ADVERTISEMENT

ತುಮಕೂರು| ಕ್ಯಾನ್ಸರ್ ಆಸ್ಪತ್ರೆ ಯಂತ್ರಕ್ಕೆ ₹41 ಕೋಟಿ: ಸಚಿವ ಶರಣಪ್ರಕಾಶ ಪಾಟೀಲ

ನ. 7ರಂದು ಕ್ಯಾನ್ಸರ್ ಆಸ್ಪತ್ರೆ ಉದ್ಘಾಟಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2025, 6:59 IST
Last Updated 15 ಅಕ್ಟೋಬರ್ 2025, 6:59 IST
ತುಮಕೂರು ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಿರುವ ಕ್ಯಾನ್ಸರ್ ಆಸ್ಪತ್ರೆಯ ಕಟ್ಟಡವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಪರಿಶೀಲಿಸಿದರು. ಶಾಸಕರಾದ ಬಿ.ಸುರೇಶ್‌ಗೌಡ, ಜಿ.ಬಿ.ಜ್ಯೋತಿಗಣೇಶ್, ಡಿಎಚ್‌ಒ ಡಾ.ಬಿ.ಎಂ.ಚಂದ್ರಶೇಖ್ ಇತರರು ಪಾಲ್ಗೊಂಡಿದ್ದರು
ತುಮಕೂರು ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಿರುವ ಕ್ಯಾನ್ಸರ್ ಆಸ್ಪತ್ರೆಯ ಕಟ್ಟಡವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಪರಿಶೀಲಿಸಿದರು. ಶಾಸಕರಾದ ಬಿ.ಸುರೇಶ್‌ಗೌಡ, ಜಿ.ಬಿ.ಜ್ಯೋತಿಗಣೇಶ್, ಡಿಎಚ್‌ಒ ಡಾ.ಬಿ.ಎಂ.ಚಂದ್ರಶೇಖ್ ಇತರರು ಪಾಲ್ಗೊಂಡಿದ್ದರು   

ತುಮಕೂರು: ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಿರುವ ಕ್ಯಾನ್ಸರ್ ಆಸ್ಪತ್ರೆ ಕಟ್ಟಡವನ್ನು ಉದ್ಘಾಟನೆ ಮಾಡಿದ ಬಳಿಕ ₹41 ಕೋಟಿ ವೆಚ್ಚದಲ್ಲಿ ಯಂತ್ರೋಪಕರಣಗಳನ್ನು ಅಳವಡಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ತಿಳಿಸಿದರು.

ಜಿಲ್ಲಾ ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿದ್ದ ಸಚಿವರು ನೂತನ ಕಟ್ಟಡ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ₹69.96 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ 100 ಹಾಸಿಗೆ ಸಾಮರ್ಥ್ಯದ ಕ್ಯಾನ್ಸರ್ ಆಸ್ಪತ್ರೆ ಕಟ್ಟಡವನ್ನು ನ. 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ ಎಂದರು.

ಕ್ಯಾನ್ಸರ್ ಆಸ್ಪತ್ರೆಗೆ ಯಂತ್ರೋಪಕರಣ ಅಳವಡಿಕೆ ಹಾಗೂ ಅಗತ್ಯ ಸಿಬ್ಬಂದಿ ನೇಮಕ ಮಾಡಬೇಕಿದೆ. ಈ ಸಂಬಂಧ ಸಿದ್ಧಪಡಿಸಿರುವ ಪ್ರಸ್ತಾವವನ್ನು ಸಚಿವ ಸಂಪುಟದ ಮುಂದೆ ತರಲಾಗುವುದು. ಅಲ್ಲಿ ಒಪ್ಪಿಗೆ ಸಿಕ್ಕಿದ ನಂತರ ಕೆಲಸ ಆರಂಭವಾಗಲಿದೆ. ಈಗ ಕಟ್ಟಡ ಉದ್ಘಾಟನೆಯಾದರೂ ಉಪಕರಣ ಅಳವಡಿಕೆ, ಸಿಬ್ಬಂದಿ ನೇಮಕವಾಗಿ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಲು ಇನ್ನೂ ನಾಲ್ಕು ತಿಂಗಳು ತೆಗೆದುಕೊಳ್ಳುತ್ತದೆ ಎಂದು ಸ್ಪಷ್ಟಪಡಿಸಿದರು.

ADVERTISEMENT

ಎಲ್ಲ ಜಿಲ್ಲೆಯಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜಿನ ಜತೆಗೆ ಸೂಪರ್ ಸ್ಪೆಷಾಲಿಸಿ ಆಸ್ಪತ್ರೆ, ಕ್ಯಾನ್ಸರ್ ಆಸ್ಪತ್ರೆ, ಟ್ರಾಮಾ ಸೆಂಟರ್ ನಿರ್ಮಿಸಲು ಉದ್ದೇಶಿಸಲಾಗಿದೆ. ಕಿದ್ವಾಯಿ ಆಸ್ಪತ್ರೆ ಮೇಲಿನ ಒತ್ತಡ ಕಡಿಮೆ ಮಾಡುವ ಸಲುವಾಗಿ ಎಲ್ಲ ಜಿಲ್ಲೆಗಳಲ್ಲೂ ಕ್ಯಾನ್ಸರ್ ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ಈಗಾಗಲೇ ಹತ್ತು ಜಿಲ್ಲೆಗಳಲ್ಲಿ ಆಸ್ಪತ್ರೆ ನಿರ್ಮಿಸಿದ್ದು, ಹಂತಹಂತವಾಗಿ ಉಳಿದ ಜಿಲ್ಲೆಗಳಲ್ಲೂ ನಿರ್ಮಿಸಲಾಗುವುದು ಎಂದು ಹೇಳಿದರು.

ಜಯದೇವ ಆಸ್ಪತ್ರೆ ಮೇಲೂ ಸಾಕಷ್ಟು ಒತ್ತಡವಿದ್ದು, ವಿಭಾಗ ಮಟ್ಟದಲ್ಲಿ ಜಯದೇವ ಆಸ್ಪತ್ರೆ ಘಟಕ ತೆರೆಯಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆಗಳಲ್ಲೂ ಕ್ಯಾಥ ಲ್ಯಾಬ್ ಆರಂಭಿಸಲು ಉದ್ದೇಶಿಸಲಾಗಿದೆ ಎಂದರು.

ಶಾಸಕರಾದ ಬಿ.ಸುರೇಶ್‌ಗೌಡ, ಜಿ.ಬಿ.ಜ್ಯೋತಿಗಣೇಶ್, ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕಿ ಸುಜಾತ ರಾಥೋಡ್, ಕಿದ್ವಾಯಿ ಆಸ್ಪತ್ರೆಯ ಡಾ.ನವೀನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಎಂ.ಚಂದ್ರಶೇಖ್, ಜಿಲ್ಲಾ ಶಸ್ತ್ರಚಿಕಿತ್ಸಕ ಅಸ್ಗರ್ ಬೇಗ್ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.