ADVERTISEMENT

ಸರ್ಕಾರದ ನಿರ್ಲಕ್ಷ್ಯದಿಂದ ಯೂರಿಯಾಗೆ ಹಾಹಾಕಾರ: ಶಾಸಕ ಬಿ.ಸುರೇಶ್‌ಗೌಡ ಆರೋಪ

​ಪ್ರಜಾವಾಣಿ ವಾರ್ತೆ
Published 29 ಜುಲೈ 2025, 2:56 IST
Last Updated 29 ಜುಲೈ 2025, 2:56 IST
ಬಿ.ಸುರೇಶ್‌ಗೌಡ
ಬಿ.ಸುರೇಶ್‌ಗೌಡ   

ತುಮಕೂರು: ರಾಜ್ಯ ಸರ್ಕಾರ ರೈತರ ಬದುಕಿನ ಜತೆ ಚೆಲ್ಲಾಟವಾಡುತ್ತಿದೆ. ಮುಖ್ಯಮಂತ್ರಿ, ಕೃಷಿ ಸಚಿವರ ಬೇಜವಾಬ್ದಾರಿಯಿಂದ ಯೂರಿಯಾ‌ಗೆ ಹಾಹಾಕಾರ ಎದುರಾಗಿದೆ ಎಂದು ಶಾಸಕ ಬಿ.ಸುರೇಶ್‌ಗೌಡ ಇಲ್ಲಿ ಸೋಮವಾರ ಆರೋಪಿಸಿದರು.

‘ಬೇಡಿಕೆ ತಕ್ಕಂತೆ ರಸಗೊಬ್ಬರ ಪೂರೈಸುವುದು ಸರ್ಕಾರದ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ‘ಕೇಂದ್ರಕ್ಕೆ ಪತ್ರ ಬರೆದಿದ್ದೇವೆ’ ಎಂದು ಉಡಾಫೆಯಾಗಿ ಮಾತನಾಡುತ್ತಿದ್ದರು. ಇವರ ನಿರ್ಲಕ್ಷ್ಯದಿಂದ ರೈತರು ಬೆಳಿಗ್ಗೆಯೇ ಗೊಬ್ಬರಕ್ಕಾಗಿ ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಈಗಾಗಲೇ ಕೇಂದ್ರ ಪೂರೈಸಿದ ಯೂರಿಯಾ ಕಾಳಸಂತೆಯಲ್ಲಿ ಮಾರಾಟವಾಗಿದೆ’ ಎಂದು ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಹೋರಾಡುತ್ತಾ ರೈತರನ್ನು ಮರೆಯುತ್ತಿದ್ದಾರೆ. ನವದೆಹಲಿಗೆ ಹೋಗಿ ಕಾಂಗ್ರೆಸ್‌ ಹೈಕಮಾಂಡ್‌ ನಾಯಕರನ್ನು ಭೇಟಿಯಾಗುತ್ತಾರೆ. ಅಲ್ಲಿಯೇ ಇರುವ ಪ್ರಧಾನಿ, ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಲು ನಿಮಗೆ ಸಮಯ ಇಲ್ಲವೇ? ಎಂದು ಪ್ರಶ್ನಿಸಿದರು.

ADVERTISEMENT

ನಿಮಗೆ ಅಧಿಕಾರ ಕೊಟ್ಟಿರುವುದು ಹೈಕಮಾಂಡ್‌ ನಾಯಕರ ಬಾಗಿಲು ಕಾಯುವುದಕ್ಕಲ್ಲ, ರೈತರ ಕಣ್ಣೀರು ಒರೆಸಲು. ಕೂಡಲೇ ಕೇಂದ್ರ ಸಚಿವರ ಜತೆ ಮಾತನಾಡಿ, ಗೊಬ್ಬರ ಸರಬರಾಜಿಗೆ ಕ್ರಮ ವಹಿಸಬೇಕು. ದುರಂಹಕಾರದ ಮಾತು ಬಿಟ್ಟು, ರೈತರ ಕಷ್ಟಕ್ಕೆ ಸ್ಪಂದಿಸಬೇಕು ಎಂದರು.

ಶಾಸಕ ಜಿ.ಬಿ.ಜ್ಯೋತಿಗಣೇಶ್‌, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ವೈ.ಎಚ್‌.ಹುಚ್ಚಯ್ಯ, ಮುಖಂಡರಾದ ಬ್ಯಾಟರಂಗೇಗೌಡ, ಟಿ.ಆರ್.ಸದಾಶಿವಯ್ಯ, ವಿಜಯ್‌ಕುಮಾರ್, ರಾಜಶೇಖರ್‌, ಶಂಕರ್‌ ಹಾಜರಿದ್ದರು.

ಇಂದು ಪ್ರತಿಭಟನೆ

ಕೇಂದ್ರ ಸರ್ಕಾರ ರಾಜ್ಯಕ್ಕೆ 8.73 ಲಕ್ಷ ಮೆಟ್ರಿಕ್‌ ಟನ್‌ ಯೂರಿಯಾ ಸರಬರಾಜು ಮಾಡಿದೆ. ಅದನ್ನು ಸಮರ್ಪಕವಾಗಿ ವಿತರಿಸದೆ  ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ. ರೈತರಿಗೆ ಗೊಬ್ಬರ ನೀಡುವಂತೆ ಆಗ್ರಹಿಸಿ ಜುಲೈ 29ರಂದು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ರವಿಶಂಕರ್‌ ಮಾಹಿತಿ ನೀಡಿದರು. ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಭಾಗವಹಿಸಲಿದ್ದಾರೆ. ರೈತರು ಕಾರ್ಯಕರ್ತರು ಸೇರಿ ಸುಮಾರು 5 ಸಾವಿರ ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.