
ತಿಪಟೂರು: ನಗರದ ಕಲ್ಪತರು ಕಾಲೇಜು ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಸಹಯೋಗದೊಂದಿಗೆ ಮೆಟ್ರಿಕ್ ನಂತರದ ವಸತಿನಿಲಯಗಳ ನಿಲಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಾಗಾರ ನಡೆಯಿತು.
ಉದ್ಘಾಟಿಸಿ ಮಾತನಾಡಿದ ಉಪವಿಭಾಗಾಧಿಕಾರಿ ಬಿ.ಕೆ.ಸಪ್ತಶ್ರೀ, ಯುಪಿಎಸ್‌ಸಿ ಅಥವಾ ಇನ್ನಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಗೆಲ್ಲುವುದು ಅಸಾಧ್ಯವಲ್ಲ. ಆದರೆ ಗುರಿ ಇರಿಸಿಕೊಂಡು ನಿರಂತರ ಅಭ್ಯಾಸ ಮಾಡಬೇಕು. ಶ್ರದ್ಧೆ, ಪ್ರಯತ್ನ ಇದ್ದರೆ ಯಾವುದೂ ಅಸಾಧ್ಯವಲ್ಲ ಎಂದು ತಿಳಿಸಿದರು.
ಸರ್ಕಾರ ಬಿಸಿಎಂ ವಿದ್ಯಾರ್ಥಿಗಳಿಗಾಗಿಯೇ ವಿಶೇಷ ತರಬೇತಿ ಶಿಬಿರಗಳನ್ನು ಆಯೋಜಿಸುತ್ತಿದೆ. ಅದಕ್ಕಾಗಿ ಪರೀಕ್ಷೆಗಳನ್ನು ನಡೆಸಿ ಅದರಲ್ಲಿ ತೇರ್ಗಡೆ ಹೊಂದಿದವರಿಗೆ ಉಚಿತವಾಗಿ ದೆಹಲಿ, ಬೆಂಗಳೂರು ಅಥವಾ ಹೈದರಾಬಾದ್‌ಗೆ ಕಳುಹಿಸಿ ತರಬೇತಿ ನೀಡುತ್ತದೆ. ವಸತಿಯನ್ನೂ ಉಚಿತವಾಗಿ ನೀಡುತ್ತದೆ ಎಂದರು.
ಎಸ್‌ವಿಪಿ ಕಾಲೇಜು ಪ್ರಾಂಶುಪಾಲ ರೇಣುಕಯ್ಯ ಮಾತನಾಡಿ, ಎಲ್ಲ ಕ್ಷೇತ್ರಗಳಲ್ಲೂ ಸ್ಪರ್ಧೆ ಇದೆ. ಅವಕಾಶಗಳೂ ಇವೆ. ದೂರದೃಷ್ಟಿ ಇಟ್ಟುಕೊಂಡು ಅಭ್ಯಾಸ ಮಾಡಿ, ಪ್ರತಿದಿನ ದಿನಪತ್ರಿಕೆಗಳನ್ನು ಓದಿ. ವರ್ತನೆಗಳ ಪರಿವರ್ತನೆಯೇ ಶಿಕ್ಷಣ ಎಂದರು.
ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಜಾಕ್ಷಮ್ಮ ಮಾತನಾಡಿ, ಶಿಕ್ಷಣದ ನಂತರ ಮುಂದೇನು ಎನ್ನುವ ಪ್ರಶ್ನೆಗೆ ಉತ್ತರ ಹಾಗೂ ಇರುವ ಗೊಂದಲವನ್ನು ಪರಿಹರಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲು ಆದೇಶಿಸಿದೆ. ಶಿಕ್ಷಣ ತಜ್ಞರು, ವೃತ್ತಿಪರರು, ಸಂಪನ್ಮೂಲ ವ್ಯಕ್ತಿಗಳನ್ನು ಕರೆಸಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ಎಂ.ಸುದರ್ಶನ್, ಸಂಪನ್ಮೂಲ ವ್ಯಕ್ತಿಗಳಾದ ಪ್ರದೀಪ್, ನಿಂಗಪ್ಪ, ಬಿಸಿಎಂ ಇಲಾಖೆಯ ಕಾಂತರಾಜು, ಇತರೆ ಅಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.