ADVERTISEMENT

ರಿಂಗ್ ರಸ್ತೆ ಕೆಲಸ ಅವ್ಯವಸ್ಥೆ: ಸಂಸದ ಅಸಮಾಧಾನ

ಅಮಾನಿಕೆರೆ ಒತ್ತುವರಿ ತೆರವಿಗೆ ಜಿಲ್ಲಾಧಿಕಾರಿ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2021, 4:29 IST
Last Updated 1 ಅಕ್ಟೋಬರ್ 2021, 4:29 IST

ತುಮಕೂರು: ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಗರದ ರಿಂಗ್ ರಸ್ತೆಯಲ್ಲಿ ನಡೆಯುತ್ತಿರುವ ಕಾಮಗಾರಿಗಳು ಅವೈಜ್ಞಾನಿಕವಾಗಿದ್ದು, ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿ ಬಂದಿವೆ ಎಂದು ಸಂಸದ ಜಿ.ಎಸ್. ಬಸವರಾಜು ಅವರು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬುಧವಾರ ಸ್ಮಾರ್ಟ್ ಸಿಟಿ ಸಮನ್ವಯ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿ, ‘ಯುಜಿಡಿ ಹಾಗೂ ಕೇಬಲ್ ಅಳವಡಿಸುವ ಕಾಮಗಾರಿ ನೆಪದಲ್ಲಿ ಅಗೆದಿರುವ ಗುಂಡಿಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ವಾಹನಗಳ ಸುಗಮ ಸಂಚಾರ ಕಷ್ಟಸಾಧ್ಯವಾಗಿದೆ. ಹಾಗಾಗಿ, ಕಾಮಗಾರಿ ವೇಳೆ ಅಗೆದಿರುವ ಗುಂಡಿಗಳನ್ನು ಸರಿಯಾಗಿ ಮುಚ್ಚಿ, ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಬೇಕು’ ಎಂದು
ಸೂಚಿಸಿದರು.

ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ‘ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಈ ಯೋಜನೆ ವ್ಯಾಪ್ತಿಯಲ್ಲಿ ಕೈಗೊಂಡಿರುವ ಯುಜಿಡಿ ಕಾಮಗಾರಿ, ಬಾಕ್ಸ್ ಚರಂಡಿ ನಿರ್ಮಾಣ ಸೇರಿದಂತೆ ವಿವಿಧ ಕೆಲಸಗಳನ್ನು ತ್ವರಿತವಾಗಿ ಮುಗಿಸಬೇಕು’ ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.

ADVERTISEMENT

ಅಮಾನಿಕೆರೆ ಅಂಗಳದ ಅಕ್ರಮ ಒತ್ತುವರಿ ತೆರವುಗೊಳಿಸಬೇಕು. ಕೆರೆಯನ್ನು ಅಭಿವೃದ್ಧಿಪಡಿಸಿ ನಿರ್ಮಿಸಿರುವ ಸೈನ್ಸ್ ಥೀಮ್ ಪಾರ್ಕಿನ ನಿರ್ವಹಣೆಯನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಹಿಸಬೇಕು. ಸಂಚಾರಿ ವ್ಯಾಪಾರಸ್ಥರು ಅತಿಕ್ರಮಿಸಿಕೊಂಡಿರುವ ಪಾದಚಾರಿ ಮಾರ್ಗವನ್ನು ತೆರವುಗೊಳಿಸಲು ಕ್ರಮವಹಿಸುವಂತೆ ಪಾಲಿಕೆ ಆಯುಕ್ತೆ ರೇಣುಕಾ ಅವರಿಗೆ ನಿರ್ದೇಶನ
ಮಾಡಿದರು.

75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಸ್ಮಾರ್ಟ್ ಸಿಟಿ ಲಿಮಿಟೆಡ್‍ನಿಂದ ಅ. 2ರಂದು ಬೆಳಿಗ್ಗೆ 6ರಿಂದ 9 ಗಂಟೆಯವರೆಗೆ ನಗರದ ಟೌನ್‍ಹಾಲ್ ವೃತ್ತದಿಂದ ರಿಂಗ್ ರಸ್ತೆವರೆಗೆ ಸೈಕಲ್ ಜಾಥಾ ಹಾಗೂ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು
ತಿಳಿಸಿದರು.

ದಿಶಾ ಕಮಿಟಿ ಸದಸ್ಯ ಕುಂದರನಹಳ್ಳಿ ರಮೇಶ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರಂಗಸ್ವಾಮಿ, ಪಾಲಿಕೆ ಆಯುಕ್ತೆ ರೇಣುಕಾ, ಎಂಜಿನಿಯರ್ ಬಸವರಾಜಗೌಡ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.