ತುಮಕೂರು: ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರನೌತ್ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ತುಮಕೂರು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ವಿನೋದ್ ಬಾಲನಾಯಕ್ ಕ್ಯಾತ್ಸಂದ್ರ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.
ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಕಂಗನಾ ರನೌತ್ ಟ್ವೀಟ್ ಮಾಡಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕಂಗನಾ ವಿರುದ್ಧ ಡಿಜಿಪಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ತುಮಕೂರು ತಾಲ್ಲೂಕು ಕದರನಹಳ್ಳಿ ತಾಂಡಾ ವಾಸಿ ಹಾಗೂ ಹೈಕೋರ್ಟ್ ವಕೀಲ ಎಲ್.ರಮೇಶ್ ನಾಯಕ್ ಇ–ಮೇಲ್ ಮೂಲಕ ದೂರು ಸಲ್ಲಿಸಿದ್ದರು.
ಪೊಲೀಸರಿಂದ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ, ಕಂಗನಾ ವಿರುದ್ಧ ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ನಿರ್ದೇಶನ ನೀಡಬೇಕು ಅಥವಾ ನ್ಯಾಯಾಲಯವೇ ನೇರವಾಗಿ ಕ್ರಮಕೈಗೊಳ್ಳಬೇಕು ಎಂದು ರಮೇಶ್ ನಾಯಕ್ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.