿಯ, ಹಿರಿಯ ಹಾಗೂ ಪ್ರೌಢಶಾಲೆ ಸೇರಿ 840 ಶಿಕ್ಷಕರ ಹುದ್ದೆ ಖಾಲಿ ಇದೆ. ಈ ಸಮಸ್ಯೆಯಿಂದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತಿದೆ. ಕೆಲವು ಪ್ರೌಢಶಾಲೆಗಳಲ್ಲಿ ವಿಷಯವಾರು ಶಿಕ್ಷಕರಿಲ್ಲದಿರುವುದಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಗೊಂಡಿದ್ದಾರೆ.
ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದಾಗಿ ವಿದ್ಯಾರ್ಥಿಗಳಿಗೆ ಪಾಠ ಪ್ರವಚನಗಳು ಕುಂಠಿತವಾಗುತ್ತಿವೆ. ಮಧ್ಯಾಹ್ನದ ಬಿಸಿಯೂಟ, ಮೊಟ್ಟೆ, ಬಾಳೆಹಣ್ಣು, ಸಮವಸ್ತ್ರ, ಪಠ್ಯಪುಸ್ತಕ ವಿತರಣೆ ಸೇರಿದಂತೆ ಹಲವು ಕಾರ್ಯಗಳನ್ನು ಶಿಕ್ಷಕರೇ ಮಾಡಬೇಕಿರುವುದರಿಂದ ಶಿಕ್ಷಕರಿಗೆ ಮತ್ತಷ್ಟು ಒತ್ತಡವಾಗುತ್ತಿದೆ. ಈ ಸಮಸ್ಯೆಯನ್ನು ಸರ್ಕಾರ ಶೀಘ್ರ ಬಗೆಹರಿಸಿದರೆ ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎನ್ನುತ್ತಾರೆ ಜನರು.
ಮಧುಗಿರಿ ಶೈಕ್ಷಣಿಕ ಜಿಲ್ಲೆ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡು ಪಾಠ ಮಾಡಲಾಗುತ್ತಿದೆ.ಮಾಧವರೆಡ್ಡಿ,ಡಿಡಿಪಿಐ
ಮಧುಗಿರಿ ತಾಲ್ಲೂಕಿನಲ್ಲಿ ಶಾಲೆ ಪ್ರಾರಂಭವಾಗುವ ಮುನ್ನವೇ ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡು ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಾಠ ಮಾಡಲಾಗುತ್ತಿದೆ.ಹನುಂತರಾಯಪ್ಪ,ಬಿಇಒ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.