ತುಮಕೂರು: ತುಮಕೂರು ವಿಶ್ವವಿದ್ಯಾಲಯವನ್ನು ವೈಜ್ಞಾನಿಕ ಹಾಗೂ ತಂತ್ರಜ್ಞಾನ ಕ್ಷೇತ್ರಕ್ಕೆ ಸೀಮಿತವಾಗಿ ದೇಶದಲ್ಲೇ ಮಾದರಿ ವಿ.ವಿಯನ್ನಾಗಿ ನಿರ್ಮಿಸುವ ಗುರಿ ಸಾಕಾರಗೊಂಡಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ವಿಷಾದಿಸಿದರು.
ತಾಲ್ಲೂಕಿನ ಬಿದರಕಟ್ಟೆಯಲ್ಲಿ ಶುಕ್ರವಾರ ವಿ.ವಿ ನೂತನ ಕ್ಯಾಂಪಸ್ ‘ಜ್ಞಾನಸಿರಿ’ಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ನಿರ್ಮಿಸಿರುವ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
‘ನಾನು ಉನ್ನತ ಶಿಕ್ಷಣ ಸಚಿವನಾಗಿದ್ದ ಸಮಯದಲ್ಲಿ ದೇಶದಲ್ಲೇ ಮೊದಲ ಬಾರಿಗೆ ಜಿಲ್ಲೆಗೊಂದು ವಿಶ್ವವಿದ್ಯಾಲಯ ಆರಂಭಿಸುವ ಪ್ರಯತ್ನದ ಫಲವಾಗಿ ತುಮಕೂರು ವಿ.ವಿ ಸ್ಥಾಪಿಸಲಾಯಿತು. ವೈಜ್ಞಾನಿಕ ಹಾಗೂ ಆಧುನಿಕ ತಂತ್ರಜ್ಞಾನ ಅಧ್ಯಯನಕ್ಕೆ ಸೀಮಿತಗೊಳಿಸಲು ಉದ್ದೇಶಿಸಲಾಗಿತ್ತು. ಆದರೆ ಈಗ ಸಾಮಾನ್ಯ ವಿ.ವಿಯಾಗಿ ರೂಪುಗೊಂಡಿದೆ. ನನ್ನ ಉದ್ದೇಶ ಸಾಕಾರಗೊಂಡಿಲ್ಲ’ ಎಂದರು.
ವಿ.ವಿಯನ್ನು ಒಮ್ಮೆಲೆ ಅಭಿವೃದ್ಧಿಪಡಿಸಲು ಸಾಧ್ಯವಿಲ್ಲ. ಮುಂದಿನ ವರ್ಷಗಳಲ್ಲಿ ಆರ್ಥಿಕ ಶಕ್ತಿ ತುಂಬಲಾಗುವುದು. 240 ಎಕರೆ ವಿಶಾಲವಾದ ಪ್ರದೇಶದಲ್ಲಿ ಕ್ಯಾಂಪಸ್ ನಿರ್ಮಾಣ ಮಾಡಲಾಗುತ್ತಿದ್ದು, ಹಂತಹಂತವಾಗಿ ಆರ್ಥಿಕ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.
ತರಬೇತಿ: ಸೈಬರ್ ಅಪರಾಧಗಳು ಹೆಚ್ಚುತ್ತಿದ್ದು, ಈ ಬಗ್ಗೆ ತನಿಖೆ ನಡೆಸಲು ನೆರವಾಗುವ ಉದ್ದೇಶದಿಂದ ಕಾನ್‌ಸ್ಟೇಬಲ್‌ಗಳಿಗೆ ತರಬೇತಿ ನೀಡಲಾಗುತ್ತಿದೆ. ರಾಜ್ಯದಲ್ಲಿ ಈವರೆಗೆ 40 ಸಾವಿರ ಮಂದಿಗೆ ತರಬೇತಿ ನೀಡಲಾಗಿದೆ ಎಂದು ಮಾಹಿತಿ ಹಂಚಿಕೊಂಡರು.
ಶಾಸಕ ಬಿ.ಸುರೇಶ್‌ಗೌಡ, ‘ಕ್ಯಾಂಪಸ್ ಅಧಿಕೃತವಾಗಿ ಉದ್ಘಾಟನೆಯಾಗಿಲ್ಲ. ಶೀಘ್ರವೇ ಈ ಕೆಲಸ ನೆರವೇರಿಸಬೇಕು. ನೂತನ ಕ್ಯಾಂಪಸ್‌ಗೆ ಹೇಮಾವತಿ ನಾಲೆಯಿಂದ ನೀರು ಕೊಡಬೇಕು, ವಿ.ವಿ ಸಂಪರ್ಕಿಸುವ ರಸ್ತೆಯನ್ನು ಜೋಡಿ ರಸ್ತೆಯನ್ನಾಗಿ ಮಾಡಬೇಕು’ ಎಂದು ಒತ್ತಾಯಿಸಿದರು.
ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ‘₹4 ಕೋಟಿ ವೆಚ್ಚದಲ್ಲಿ ವಿಜ್ಞಾನ ಕೇಂದ್ರ ನಿರ್ಮಿಸಿದ್ದು, ವಿದ್ಯಾರ್ಥಿಗಳಷ್ಟೇ ಅಲ್ಲದೆ, ಸಾರ್ವಜನಿಕರಿಗೂ ಮುಕ್ತ ಪ್ರವೇಶ ನೀಡಲಾಗುತ್ತದೆ’ ಎಂದು ಹೇಳಿದರು.
ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ ಸಿಇಒ ಜಿ.ಪ್ರಭು, ಕುಲಸಚಿವರಾದ ನಾಹಿದಾ ಜಮ್‌ಜಮ್, ಪ್ರೊ.ಕೆ.ಪ್ರಸನ್ನಕುಮಾರ್, ಗಳಿಗೇನಹಳ್ಳಿ ಗ್ರಾ.ಪಂ ಅಧ್ಯಕ್ಷ ಜಿ.ದೇವರಾಜು, ನಾಗವಲ್ಲಿ ಗ್ರಾ.ಪಂ ಅಧ್ಯಕ್ಷೆ ಎಸ್.ಮಂಗಳಗೌಡರಮ್ಮ ಉಪಸ್ಥಿತರಿದ್ದರು.
ತಾರಾಲಯ ನಿರ್ಮಾಣ
ತುಮಕೂರು: ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳನ್ನು ಎಲ್ಲಾ ಜಿಲ್ಲೆಗಳಲ್ಲಿ ಆರಂಭಿಸುತ್ತಿದ್ದು ಮುಂದಿನ ದಿನಗಳಲ್ಲಿ ಅವುಗಳನ್ನು ಪ್ರಾದೇಶಿಕ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಿ ತಾರಾಲಯ ನಿರ್ಮಿಸಲಾಗುವುದು ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಹೇಳಿದರು. ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ ‘ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳ ನಿರ್ಮಾಣ ಕಾರ್ಯ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ ಒಂದು ವರ್ಷದಲ್ಲಿ ಪೂರ್ಣಗೊಳ್ಳಲಿದೆ. ನಂತರ ತಾರಾಲಯ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.