
ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ನಗರಕ್ಕೆ ಭೇಟಿ ನೀಡಲಿದ್ದು, ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಮಧ್ಯಾಹ್ನ 2.30 ಗಂಟೆಗೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ.
ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ₹42.05 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ತುರ್ತು ತೀವ್ರ ನಿಗಾ ಘಟಕ, ₹22.28 ಕೋಟಿ ಮೊತ್ತದಲ್ಲಿ ನಿರ್ಮಾಣ ಮಾಡಿರುವ 100 ಹಾಸಿಗೆ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ₹69.96 ಕೋಟಿಯಲ್ಲಿ ಪೂರ್ಣಗೊಂಡಿರುವ 100 ಹಾಸಿಗೆಯ ಕ್ಯಾನ್ಸರ್ ಆಸ್ಪತ್ರೆ, ₹22 ಕೋಟಿ ವೆಚ್ಚದ ನರ್ಸಿಂಗ್ ಕಾಲೇಜು– ಹಾಸ್ಟಲ್ ಕಟ್ಟಡ ಲೋಕಾರ್ಪಣೆ ಮಾಡಲಿದ್ದಾರೆ.
₹131 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ 300 ಹಾಸಿಗೆಗಳ ಜಿಲ್ಲಾ ಆಸ್ಪತ್ರೆ ನೂತನ ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
₹130 ಕೋಟಿ ವೆಚ್ಚದ ಭೀಮಸಂದ್ರ ಕೆರೆಯಿಂದ ವಸಂತನರಸಾಪುರ ಕೈಗಾರಿಕಾ ಪ್ರದೇಶಕ್ಕೆ 30 ಎಂಎಲ್‌ಡಿ ತೃತೀಯ ಹಂತದ ಸಂಸ್ಕರಿಸಿದ ನೀರು ಪೂರೈಕೆಗೂ ಚಾಲನೆ ನೀಡಲಿದ್ದಾರೆ.
ಒಳಚರಂಡಿ ಕಾಮಗಾರಿ
₹29.49 ಕೋಟಿ ವೆಚ್ಚದ 25 ಎಂಎಲ್‌ಡಿ ಸಾಮರ್ಥ್ಯದ ಎಸ್‌ಟಿಪಿ ಘಟಕಕ್ಕೆ ಚಾಲನೆ, ₹50 ಕೋಟಿ ವೆಚ್ಚದ ಒಳಚರಂಡಿ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ, ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ ₹169 ಕೋಟಿ ವೆಚ್ಚದ 2ನೇ ಹಂತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವರು.
ನಗರದಲ್ಲಿ ಸುಮಾರು ₹250 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಲಿದ್ದಾರೆ.– ಬಿ.ವಿ.ಅಶ್ವಿಜ, ಮಹಾನಗರ ಪಾಲಿಕೆ ಆಯುಕ್ತರು
ಜ್ಞಾನಸಿರಿ ಕ್ಯಾಂಪಸ್‌ಗೆ ಚಾಲನೆ
ತುಮಕೂರು: ತಾಲ್ಲೂಕಿನ ಬಿದರೆಕಟ್ಟೆಯಲ್ಲಿ ನೂತನವಾಗಿ ನಿರ್ಮಿಸಿರುವ ತುಮಕೂರು ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್‌ಅನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಲೋಕಾರ್ಪಣೆ ಮಾಡಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಯಾಂಪಸ್‍ನಲ್ಲಿರುವ ವಿವಿಧ ಕಟ್ಟಡಗಳ ಉದ್ಘಾಟನೆ ನೆರವೇರಿಸುವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.