ADVERTISEMENT

ತುಮಕೂರು | ಬಾಲಕನ ಮುಖಕ್ಕೆ ಕಚ್ಚಿದ ನಾಯಿ

ನಿಲ್ಲದ ನಾಯಿ ಹಾವಳಿ

​ಪ್ರಜಾವಾಣಿ ವಾರ್ತೆ
Published 15 ಜುಲೈ 2024, 5:54 IST
Last Updated 15 ಜುಲೈ 2024, 5:54 IST
ನಾಯಿಗಳ ಹಿಂಡು (ಸಾಂದರ್ಭಿಕ ಚಿತ್ರ)
ನಾಯಿಗಳ ಹಿಂಡು (ಸಾಂದರ್ಭಿಕ ಚಿತ್ರ)   

ತುಮಕೂರು: ನಗರದಲ್ಲಿ ಬೀದಿ ನಾಯಿ ಹಾವಳಿಗೆ ಕಡಿವಾಣ ಬೀಳುತ್ತಿಲ್ಲ. ಮೆಳೆಕೋಟೆ ಬಳಿ ಶನಿವಾರ ಸಂಜೆ ಕೈಯಲ್ಲಿ ಚಾಕೊಲೇಟ್‌ ಹಿಡಿದು ನಿಂತಿದ್ದ ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದೆ.

ಗಂಭೀರವಾಗಿ ಗಾಯಗೊಂಡಿದ್ದ ಬಾಲಕನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ತಿಂಗಳಲ್ಲಿ ಬಾಲಕಿ ಸೇರಿ 7 ಜನರಿಗೆ ನಾಯಿ ಕಚ್ಚಿತ್ತು. ಅವರು ಚಿಕಿತ್ಸೆ ಪಡೆದು ಗುಣಮುಖರಾಗುವ ಮುನ್ನವೇ ಮತ್ತೊಬ್ಬ ಬಾಲಕ ನಾಯಿ ಕಡಿತದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

‘ಮೆಳೆಕೋಟೆ ಭಾಗದಲ್ಲಿ ಸುಮಾರು 70ಕ್ಕೂ ಹೆಚ್ಚು ನಾಯಿಗಳಿವೆ. ಶಾಲೆಯ ಆವರಣದಲ್ಲಿ ನಾಯಿಗಳ ಕಾಟ ಹೆಚ್ಚಾಗಿದೆ. ನಾಯಿ ದಾಳಿಗೆ ಒಳಗಾಗುತ್ತಿರುವ ಜನರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಮಕ್ಕಳನ್ನು ಮನೆಯಿಂದ ಹೊರಗೆ ಕಳುಹಿಸಲು ಭಯವಾಗುತ್ತಿದೆ. ಶಾಲೆಯ ವಾಹನ ಹತ್ತಿಸಲು ಕೈಯಲ್ಲಿ ಕೋಲು ಹಿಡಿದುಕೊಂಡು ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಮೆಳೆಕೋಟೆ ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ ಭಾನುವಾರ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕನ ಆರೋಗ್ಯ ವಿಚಾರಿಸಿದರು. ಪೋಷಕರಿಗೆ ಸಾಂತ್ವನ ಹೇಳಿದರು. ಬೀದಿ ನಾಯಿಗಳ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.