ADVERTISEMENT

ತುಮಕೂರು: ಒಳ ಮೀಸಲಾತಿ ಜಾರಿಗೆ ಆಗ್ರಹ

ಜಿಲ್ಲಾಧಿಕಾರಿಗೆ ದಲಿತ ಸಂಘರ್ಷ ಸಮಿತಿ ಸದಸ್ಯರ ಮನವಿ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2020, 16:32 IST
Last Updated 15 ಸೆಪ್ಟೆಂಬರ್ 2020, 16:32 IST
ಒಳಮೀಸಲಾತಿಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಮುಖಂಡರು ತುಮಕೂರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟಿಸಿದರು
ಒಳಮೀಸಲಾತಿಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಮುಖಂಡರು ತುಮಕೂರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟಿಸಿದರು   

ತುಮಕೂರು: ಒಳಮೀಸಲಾತಿ ಅನುಷ್ಠಾನಗೊಳಿಸಬೇಕು, ಪರಿಶಿಷ್ಟರ ಮೇಲೆ ದೌರ್ಜನ್ಯ ನಡೆಸುವವರಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕು, ದೌರ್ಜನ್ಯ, ಅತ್ಯಾಚಾರ ಪ್ರಕರಣಗಳಲ್ಲಿ ತಕ್ಷಣವೇ ಪರಿಹಾರದ ಹಣ ವಿತರಿಸಬೇಕು– ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ನಿರುದ್ಯೋಗ, ಬಡತನ, ಹಸಿವು ತಾಂಡವವಾಡುತ್ತಿದೆ. ಬಡವರು, ಪರಿಶಿಷ್ಟರು, ಕಾರ್ಮಿಕರ ಜೀವಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಇತರರಿಗೆ ಸರಿಸಮನಾಗಿ ದೇವಾಲಯದ ಕಟ್ಟೆಯ ಮೇಲೆ ಕುಳಿತರು ಎಂಬ ಕಾರಣಕ್ಕೆ ಕೊಲೆಗಳು ನಡೆಯುತ್ತಿವೆ. ಪರಿಶಿಷ್ಟರ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರಗಳು ನಡೆಯುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದೌರ್ಜನ್ಯಗಳು ಪದೇ ಪದೇ ನಡೆಯುತ್ತಿದ್ದರೂ ದುಷ್ಕರ್ಮಿಗಳಿಗೆ ಶಿಕ್ಷೆಯಾಗುತ್ತಿಲ್ಲ. ರಾಜಕೀಯ ಒತ್ತಡಗಳಿಗೆ ಮಣಿದು ಪ್ರಕರಣಗಳನ್ನು ಕೈಬಿಡಲಾಗುತ್ತಿದೆ. ಆದ್ದರಿಂದ ಸರ್ಕಾರ ಎಸ್‌ಸಿ, ಎಸ್‌ಟಿ ದೌರ್ಜನ್ಯ ಪ್ರತಿಬಂಧಕ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು.ಹಲ್ಲೆ ಕೋರರ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಅನ್ಯಾಯಕ್ಕೆ ಒಳಗಾದವರಿಗೆ ಪರಿಹಾರ ವಿತರಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಜಾತಿಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ರಚನೆಯಾಗಿದ್ದ ನ್ಯಾ.ಎ.ಜೆ.ಸದಾಶಿವ ಆಯೋಗ 2011ರಲ್ಲಿ ವರದಿ ನೀಡಿದೆ. 9 ವರ್ಷ ಕಳೆದರೂ ಈವರೆಗೂ ಸದನದಲ್ಲಿ ಚರ್ಚಿಸಿ ಕೇಂದ್ರಕ್ಕೆ ಶಿಫಾರಸು ಮಾಡಿಲ್ಲ. ಚುನಾವಣೆ ಸಂದರ್ಭದಲ್ಲಿ ಕೇವಲ ಪ್ರಚಾರಕ್ಕಾಗಿ ಒಳಮೀಸಲಾತಿ ವಿಚಾರ ಪ್ರಸ್ತಾಪಿಸಿ ದಲಿತರ ಮತಗಳನ್ನು ಪಡೆಯುವ ಹುನ್ನಾರವನ್ನು ರಾಜಕೀಯ ಪಕ್ಷಗಳು ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಲಿತ ಸಂಘರ್ಷ ಸಮಿತಿ ಮುಖಂಡರಾದ ಪಿ.ಎನ್.ರಾಮಯ್ಯ, ಎಚ್.ಬಿ.ರಮೇಶ್, ಸುರೇಶ್, ರಾಜೇಶ್, ಸಂಜೀವರಾಯಪ್ಪ, ಪ್ರಸಾದ್, ಚೇಳೂರು ವೆಂಕಟೇಶ್, ಹೊಸಹಳ್ಳಿ ಕೃಷ್ಣಪ್ಪ, ಜಿ.ಆರ್.ಸುರೇಶ್, ಎನ್.ಕೆ.ನಿಧಿಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.