ADVERTISEMENT

ನಾಳೆ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: ಮೊಬೈಲ್ ನಿಷೇಧ

​ಪ್ರಜಾವಾಣಿ ವಾರ್ತೆ
Published 19 ಜೂನ್ 2019, 16:35 IST
Last Updated 19 ಜೂನ್ 2019, 16:35 IST
ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದರು
ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದರು   

ತುಮಕೂರು: ದಕ್ಷಿಣ ಶೈಕ್ಷಣಿಕ ಜಿಲ್ಲೆಯ 14 ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಯ 8 ಸೇರಿದಂತೆ 22 ಪರೀಕ್ಷಾ ಕೇಂದ್ರಗಳಲ್ಲಿ ಶುಕ್ರವಾರ (ಜೂನ್ 21)ದಿಂದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ನಡೆಯಲಿವೆ. ಜೂನ್ 28ರವರೆಗೆ ಪರೀಕ್ಷೆ ನಡೆಯಲಿವೆ. ಪರೀಕ್ಷಾ ಕೇಂದ್ರದೊಳಗೆ ಮೊಬೈಲ್‌ ತೆಗೆದುಕೊಂಡು ಹೋಗುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ,‘ ಕಳೆದ ಬಾರಿ ಮುಖ್ಯ ಪರೀಕ್ಷೆ ನಡೆದಾಗ ಮೊಬೈಲನ್ನು ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋದ ಪ್ರಕರಣ ಜಿಲ್ಲೆಯನ್ನು ರಾಜ್ಯದಲ್ಲಿ ಗುರುತಿಸುವಂತಾಯಿತು. ಇಂತಹ ಪ್ರಮಾದ ಆಗಬಾರದು’ ಎಂದು ಎಚ್ಚರಿಕೆ ನೀಡಿದರು.

‘ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಪರೀಕ್ಷಾ ಕೇಂದ್ರದಲ್ಲಿರುವ ಯಾರ ಬಳಿಯೂ ಮೊಬೈಲ್ ಇರಕೂಡದು. ಈ ಬಗ್ಗೆ ಮುಖ್ಯ ಅಧೀಕ್ಷಕರು ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಇರುವ ಮಾಹಿತಿ ಅಥವಾ ಬೇರೆ ರೀತಿಯ ಅವಘಡಗಳು ಸಂಭವಿಸಿದ್ದಲ್ಲಿ ಮುಖ್ಯ ಅಧೀಕ್ಷಕರ ಮೇಲೆ ಕ್ರಮ ಜರುಗಿಸಲಾಗುವುದು’ ಎಂದು ಹೇಳಿದರು.

ADVERTISEMENT

ಉಪನಿರ್ದೇಶಕಿ ಎಂ.ಆರ್.ಕಾಮಾಕ್ಷಿ ಮಾತನಾಡಿ,‘ ತುಮಕೂರಿನ 4578 ಹಾಗೂ ಮಧುಗಿರಿಯ 2020 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿ ಕೊಂಡಿದ್ದು, ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಅಗತ್ಯ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಡಯಟ್ ಪ್ರಾಂಶುಪಾಲರು, ಜಿಲ್ಲಾ ಖಜಾನಾಧಿಕಾರಿಗಳು,ಪರೀಕ್ಷಾ ನೋಡಲ್ ಅಧಿಕಾರಿಗಳು, ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.