ADVERTISEMENT

ಬುಗುಡನಹಳ್ಳಿ: ವಾಸನೆ ನೀರು ಪೂರೈಕೆ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2020, 9:09 IST
Last Updated 5 ಆಗಸ್ಟ್ 2020, 9:09 IST

ತುಮಕೂರು: ತಾಲ್ಲೂಕಿನ ಬುಗುಡನಹಳ್ಳಿಯಲ್ಲಿ ಕುಡಿಯಲು ವಾಸನೆಭರಿತ ನೀರನ್ನು ಸರಬರಾಜು ಮಾಡಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಕಳೆದ ಮೂರು ವರ್ಷಗಳಿಂದ ಬುಗುಡನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಇಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಹಾಳಾಗಿದ್ದರೂ ಸರಿಪಡಿಸುವ ಕಾರ್ಯಕ್ಕೆ ಯಾರೊಬ್ಬರೂ ಮುಂದಾಗಿಲ್ಲ ಎಂದು ದೂರಿದ್ದಾರೆ.

ಈ ಭಾಗದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಜನಸಂಖ್ಯೆಯಿದೆ. ಶುದ್ಧ ಕುಡಿಯುವ ನೀರಿಲ್ಲದೆ ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಗ್ರಾಮದಲ್ಲಿ ಎರಡು ಕೊಳವೆ ಬಾವಿಗಳಿದ್ದು, ಈ ಬಾವಿಗಳ ನೀರನ್ನು ಶುದ್ಧೀಕರಿಸುತ್ತಿಲ್ಲ. ವಾಸನೆಯುಕ್ತ ನೀರು ಟ್ಯಾಂಕ್‌ಗಳಿಗೆ ಬರುತ್ತಿದ್ದು, ಇದನ್ನೇ ಸರಬರಾಜು ಮಾಡಲಾಗುತ್ತಿದೆ. ವಾಸನೆಯಿಂದಾಗಿ ಕುಡಿಯಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಜನರು ಐದಾರು ಕಿ.ಮೀ ತೆರಳಿ ಶುದ್ಧ ಕುಡಿಯುವ ನೀರಿನ ಘಟಕಗಳಿಂದ ನೀರು ತರುವಂತಾಗಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ADVERTISEMENT

ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಗ್ರಾಮ ಪಂಚಾಯಿತಿ ಪಿಡಿಒ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಕೊಳಕು ನೀರು ಸೇವನೆಯಿಂದ ಮುಂದೆ ಗಂಭೀರ ಕಾಯಿಲೆಗಳು ಬರುವ ಸಾಧ್ಯತೆಯಿದೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಎಚ್ಚೆತ್ತು ಶುದ್ಧ ಕುಡಿಯುವ ನೀರು ಪೂರೈಸಲು
ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರಾದ ಆಕಾಶ್‌ ಮತ್ತಿತರರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.