ADVERTISEMENT

ಗುಬ್ಬಿ: ಪಠ್ಯಪುಸ್ತಕ ವಿತರಣೆ

​ಪ್ರಜಾವಾಣಿ ವಾರ್ತೆ
Published 17 ಮೇ 2022, 4:17 IST
Last Updated 17 ಮೇ 2022, 4:17 IST
ಗುಬ್ಬಿ ಪಟ್ಟಣದ ಬಾಲಕರ ಸರ್ಕಾರಿ ಪಾಠ ಶಾಲೆಯಲ್ಲಿ ಮಕ್ಕಳಿಗೆ ಪಠ್ಯಪುಸ್ತಕ ವಿತರಿಸಲಾಯಿತು
ಗುಬ್ಬಿ ಪಟ್ಟಣದ ಬಾಲಕರ ಸರ್ಕಾರಿ ಪಾಠ ಶಾಲೆಯಲ್ಲಿ ಮಕ್ಕಳಿಗೆ ಪಠ್ಯಪುಸ್ತಕ ವಿತರಿಸಲಾಯಿತು   

ಗುಬ್ಬಿ: ಸರ್ಕಾರದ ನಿರ್ದೇಶನದಂತೆ ತಾಲ್ಲೂಕಿನಾದ್ಯಂತ ಸೋಮವಾರ ಶಾಲೆಗಳು ಪ್ರಾರಂಭಗೊಂಡವು.

ಪಟ್ಟಣದ ಸರ್ಕಾರಿ ಬಾಲಕರ ಪಾಠಶಾಲೆಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್, ‘ಕೋವಿಡ್ ಕಾರಣದಿಂದ ಹಿನ್ನಡೆಯಾಗಿದ್ದ ಮಕ್ಕಳ ಕಲಿಕೆ ಸರಿದೂಗಿಸಲು ಈ ಶೈಕ್ಷಣಿಕ ವರ್ಷವನ್ನು ಕಲಿಕಾ ಚೇತರಿಕಾ ವರ್ಷವನ್ನಾಗಿ ಆಚರಿಸಲಾಗುವುದು’ ಎಂದು ಹೇಳಿದರು.

ತಾಲ್ಲೂಕಿನಲ್ಲಿ ಶಾಲೆಗಳನ್ನು ಪ್ರಾರಂಭಿಸಲು ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ. ಈಗಾಗಲೇ, 12 ವರ್ಷ ಮೇಲ್ಪಟ್ಟ ಎಲ್ಲಾ ಮಕ್ಕಳಿಗೂ ಕೋವಿಡ್ ಲಸಿಕೆ ನೀಡಲಾಗಿದೆ. ಹಾಗಾಗಿ, ಪೋಷಕರು ಚಿಂತಿಸಬೇಕಾದ ಅಗತ್ಯವಿಲ್ಲ ಎಂದರು.

ADVERTISEMENT

ಮಕ್ಕಳಿಗೆ ಅಗತ್ಯವಿರುವ ಪಠ್ಯಪುಸ್ತಕಗಳು ಲಭ್ಯವಿವೆ. ಸಕಾಲದಲ್ಲಿ ತಲುಪಿಸಲು ಕ್ರಮಕೈಗೊಳ್ಳಲಾಗಿದೆ. ಶಿಕ್ಷಕರ ಕೊರತೆ ನೀಗಿಸಲು ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ತಹಶೀಲ್ದಾರ್ ಬಿ. ಆರತಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಉತ್ತಮ ಸೌಲಭ್ಯವಿದೆ. ಖಾಸಗಿ ಶಾಲೆಗಳಿಗಿಂತ ಗುಣಮಟ್ಟದ ಶಿಕ್ಷಣ ಪಡೆಯಲು ಸಾಧ್ಯವಿದೆ. ಶಿಕ್ಷಣದಿಂದ ಮಾತ್ರ ನಿರೀಕ್ಷಿತ ಗುರಿ ತಲುಪಲು ಸಾಧ್ಯ. ಮಕ್ಕಳು ಓದಿನ ಕಡೆಗೆ ಗಮನಹರಿಸಬೇಕಿದೆ ಎಂದು ಕರೆ ನೀಡಿದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣಪ್ಪಸ್ವಾಮಿ, ಚನ್ನಬಸವೇಶ್ವರ ಕ್ರೀಡಾ ಸಂಘದ ಶಂಕರ್ ಕುಮಾರ್ ಮಾತನಾಡಿದರು. ಇದೇ ಸಂದರ್ಭದಲ್ಲಿ ಮಕ್ಕಳಿಗೆ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಇಒ ನರಸಿಂಹಯ್ಯ, ಬಿಆರ್‌ಸಿ ಮಧುಸೂದನ್, ಪಿಇಒ ಚಂದ್ರಮ್ಮ, ಮುಖ್ಯೋಪಾಧ್ಯಾಯ ಶಿವಣ್ಣ,ಪಟ್ಟಣ ಪಂಚಾಯಿತಿ ಸದಸ್ಯ ಕೃಷ್ಣಮೂರ್ತಿ, ನಾಮನಿರ್ದೇಶನ ಸದಸ್ಯ ಬಸವರಾಜು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.