ತುಮಕೂರು: ಗಣಿ ಬಾಧಿತ ಪ್ರದೇಶಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ಯೋಜನೆಗಳು ನಿಧಾನಗತಿಯಲ್ಲಿ ಸಾಗಿರುವುದಕ್ಕೆ ಗಣಿ ಪರಿಸರ ಪುನಶ್ಚೇತನಾ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಂಜಯ್ ಬಿಜ್ಜೂರು ಆಕ್ಷೇಪ ವ್ಯಕ್ತಪಡಿಸಿದರು.
ನಗರದಲ್ಲಿ ಬುಧವಾರ ಗಣಿ ಬಾಧಿತ ಪ್ರದೇಶಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು.
ಹಲವು ತಿಂಗಳಿಂದ ಕೆಲವು ಕಾಮಗಾರಿಗಳು ಟೆಂಡರ್ ಹಂತದಲ್ಲೇ ಉಳಿದಿವೆ. ಮತ್ತೆ ಕೆಲವು ಕಾಮಗಾರಿಗಳು ಟೆಂಡರ್ ಕರೆಯಲು ಬಾಕಿಯಿದ್ದು, ಹಲವು ಕಾಮಗಾರಿಗಳಿಗೆ ಇನ್ನೂ ಟೆಂಡರ್ ಕರೆದಿಲ್ಲ. ಕಾಮಗಾರಿಗಳಿಗೆ ಕಾರ್ಯಾದೇಶ ನೀಡಿದ್ದರೂ ಕೆಲಸ ಪೂರ್ಣಗೊಂಡಿಲ್ಲ. ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಬೇಕು ಎಂದರು.
ವಿದ್ಯಾರ್ಥಿನಿಲಯಗಳ ನಿರ್ಮಾಣ, ರಸ್ತೆ ಅಭಿವೃದ್ಧಿ, ಕುಡಿಯುವ ನೀರಿನ ಯೋಜನೆ, ಸಾರ್ವಜನಿಕರ ಜೀವನ ಮಟ್ಟ ಸುಧಾರಿಸಲು ರೂಪಿಸಿರುವ ಯೋಜನೆಗಳ ಅನುಷ್ಠಾನ ತ್ವರಿತಗೊಳಿಸಬೇಕು. ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಅರಣ್ಯ, ಕೃಷಿ, ತೋಟಗಾರಿಕೆ, ಮೀನುಗಾರಿಕೆ, ರೇಷ್ಮೆ, ಕುಡಿಯುವ ನೀರು, ಗ್ರಾಮೀಣ ರಸ್ತೆ, ಲೋಕೋಪ ಯೋಗಿ ಇಲಾಖೆಯಿಂದ ಕೈಗೊಂಡಿರುವ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಶಿಧರ್, ಗಣಿ ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಲೋಕೇಶ್ ಕುಮಾರ್, ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.