ತುಮಕೂರಿನಲ್ಲಿ ಸೋಮವಾರ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು.
ತುಮಕೂರು: ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಕಚೇರಿ ಮುಂಭಾಗ ಬಿಜೆಪಿ ಸೋಮವಾರ ಪ್ರತಿಭಟನೆ ನಡೆಸಿತು.
‘ಫಲಾನುಭವಿಗಳ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ವಂಚಿಸಲಾಗಿದೆ. ನಕಲಿ ಖಾತೆಗಳಿಗೆ ಹಣ ವರ್ಗಾವಣೆ ಮಾಡಿ, ನೈಜ ಫಲಾನುಭವಿಗಳಿಗೆ ಮೋಸ ಮಾಡಲಾಗಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಂಡು ಶಿಕ್ಷೆಗೆ ಗುರಿ ಪಡಿಸಬೇಕು’ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು. ನಿಗಮದ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಶಾಸಕ ಬಿ.ಸುರೇಶ್‍ಗೌ, ‘ರಾಜ್ಯ ಸರ್ಕಾರ ಅಭಿವೃದ್ಧಿ ಮರೆತು ಹಗರಣಗಳಲ್ಲೇ ಮುಳುಗಿದೆ. ವಾಲ್ಮೀಕಿ ನಿಗಮದ ₹178 ಕೋಟಿ ಚುನಾವಣೆಗೆ ಬಳಸಿಕೊಂಡಿದೆ. ಈಗ ಜಿಲ್ಲಾ ಕಚೇರಿಯಲ್ಲಿ ಫಲಾನುಭವಿಗಳಿಗೆ ವಂಚಿಸಿ, ಅನ್ಯಾಯ ಮಾಡಲಾಗಿದೆ. ಇದನ್ನು ಸರಿಪಡಿಸಿ ಅರ್ಹರ ಬ್ಯಾಂಕ್ ಖಾತೆಗಳಿಗೆ ಹಣ ಸಂದಾಯ ಮಾಡಬೇಕು’ ಎಂದು ಆಗ್ರಹಿಸಿದರು.
ಬಿಜೆಪಿ ಎಸ್.ಟಿ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಬಂಗಾರು ಹನುಮಂತು, ‘ರಾಜ್ಯ ಸರ್ಕಾರ ಲೂಟಿಗೆ ನಿಂತಿದೆ. ವಾಲ್ಮೀಕಿ ನಿಗಮ, ವಸತಿ ಇಲಾಖೆ ಸೇರಿ ಎಲ್ಲ ಕಡೆಗಳಲ್ಲಿ ಲೂಟಿ ಮಾಡುತ್ತಿದೆ. ಜಿಲ್ಲೆ ಮಾತ್ರವಲ್ಲದೆ ಬೇರೆ ಜಿಲ್ಲೆಯ ನಿಗಮಗಳಲ್ಲೂ ₹500 ಕೋಟಿ ಭ್ರಷ್ಟಾಚಾರ ನಡೆದ ಆರೋಪಗಳಿವೆ’ ಎಂದರು.
ಶಿರಾ, ಪಾವಗಡ ತಾಲ್ಲೂಕಿನ ಫಲಾನುಭವಿ ಹೆಸರಿನಲ್ಲಿ ಹಣ ಮಂಜೂರು ಮಾಡಿಸಿ, ಅವರ ಖಾತೆಗೆ ಜಮಾ ಮಾಡಿಲ್ಲ. ಕೋಲಾರದ ಬ್ಯಾಂಕ್ ಆಫ್ ಮಹಾರಾಷ್ಟ್ರದ ನಕಲಿ ಖಾತೆಗೆ ಹಣ ವರ್ಗಾಯಿಸಲಾಗಿದೆ. ಸರ್ಕಾರಕ್ಕೆ ಕದಿಯಲು ಪರಿಶಿಷ್ಟರ ಹಣವೇ ಬೇಕಾಗಿತ್ತೇ? ಎಂದು ಪ್ರಶ್ನಿಸಿದರು.
ಶಾಸಕ ಜಿ.ಬಿ.ಜ್ಯೋತಿಗಣೇಶ್, ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ರವಿಶಂಕರ್, ಉಪಾಧ್ಯಕ್ಷ ವೈ.ಎಚ್.ಹುಚ್ಚಯ್ಯ, ನಗರ ಘಟಕದ ಅಧ್ಯಕ್ಷ ಧನುಷ್, ಮುಖಂಡರಾದ ವೆಂಕಟೇಶ್, ಬಂಬೂ ಮೋಹನ್, ವಿಜಯಕುಮಾರ್, ನವ ಚೇತನ್, ಟಿ.ಎಚ್.ಹನುಮಂತರಾಜು, ಸತ್ಯಮಂಗಲ ಜಗದೀಶ್, ಸಿ.ಎನ್.ರಮೇಶ್, ಮಲ್ಲಿಕಾರ್ಜುನ್, ವಿಷ್ಣುವರ್ಧನ್, ಪುಟ್ಟರಾಜು, ಬನಶಂಕರಿ ಬಾಬು ಮೊದಲಾದವರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.