ತುಮಕೂರು: ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡವನ್ನು ₹131 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿದ್ದು, ಶೀಘ್ರವೇ ಶಂಕುಸ್ಥಾಪನೆ ನೆರವೇರಿಸಲು ಸಿದ್ಧತೆಗಳು ನಡೆದಿವೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಜಿಲ್ಲಾ ಆಸ್ಪತ್ರೆ ನೂತನ ಕಟ್ಟಡ ನಿರ್ಮಾಣ ಕುರಿತು ಸಭೆ ನಡೆಸಿದರು.
ನಗರದಲ್ಲಿರುವ 78 ವರ್ಷಗಳಷ್ಟು ಹಳೆಯದಾದ ಕಟ್ಟಡ ತೆರವುಗೊಳಿಸಿ, ಹೊಸದಾಗಿ 300 ಹಾಸಿಗೆ ಸಾಮರ್ಥ್ಯದ ಕಟ್ಟಡ ಕಟ್ಟಲಾಗುವುದು. ಶೀಘ್ರದಲ್ಲೇ ಶಂಕುಸ್ಥಾಪನೆ ನೆರವೇರಿಸಬೇಕಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕಟ್ಟಡದ ವಿಸ್ತೃತ ಯೋಜನಾ ವರದಿ (ಡಿಪಿಆರ್), ವಾಸ್ತುಶಿಲ್ಪ, ರಚನಾತ್ಮಕ ವಿನ್ಯಾಸ ಹಾಗೂ ಇತರ ತಾಂತ್ರಿಕ ರೇಖಾಚಿತ್ರಗಳ ಸಿದ್ಧತೆ ಪ್ರಗತಿಯಲ್ಲಿದೆ. ಶೀಘ್ರವೇ ಈ ಪ್ರಕ್ರಿಯೆ ಪೂರ್ಣಗೊಂಡು ಶಂಕುಸ್ಥಾಪನೆ ಮಾಡಲಾಗುವುದು ಎಂದರು.
ಆಸ್ಪತ್ರೆ ಆವರಣದಲ್ಲಿ ನಿರ್ಮಿಸಿರುವ 100 ಹಾಸಿಗೆ ಸಾಮರ್ಥ್ಯದ ತುರ್ತು ನಿಗಾ ಘಟಕದ ಕಾಮಗಾರಿ ಪೂರ್ಣಗೊಂಡಿದ್ದು, ಅದನ್ನೂ ಉದ್ಘಾಟಿಸಲಾಗುವುದು. ನರ್ಸಿಂಗ್ ಕಾಲೇಜು ಕಟ್ಟಡ ನಿರ್ಮಾಣ, ದಿಬ್ಬೂರು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಇತರೆ ಆರೋಗ್ಯ ಕೇಂದ್ರಗಳ ಕಟ್ಟಡ ಕಾಮಗಾರಿಗಳಿಗೂ ಇದೇ ಸಂದರ್ಭದಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು. ಇದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗುವುದು ಎಂದು ಮಾಹಿತಿ ನೀಡಿದರು.
ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಶಾಸಕ ಎಂ.ಟಿ.ಕೃಷ್ಣಪ್ಪ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಮಹಾನಗರ ಪಾಲಿಕೆ ಆಯುಕ್ತರಾದ ಬಿ.ವಿ.ಅಶ್ವಿಜ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಸ್ಗರ್ ಬೇಗ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.