ADVERTISEMENT

1.25 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

ಜಿಲ್ಲೆಗೆ 55 ಸಾವಿರ ಡೋಸ್‌ ಕೋವ್ಯಾಕ್ಸಿನ್ ಪೂರೈಕೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2022, 4:42 IST
Last Updated 4 ಜನವರಿ 2022, 4:42 IST
ತುಮಕೂರಿನಲ್ಲಿ ಸೋಮವಾರ ಮಕ್ಕಳಿಗೆ ಕೋವಿಡ್‌ ಲಸಿಕೆ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಶಾಸಕ ಜಿ.ಬಿ. ಜ್ಯೋತಿಗಣೇಶ್‌, ಡಿಎಚ್ಒ ಡಾ.ನಾಗೇಂದ್ರಪ್ಪ, ಪಾಲಿಕೆ ಆಯುಕ್ತೆ ರೇಣುಕಾ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ, ಡಿಡಿಪಿಐ ಸಿ.ನಂಜಯ್ಯ, ಆರ್‌ಸಿಎಚ್ ಅಧಿಕಾರಿ ಡಾ.ಕೇಶವಮೂರ್ತಿ ಉಪಸ್ಥಿತರಿದ್ದರು
ತುಮಕೂರಿನಲ್ಲಿ ಸೋಮವಾರ ಮಕ್ಕಳಿಗೆ ಕೋವಿಡ್‌ ಲಸಿಕೆ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಶಾಸಕ ಜಿ.ಬಿ. ಜ್ಯೋತಿಗಣೇಶ್‌, ಡಿಎಚ್ಒ ಡಾ.ನಾಗೇಂದ್ರಪ್ಪ, ಪಾಲಿಕೆ ಆಯುಕ್ತೆ ರೇಣುಕಾ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ, ಡಿಡಿಪಿಐ ಸಿ.ನಂಜಯ್ಯ, ಆರ್‌ಸಿಎಚ್ ಅಧಿಕಾರಿ ಡಾ.ಕೇಶವಮೂರ್ತಿ ಉಪಸ್ಥಿತರಿದ್ದರು   

ತುಮಕೂರು: ಜಿಲ್ಲೆಯಲ್ಲಿ 15ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ಕೆ ನಗರದಲ್ಲಿ ಸೋಮವಾರ ಚಾಲನೆ ದೊರೆಯಿತು.

ಜಿಲ್ಲೆಯಲ್ಲಿ ಒಟ್ಟು 1,25,960 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಪ್ರಸ್ತುತ 55 ಸಾವಿರ ಡೋಸ್‌ ಕೋವ್ಯಾಕ್ಸಿನ್‌ ಲಸಿಕೆ ಬಂದಿದ್ದು, ಹಂತ ಹಂತವಾಗಿ ಶಾಲಾ– ಕಾಲೇಜುಗಳ ಮೂಲಕ ಮಕ್ಕಳಿಗೆ ನೀಡಲಾಗುತ್ತಿದೆ. ನಗರದ ಎಂಪ್ರೆಸ್‌ ಬಾಲಕಿಯರ ಪದವಿಪೂರ್ವ ಕಾಲೇಜು ಮತ್ತು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮೊದಲ ದಿನ ಲಸಿಕೆ ನೀಡಲಾಯಿತು.

ಶಾಲೆಯಿಂದ ಹೊರಗುಳಿದ ಅಥವಾ ಶಾಲೆ ಬಿಟ್ಟ ಮಕ್ಕಳಿಗೆ ಲಸಿಕೆ ಹಾಕಲು ಹತ್ತಿರದ ಲಸಿಕಾ ಕೇಂದ್ರಗಳಲ್ಲಿ ಅನುಕೂಲ ಮಾಡಿಕೊಡಲಾಗಿದೆ. ಎಲ್ಲಾ ಸರ್ಕಾರಿ ಕೋವಿಡ್ ಲಸಿಕಾ ಕೇಂದ್ರದಲ್ಲಿ ಉಚಿತವಾಗಿ ನೀಡಲಾಗುತ್ತಿದೆ. ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ನರ್ಸಿಂಗ್ ಮತ್ತು ಅರೆ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳು ಲಸಿಕೆ ನೀಡುವ ಕಾರ್ಯಕ್ಕೆ ನೆರವಾಗುತ್ತಿದ್ದಾರೆ.

ADVERTISEMENT

ಎಂಪ್ರೆಸ್‌ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಶಾಸಕ ಜಿ.ಬಿ. ಜ್ಯೋತಿಗಣೇಶ್‌ ಲಸಿಕಾ ಕಾರ್ಯಕ್ಕೆ ಚಾಲನೆ ನೀಡಿ, ‘ಲಸಿಕೆ ಪಡೆಯುವುದರಿಂದ ಮುಂದೆ ಸಂಭವಿಸಬಹುದಾದ ಅನಾಹುತ ತಪ್ಪಿಸಬಹುದು. ಮಕ್ಕಳಿಗೂ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಕಾಣಿಸಿಕೊಳ್ಳುತ್ತಿದೆ. ಎಲ್ಲೆಡೆ ಓಮೈಕ್ರಾನ್‌ ಮತ್ತು ಕೋವಿಡ್‌ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಇದನ್ನು ತಡೆಯುವಲ್ಲಿ ಎಲ್ಲರೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದರು.

ಎರಡೂ ವರ್ಷಗಳಿಂದ ಕೋವಿಡ್ ಬಿಟ್ಟೂ ಬಿಡದೆ ಕಾಡುತ್ತಿದೆ. ಇದರಿಂದಾಗಿ ಮಕ್ಕಳ ಕಲಿಕೆಗೆ ಅಡ್ಡಿಯಾಗಿದೆ. ಶಾಲೆಗಳ ಮೇಲೆ ಹೆಚ್ಚು ಪರಿಣಾಮ ಬೀರಿದ್ದು, ಮಕ್ಕಳಿಗೆ ಲಸಿಕೆ ನೀಡುವ ಮೂಲಕ ಅವರ ಆರೋಗ್ಯ ರಕ್ಷಣೆಗೆ ಒತ್ತು ನೀಡಲಾಗುತ್ತಿದೆ. ಕೋವಿಡ್ ಎರಡನೇ ಅಲೆ ಸಮಯದಲ್ಲಿ ರೋಗಿಗಳಿಗೆ ಹಾಸಿಗೆ ಒದಗಿಸಲು ಆಗದಿರುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಅದು ಮರುಕಳಿಸದಂತೆ ಎಲ್ಲರೂ ಎಚ್ಚರವಹಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ, ‘ಜಿಲ್ಲೆಯಲ್ಲಿ ಶೇ 98ರಷ್ಟು ಮಂದಿಗೆ ಲಸಿಕೆ ನೀಡಲಾಗಿದೆ. ಯಾವುದೇ ತಪ್ಪು ಕಲ್ಪನೆಗೆ ಒಳಗಾಗದೆ ಮಕ್ಕಳಿಗೆ ಲಸಿಕೆ ಕೊಡಿಸಬೇಕು’ ಎಂದು ಮನವಿ ಮಾಡಿದರು.

ಪಾಲಿಕೆ ಆಯುಕ್ತೆ ರೇಣುಕಾ, ಡಿಡಿಪಿಐ ಸಿ. ನಂಜಯ್ಯ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ, ಆರ್‌ಸಿಎಚ್ ಅಧಿಕಾರಿ ಡಾ.ಕೇಶವಮೂರ್ತಿ, ಪಿ.ಬಿ. ಬಸವರಾಜು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.