ADVERTISEMENT

ಕುಣಿಗಲ್‌ನಲ್ಲಿ ಬಂದ್‌ ಭಾಗಶಃ ಯಶಸ್ವಿ: ಕೇಂದ್ರ ಸರ್ಕಾರದ ಅಣಕು ಶವಯಾತ್ರೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2021, 3:31 IST
Last Updated 28 ಸೆಪ್ಟೆಂಬರ್ 2021, 3:31 IST
ಕುಣಿಗಲ್‌ನ ಹುಚ್ಚಮಾಸ್ತಿಗೌಡ ವೃತ್ತದಲ್ಲಿ ರೈತಪರ ಸಂಘಟನೆಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರದ ಅಣಕು ಶವಯಾತ್ರೆ ನಡೆಸಿ ಅಂತ್ಯಕ್ರಿಯೆ ನಡೆಸಿದರು
ಕುಣಿಗಲ್‌ನ ಹುಚ್ಚಮಾಸ್ತಿಗೌಡ ವೃತ್ತದಲ್ಲಿ ರೈತಪರ ಸಂಘಟನೆಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರದ ಅಣಕು ಶವಯಾತ್ರೆ ನಡೆಸಿ ಅಂತ್ಯಕ್ರಿಯೆ ನಡೆಸಿದರು   

ಕುಣಿಗಲ್: ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್‌ ಪಟ್ಟಣದಲ್ಲಿ ಭಾಗಶಃ ಯಶಸ್ವಿಯಾಗಿದೆ.

ಸಂಚಾರ ವ್ಯವಸ್ಥೆ, ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಸೇರಿದಂತೆ ಸಾರ್ವಜನಿಕರಿಗೆ ತೊಂದರೆಯಾಗದಿದ್ದರೂ, ಮುಖ್ಯರಸ್ತೆಯ ಅಂಗಡಿಗಳು ಮಾತ್ರ ಮುಚ್ಚಿದ್ದವು.

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಅನಿಲ್ ಕುಮಾರ್ ನೇತೃತ್ವದಲ್ಲಿ ಸಾರಿಗೆ ಸಂಸ್ಥೆ ಬಸ್‌ನಿಲ್ದಾಣದ ಬಳಿ ಸಂಘಟಿತರಾದ ವಿವಿಧ ಸಂಘಟನೆಯ ಪದಾಧಿಕಾರಿಗಳು ಹುಚ್ಚಮಾಸ್ತಿಗೌಡ ವೃತ್ತದವರೆಗೆ ಕೇಂದ್ರ ಸರ್ಕಾರದ ಅಣಕು ಶವಯಾತ್ರೆ ನಡೆಸಿ ಅಂತ್ಯಕ್ರಿಯೆ ನೆರವೇರಿಸಿದರು.‌

ADVERTISEMENT

ಕೇಂದ್ರ ಸರ್ಕಾರ ರೈತ ಮತ್ತು ಕಾರ್ಮಿಕ ವಿರೋಧಿ ನೀತಿ ಅನುಸರಿಸಿದೆ. ಕೋಮುವಾದಿ ಶಿಕ್ಷಣ ನೀತಿಯನ್ನು ಜಾರಿಗೆ ತರಲು ಹೊರಟಿದೆ. ದೇಶದಲ್ಲಿ ಜನತೆ ಕೊರೊನಾ ಸಂಕಷ್ಟದಲ್ಲಿರುವಾಗ ರೈತರೊಂದಿಗೆ, ಕಾರ್ಮಿಕರೊಂದಿಗೆ ಚರ್ಚಿಸದೆ ಕಾಯ್ದೆಗಳಿಗೆ ತಿದ್ದುಪಡಿ ಮಾಡಿದೆ. ರೈತರನ್ನು ಕೃಷಿ ಕ್ಷೇತ್ರದಿಂದ ದೂರವಿಟ್ಟು, ಕಾರ್ಪೋರೇಟ್ ಕಂಪನಿಗಳ ನಿಯಮಗಳನ್ನು ರೂಪಿಸಿ ಅನ್ನದಾತನಿಗೆ ಶಾಶ್ವತವಾಗಿ ಅನ್ಯಾಯ ಮಾಡಲು ಹೊರಟಿದೆ ಎಂದು ಟೀಕಿಸಿದರು.

ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಸಮರ್ಥವಾಗಿ ಕಾರ್ಯ ನಿರ್ವಹಿಸದೆ ಹೊಂದಾಣಿಕೆ ರಾಜಕಾರಣ ಮಾಡುತ್ತಿವೆ. ಆ ಮೂಲಕ ನಾಡಿನ ಜನತೆಗೆ ಅನ್ಯಾಯ ಮಾಡುತ್ತಿರುವ ಫಲವಾಗಿ ರೈತರು, ಕೂಲಿ ಕಾರ್ಮಿಕರ ಬದುಕು ದುಸ್ತರವಾಗಿದೆ. ಮುಂಬರುವ ಚುನಾವಣೆಗಳಲ್ಲಿ ಜನತೆ ರಾಜಕೀಯ ಪ್ರಜ್ಞೆ ಹೆಚ್ಚಿಸಿಕೊಂಡು, ಚುನಾವಣಾ ಅಕ್ರಮಗಳಿಗೆ ಸಾಥ್ ನೀಡದೆ ಪ್ರಾಮಾಣಿಕರ ಮತ್ತು ಜನಪರ ಸೇವಕರ ಆಯ್ಕೆಗೆ ಮನಸ್ಸು ಮಾಡಬೇಕು ಎಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ದಲಿತ ಹಕ್ಕುಗಳ ಸಮಿತಿಯ ಅಧ್ಯಕ್ಷ ರಾಜು ವೆಂಕಟಪ್ಪ, ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಕೃಷ್ಣರಾಜು, ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಶಾಂತಕುಮಾರಿ, ಕಾರ್ಯದರ್ಶಿ ಗೌರಮ್ಮ, ಜಿಲ್ಲಾ ಕಾರ್ಯದರ್ಶಿ ಗುಲ್ಜಾರ್, ಕಾಡುಗೊಲ್ಲರ ಅಸ್ಮಿತೆ ಹೋರಾಟ ಸಮಿತಿ ಅಧ್ಯಕ್ಷ ಜಿ.ಕೆ. ನಾಗಣ್ಣ, ಕೆಆರ್‌ಎಸ್ ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ರಘು ಜಾಣಗೆರೆ, ರೈತ ಹಿತರಕ್ಷಣಾ ಸಮಿತಿ ಜಿಲ್ಲಾ ಅಧ್ಯಕ್ಷ ಕರಿಗೌಡ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.