
ತುಮಕೂರಿನ ಮೈದಾಳ ರಸ್ತೆಯ ಸ್ನಾತಕೋತ್ತರ ವಿದ್ಯಾರ್ಥಿನಿಯರ ಹಾಸ್ಟೆಲ್
ತುಮಕೂರು: ನಗರ ಒಳಗೊಂಡಂತೆ ಜಿಲ್ಲೆಯಲ್ಲಿರುವ ವಿದ್ಯಾರ್ಥಿ ನಿಲಯಗಳಲ್ಲಿ ನೀರಿನ ಗುಣಮಟ್ಟ ಪರೀಕ್ಷೆ ಸಕಾಲಕ್ಕೆ ನಡೆಯುತ್ತಿಲ್ಲ. ಕನಿಷ್ಠ ವರ್ಷಕ್ಕೆ 2 ಬಾರಿಯಾದರೂ ನೀರಿನ ಮಾದರಿ ಪರೀಕ್ಷೆಗೆ ಕಳುಹಿಸುತ್ತಿಲ್ಲ.
ಕಳೆದ ನವೆಂಬರ್‌ನಲ್ಲಿ ನಗರದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 23 ಹಾಸ್ಟೆಲ್‌ಗಳ ಕೊಳವೆ ಬಾವಿ ನೀರು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ 3 ಹಾಸ್ಟೆಲ್ ನೀರು ಕುಡಿಯಲು ಯೋಗ್ಯವಾಗಿಲ್ಲ, 3 ನಿಲಯದ ನೀರು ಸಂಶಯಾಸ್ಪದವಾಗಿದೆ ಎಂದು ಮಹಾನಗರ ಪಾಲಿಕೆಯ ನೀರಿನ ಗುಣಮಟ್ಟ ಪರೀಕ್ಷಾ ಪ್ರಯೋಗಾಲಯವು ಜಿಲ್ಲಾಧಿಕಾರಿ, ಇಲಾಖೆಯ ಜಿಲ್ಲಾ ಅಧಿಕಾರಿಗೆ ವರದಿ ಸಲ್ಲಿಸಿದೆ.
ಎಂ.ಜಿ.ರಸ್ತೆಯ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಉಪ್ಪಾರಹಳ್ಳಿಯ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ಹಾಸ್ಟೆಲ್, ರೈಲು ನಿಲ್ದಾಣ ರಸ್ತೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ನೀರು ಕುಡಿಯಲು ಯೋಗ್ಯವಲ್ಲ ಎಂದು ಪ್ರಯೋಗಾಲಯವು ಜಿಲ್ಲಾಧಿಕಾರಿಗೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಕ್ಯಾತ್ಸಂದ್ರದ ಮೈದಾಳ ರಸ್ತೆಯ ಬಾಲಕಿಯರ ವಿದ್ಯಾರ್ಥಿ ನಿಲಯ, ಸ್ನಾತಕೋತ್ತರ ವಿದ್ಯಾರ್ಥಿನಿಯರ ಹಾಸ್ಟೆಲ್, ರೈಲು ನಿಲ್ದಾಣ ರಸ್ತೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ–1 ರ ನೀರು ಪರೀಕ್ಷಿಸಿದ್ದು, ಸಂಶಯಾಸ್ಪದ ಎಂದು ವರದಿ ನೀಡಲಾಗಿದೆ. ನೀರಿನ ಮಾದರಿ ಸರಿಯಾಗಿಲ್ಲ. ಮತ್ತೊಮ್ಮೆ ಮಾದರಿ ತಂದು ಪರೀಕ್ಷೆ ಮಾಡಿಸುವಂತೆ ತಿಳಿಸಲಾಗಿದೆ.
ಪ್ರಸ್ತುತ ಜಿಲ್ಲಾ ಪಂಚಾಯಿತಿ ಆವರಣದಲ್ಲಿರುವ ನೀರು ಗುಣಮಟ್ಟ ಪರೀಕ್ಷಾ ಪ್ರಯೋಗಾಲಯ, ಪಿ.ಎನ್.ಆರ್.ಪಾಳ್ಯದ ಪಾಲಿಕೆಯ ಪ್ರಯೋಗಾಲಯದಲ್ಲಿ ನೀರಿನ ಪರೀಕ್ಷೆ ನಡೆಸಲಾಗುತ್ತಿದೆ. ಹಾಸ್ಟೆಲ್‌ಗಳಿಂದ ಪರೀಕ್ಷೆಗೆ ನೀಡಿದ ನೀರಿನ ಮಾದರಿಯಲ್ಲಿ ‘ಹಿ–ಕೊಲೈ’, ‘ಕೋಲಿಫಾರ್ಮ್’ ಬ್ಯಾಕ್ಟೀರಿಯಾಗಳು ಕಾಣಿಸಿಕೊಂಡಿದ್ದು, ಕುಡಿಯಲು ಯೋಗ್ಯವಲ್ಲ ಎಂದು ವರದಿ ನೀಡಲಾಗಿದೆ.
ಸೆ. 19ರಂದು ನಗರ ಹೊರವಲಯದ ರಿಂಗ್ ರಸ್ತೆ ಬಳಿಯ ಪರಿಶಿಷ್ಟ ವರ್ಷಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್‌ನಲ್ಲಿ 12 ಮಂದಿ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಏರುಪೇರಾಗಿತ್ತು. ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದರು. ಈ ಘಟನೆ ನಂತರ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹಾಸ್ಟೆಲ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಎಲ್ಲ ಹಾಸ್ಟೆಲ್‌ಗಳಲ್ಲಿ ನೀರಿನ ಗುಣಮಟ್ಟ ಪರೀಕ್ಷೆ ನಡೆಸುವಂತೆ ಸೂಚಿಸಿದ್ದರು. ಡಿ.ಸಿ ನಿರ್ದೇಶನದಂತೆ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯು ನೀರಿನ ಗುಣಮಟ್ಟ ಪರೀಕ್ಷೆ ನಡೆಸಿದೆ.
ಗುಣಮಟ್ಟ ಪರೀಕ್ಷೆ ನಂತರ ಕೊಳವೆ ಬಾವಿ ನೀರು ಕುಡಿಯಲು ಬಳಸದಂತೆ ಸೂಚಿಸಲಾಗಿದೆ. ಪ್ರಸ್ತುತ ಬಹುತೇಕ ಹಾಸ್ಟೆಲ್‌ಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಅಳವಡಿಸಲಾಗಿದೆ.
ಚಿಕ್ಕನಾಯಕನಹಳ್ಳಿ 5 ಹಾಸ್ಟೆಲ್ ಸಮಸ್ಯೆ
ಚಿಕ್ಕನಾಯಕನಹಳ್ಳಿ ತಾಲ್ಲೂಕಿನ 11 ಹಾಸ್ಟೆಲ್‌ಗಳ ನೀರಿನ ಮಾದರಿಯನ್ನು ಪ್ರಯೋಗಾಲಯದಲ್ಲಿ ಪರೀಕ್ಷಿಸಲಾಗಿದೆ. ಇದರಲ್ಲಿ ಐದು ಹಾಸ್ಟೆಲ್‌ನ ನೀರು ಕುಡಿಯಲು ಯೋಗ್ಯವಲ್ಲ ಎಂಬ ವರದಿ ಬಂದಿದೆ. ಚಿಕ್ಕನಾಯಕನಹಳ್ಳಿ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯ (ನಂ. 2407) ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ (2747) ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ (1098) ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ (1099) ಹುಳಿಯಾರು ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ (2408).
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.