ADVERTISEMENT

ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ನಗರಸಭೆ ಅಧಿಕಾರಿ!

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2021, 20:48 IST
Last Updated 25 ಅಕ್ಟೋಬರ್ 2021, 20:48 IST
ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಭಾಗವಹಿಸಿದ್ದ ನಗರಸಭೆ ಪೌರಾಯುಕ್ತ ಉಮಾಕಾಂತ್ (ಎಡಗಡೆ ಇರುವವರು)
ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಭಾಗವಹಿಸಿದ್ದ ನಗರಸಭೆ ಪೌರಾಯುಕ್ತ ಉಮಾಕಾಂತ್ (ಎಡಗಡೆ ಇರುವವರು)   

ತಿಪಟೂರು: ನಗರದಲ್ಲಿ ನಡೆದ ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ನಗರಸಭೆ ಪೌರಾಯುಕ್ತ ಉಮಾಕಾಂತ್ ಭಾಗವಹಿಸಿದ್ದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ನಗರದ ಗುರುಕುಲ ಕಾಲೇಜು ಆವರಣದಲ್ಲಿ ಆರ್‌ಎಸ್‌ಎಸ್ ಪ್ರಾಥಮಿಕ ಶಿಕ್ಷಾ ವರ್ಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಂಗವಾಗಿ ಶನಿವಾರ ಸಂಜೆ ನಡೆದ ಪಥ ಸಂಚಲನದಲ್ಲಿ ಆರ್‌ಎಸ್‌ಎಸ್ಗಣವೇಷಧಾರಿಯಾಗಿ ಭಾಗವಹಿಸಿದ್ದಾರೆ. ಮೆರವಣಿಗೆಯಲ್ಲಿ ಕಾರ್ಯಕರ್ತರ ಜತೆ ಹೆಜ್ಜೆ ಹಾಕಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹಲವರು ಈ ಚಿತ್ರವನ್ನು ಹಂಚಿಕೊಂಡಿದ್ದು, ಪರ– ವಿರೋಧ ಚರ್ಚೆಗಳು ನಡೆಯುತ್ತಿವೆ. ಸರ್ಕಾರಿ ಅಧಿಕಾರಿಯಾಗಿ ಇದ್ದುಕೊಂಡು ಒಂದು ಸಂಘಟನೆ ನಡೆಸುವ ಕಾರ್ಯಕ್ರಮದಲ್ಲಿ ಸಾರ್ವಜನಿಕವಾಗಿ ಪಾಲ್ಗೊಂಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ADVERTISEMENT

ಈ ಹಿಂದೆ ತಾಲ್ಲೂಕಿನ ಶಾಸಕರು, ಮಂತ್ರಿ ಆದ ವೇಳೆ ನಗರದ ಕೆಂಪಮ್ಮದೇವಿ ದೇಗುಲದಲ್ಲಿ ಮಡೆಸ್ನಾನ ಮಾಡಿ ಪೂಜಾ ಕೈಂಕರ್ಯದಲ್ಲಿ ತೊಡಗಿದ್ದರು. ಆ ವೇಳೆಯೂ ನಾಗರಿಕರಿಂದ ಭಾರೀ ಆಕ್ಷೇಪ ವ್ಯಕ್ತವಾಗಿತ್ತು.

‘ಸರ್ಕಾರಿ ನೌಕರರು ದೇಶದ್ರೋಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರದ ಸಂಘಟನೆಯ ಕಾರ್ಯಗಳಲ್ಲಿ ಭಾಗವಹಿಸಬಹುದು. 30 ವರ್ಷಗಳಿಂದ ಆರ್‌ಎಸ್‌ಎಸ್ ಕಾರ್ಯಕರ್ತನಾಗಿದ್ದು,ಪಥ ಸಂಚಲನದಲ್ಲಿ ಭಾಗವಹಿಸಿದ್ದೇನೆ’ಎಂದು ಉಮಾಕಾಂತ್ಸ್ಪಷ್ಟಪಡಿಸಿದರು.

ಪೌರಾಯುಕ್ತರ ಧೋರಣೆ ಖಂಡಿಸಿ ಕಾಂಗ್ರೆಸ್‌ ತಾಲ್ಲೂಕು ಘಟಕದಿಂದ ಪ್ರತಿಭಟನೆ ನಡೆಸಿ ಶಿಸ್ತುಕ್ರಮಕ್ಕೆ ಆಗ್ರಹಿಸಿ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.