ADVERTISEMENT

ತುಮಕೂರು: ದಸರಾ ಆಚರಣೆ ವೇಳೆ 20 ಕಿ.ಮೀ ದೀಪಾಲಂಕಾರ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2025, 4:12 IST
Last Updated 11 ಸೆಪ್ಟೆಂಬರ್ 2025, 4:12 IST
ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಬುಧವಾರ ಧಾರ್ಮಿಕ ಮಂಟಪ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಚಾಲನೆ ನೀಡಿದರು. ಕನ್ನಿಕಾ ಪರಮೇಶ್ವರ, ಶಾಸಕ ಜಿ.ಬಿ.ಜ್ಯೋತಿಗಣೇಶ್, ಅಧಿಕಾರಿಗಳಾದ ಶುಭ ಕಲ್ಯಾಣ್, ಜಿ.ಪ್ರಭು, ಬಿ.ವಿ.ಅಶ್ವಿಜ, ಕೆ.ವಿ.ಅಶೋಕ್ ಇತರರು ಉಪಸ್ಥಿತರಿದ್ದರು
ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಬುಧವಾರ ಧಾರ್ಮಿಕ ಮಂಟಪ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಚಾಲನೆ ನೀಡಿದರು. ಕನ್ನಿಕಾ ಪರಮೇಶ್ವರ, ಶಾಸಕ ಜಿ.ಬಿ.ಜ್ಯೋತಿಗಣೇಶ್, ಅಧಿಕಾರಿಗಳಾದ ಶುಭ ಕಲ್ಯಾಣ್, ಜಿ.ಪ್ರಭು, ಬಿ.ವಿ.ಅಶ್ವಿಜ, ಕೆ.ವಿ.ಅಶೋಕ್ ಇತರರು ಉಪಸ್ಥಿತರಿದ್ದರು   

ತುಮಕೂರು: ದಸರಾ ಆಚರಣೆ ಸಮಯದಲ್ಲಿ ನಗರದ ಹೃದಯ ಭಾಗದ ಸುತ್ತಮುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ತಿಳಿಸಿದರು.

ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ದಸರಾ ಉತ್ಸವದ ಅಂಗವಾಗಿ ನಿರ್ಮಾಣ ಮಾಡಲಿರುವ ಧಾರ್ಮಿಕ ಮಂಟಪ ನಿರ್ಮಾಣಕ್ಕೆ ಬುಧವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಸೆ. 22ರಿಂದ ದೀಪಾಲಂಕಾರಕ್ಕೆ ಚಾಲನೆ ನೀಡಲಾಗುತ್ತದೆ. ಉತ್ಸವದ ಕೊನೆಯ ದಿನ ಜರುಗುವ ಜಂಬೂ ಸವಾರಿ ಮೆರವಣಿಗೆಯಲ್ಲಿ ನಗರದ ಸುತ್ತಮುತ್ತಲಿನ 50 ಗ್ರಾಮ ದೇವತೆಗಳು ಭಾಗವಹಿಸಲಿವೆ. ಅಂಬಾರಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ಹೆಲಿಕಾ‍ಪ್ಟರ್‌ನಿಂದ ಹೂವಿನ ಮಳೆ ಸುರಿಸಲಾಗುವುದು. ಸೆ. 28ರಂದು ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ವಿದ್ಯಾರ್ಥಿಗಳಿಂದ ಪಂಜಿನ ಕವಾಯತು ಏರ್ಪಡಿಸಿದ್ದು, ಜನರನ್ನು ಆಕರ್ಷಿಸಲಿದೆ ಎಂದು ಮಾಹಿತಿ ನೀಡಿದರು.

ADVERTISEMENT

ಸೆ. 22ರಿಂದ 11 ದಿನಗಳ ಕಾಲ ನಡೆಯಲಿರುವ ದಸರಾ ಉತ್ಸವದಲ್ಲಿ ನಾಡದೇವತೆ ಚಾಮುಂಡೇಶ್ವರಿ ಪೂಜಿಸಲಾಗುತ್ತದೆ. ಹೋಮ, ಹವನ, ಮತ್ತಿತರ ಪೂಜಾ ಕೈಂಕರ್ಯ ನಡೆಸಲು ಭವ್ಯವಾದ ಧಾರ್ಮಿಕ ಮಂಟಪ ನಿರ್ಮಾಣವಾಗಲಿದೆ. ಮಂಟಪದಲ್ಲಿ ತಾಯಿ ಚಾಮುಂಡೇಶ್ವರಿಯನ್ನು ಅಲಂಕರಿಸಿ ಪೂಜಿಸಲಾಗುತ್ತದೆ. ದೇವಿಯು ಪ್ರತಿ ದಿನವೂ ನವದುರ್ಗೆಯರ ವಿವಿಧ ರೂಪಗಳಲ್ಲಿ ಭಕ್ತರಿಗೆ ದರ್ಶನ ನೀಡಲಿದ್ದಾಳೆ ಎಂದು ಹೇಳಿದರು.

ಶಾಸಕ ಜಿ.ಬಿ.ಜ್ಯೋತಿಗಣೇಶ್, ‘ಕಳೆದ ವರ್ಷದಿಂದ ಜಿಲ್ಲಾ ಆಡಳಿತದಿಂದ ದಸರಾ ಉತ್ಸವವನ್ನು ಪಕ್ಷಾತೀತವಾಗಿ ಆಚರಿಸಲಾಗುತ್ತಿದೆ’ ಎಂದರು.

ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರಶೇಖರ್‌ಗೌಡ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಪ್ರಭು, ನಗರ ಪಾಲಿಕೆ ಆಯುಕ್ತರಾದ ಬಿ.ವಿ.ಅಶ್ವಿಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.