ತುಮಕೂರು: ತೀವ್ರ ವಿರೋಧ ವ್ಯಕ್ತವಾಗಿರುವ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಕುರಿತು ಚರ್ಚಿಸಲು ಉಪಮುಖ್ಯಮಂತ್ರಿಯೂ ಆಗಿರುವ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಶಾಸಕರು, ರೈತ ಸಂಘಟನೆ ಮುಖಂಡರು ಹಾಗೂ ಪ್ರಮುಖರ ಸಭೆ ಜೂನ್ 30ರಂದು ನಡೆಯಲಿದೆ.
ನಗರದಲ್ಲಿ ಮಂಗಳವಾರ ನಡೆದ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಈ ವಿಚಾರ ತಿಳಿಸಿದರು. ಸ್ಥಳ, ಸಮಯದ ವಿವರಗಳನ್ನು ಶೀಘ್ರದಲ್ಲೇ ನೀಡಲಾಗುವುದು ಎಂದರು.
‘ಸಭೆ ಕರೆದು ಚರ್ಚಿಸುವಂತೆ ಶಾಸಕರು, ರೈತ ಸಂಘಟನೆ ಮುಖಂಡರು ಒತ್ತಾಯಿಸಿದ್ದರು. ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಗಮನಕ್ಕೆ ತಂದಿದ್ದೇನೆ. ಸಭೆ ಕರೆದು ಚರ್ಚಿಸಿ ಸಮಸ್ಯೆ ಬಗೆಹರಿಸುವಂತೆ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಹಾಗಾಗಿ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ’ ಎಂದು ಹೇಳಿದರು.
‘ಸಭೆಯಲ್ಲಿ ಚರ್ಚಿಸಿ ಕಾಮಗಾರಿ ಮುಂದುವರಿಸಬೇಕೆ, ಬೇಡವೆ? ಎಂಬುದನ್ನು ನಿರ್ಧರಿಸಲಾಗುತ್ತದೆ. ರೈತರಲ್ಲಿ ಮೂಡಿರುವ ಅನುಮಾನ ಪರಿಹರಿಸಲಾಗುತ್ತದೆ. ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ರೈತರು ಪ್ರತಿಭಟನೆ ನಡೆಸಿದ ಸಮಯದಲ್ಲಿ ನಡೆದ ಅಹಿತಕರ ಘಟನೆಗೆ ವಿಷಾದ ವ್ಯಕ್ತಪಡಿಸುತ್ತೇನೆ. ಸ್ವಾಮೀಜಿಗಳ ಮೇಲೆ ಯಾವುದೇ ಪ್ರಕರಣ ದಾಖಲಿಸಿಲ್ಲ’ ಸ್ಪಷ್ಟಪಡಿಸಿದರು.
ಕುಣಿಗಲ್ ಭಾಗಕ್ಕೆ ಹೇಮಾವತಿ ನೀರು ಹರಿಸಲು ನಾಲೆಗೆ ಲಿಂಕ್ ಕೆನಾಲ್ ನಿರ್ಮಾಣಕ್ಕೆ ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಕೆಲಸವೂ ಪ್ರಗತಿಯಲ್ಲಿದೆ ಎಂದರು.
ಲಿಂಕ್ ಕೆನಾಲ್ ನಿರ್ಮಾಣಕ್ಕೆ ಪಟ್ಟು ಹಿಡಿದಿರುವ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಸುವುದು ಸರಿಯಲ್ಲ. ‘ಕಟುಕನ ಮುಂದೆ ಕುರಿ ಹೋದಂತಾಗುತ್ತದೆ’. ಮುಖ್ಯಮಂತ್ರಿ ನೇತೃತ್ವದಲ್ಲೇ ಸಭೆ ನಡೆಸಬೇಕು ಎಂದು ಶಾಸಕ ಬಿ.ಸುರೇಶ್‌ಗೌಡ ಒತ್ತಾಯಿಸಿದರು. ಶಾಸಕರಾದ ಎಂ.ಟಿ.ಕೃಷ್ಣಪ್ಪ, ಜಿ.ಬಿ.ಜ್ಯೋತಿಗಣೇಶ್ ಸಹ ಧ್ವನಿಗೂಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.