
ತಿಪಟೂರು: ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಸರ್ಕಾರದ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯೋಜನೆಯಡಿ ರೈತರಿಂದ ರಾಗಿ ಖರೀದಿ ಪ್ರಕ್ರಿಯೆಗೆ ಶಾಸಕ ಕೆ.ಷಡಕ್ಷರಿ ಬುಧವಾರ ಚಾಲನೆ ನೀಡಿದರು.
2025-26ನೇ ಸಾಲಿನಲ್ಲಿ ಪ್ರತಿ ಕ್ವಿಂಟಲ್‌ಗೆ ₹4,886 ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ ಮಾಡಲಾಗುತ್ತಿದೆ. ಖರೀದಿ ಪ್ರಕ್ರಿಯೆಯಲ್ಲಿ ಪಾರದರ್ಶತೆ ಹಾಗೂ ಗುಣಮಟ್ಟಕ್ಕೆ ಆದ್ಯತೆ ನೀಡಲಾಗುತ್ತಿದೆ. ರೈತರು ಸ್ವತಃ ಖರೀದಿ ಕೇಂದ್ರಕ್ಕೆ ಬಂದು ಬಯೊಮೆಟ್ರಿಕ್ ನೀಡಿ ರಾಗಿ ನೀಡಬೇಕು ಎಂದರು.
ಖರೀದಿ ಕೇಂದ್ರದಲ್ಲಿ ಯಾವುದೇ ಅವ್ಯವಹಾರ ನಡೆದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ತಾಲ್ಲೂಕಿನಲ್ಲಿ ಖರೀದಿಯಾದ ರಾಗಿಯನ್ನು ಸ್ಥಳೀಯ ಪಡಿತರ ವಿತರಣಾ ವ್ಯವಸ್ಥೆ ಮೂಲಕವೇ ವಿತರಿಸಲಾಗುತ್ತದೆ. ಸಾರ್ವಜನಿಕ ಉಪಯೋಗಕ್ಕೆ ಬರುವ ರಾಗಿ ಶುದ್ಧವಾಗಿರುವಂತೆ ಅಧಿಕಾರಿಗಳು ವಿಶೇಷ ಗಮನ ಹರಿಸಬೇಕು ಎಂದರು.
ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಿಲ್ಲಾ ವ್ಯವಸ್ಥಾಪಕ ತನ್ವೀರ್ ಅಲಿ ಮಾತನಾಡಿ, ಸರ್ಕಾರದ ನಿರ್ದೇಶನದಂತೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ನಡೆಯುತ್ತಿದೆ. ತಾಲ್ಲೂಕಿನಲ್ಲಿ 10,400 ರೈತರು ನೋಂದಣಿಯಾಗಿದ್ದು 2.38 ಲಕ್ಷ ಕ್ವಿಂಟಲ್ ಖರೀದಿ ಮಾಡಲಾಗುವುದು. ಖರೀದಿಗೆ ಅಗತ್ಯ ಗೋಣಿಚೀಲಗಳನ್ನು ಈಗಾಗಲೇ ಸರಬರಾಜು ಮಾಡಲಾಗಿದೆ ಎಂದು ತಿಳಿಸಿದರು.
ತಹಶೀಲ್ದಾರ್ ಮೋಹನ್‌ಕುಮಾರ್ ಮಾತನಾಡಿ, ಖರೀದಿ ಕೇಂದ್ರದಲ್ಲಿ ಮೂಲಸೌಕರ್ಯಗಳನ್ನು ಒದಗಿಸಲಾಗಿದೆ. ನೋಂದಣಿ ಮಾಡಿಕೊಂಡಿರುವ ಎಲ್ಲಾ ರೈತರ ರಾಗಿ ಖರೀದಿ ಮಾಡಲಾಗುವುದು ಎಂದರು.
ತಾ.ಪಂ. ಮಾಜಿ ಅಧ್ಯಕ್ಷ ನ್ಯಾಕೇನಹಳ್ಳಿ ಸುರೇಶ್, ಕೃಷಿಕ ಸಮಾಜದ ಅಧ್ಯಕ್ಷ ಯೋಗೇಶ್, ಉಪಾಧ್ಯಕ್ಷ ಮೋಹನ್‌ಕುಮಾರ್, ನಿರ್ದೇಶಕ ಯೋಗಾನಂದಮೂರ್ತಿ ಹೊಗವನಘಟ್ಟ, ಎಪಿಎಂಸಿ ಕಾರ್ಯದರ್ಶಿ ನ್ಯಾಮೇಗೌಡ, ಆಹಾರ ಇಲಾಖೆ ಶಿರಸ್ತೇದಾರ್ ಕಿರಣ್, ಆಹಾರ ನಿರೀಕ್ಷಕ ರೇಣುಕಪ್ರಸಾದ್, ರಾಗಿ ಖರೀದಿ ಅಧಿಕಾರಿ ರುದ್ರಪ್ಪ, ದಕ್ಷಿಣಮೂರ್ತಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.