ADVERTISEMENT

ಹಾಥರಸ್ಅ ತ್ಯಾಚಾರ ಖಂಡಿಸಿ ಬೀದಿಗಿಳಿದ ಮಹಿಳೆಯರು

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2020, 4:26 IST
Last Updated 8 ಅಕ್ಟೋಬರ್ 2020, 4:26 IST
ತುಮಕೂರಿನಲ್ಲಿ ಬುಧವಾರ ಉತ್ತರ ಪ್ರದೇಶದಲ್ಲಿ ಯುವತಿ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ ಮಹಿಳೆಯರು ಪ್ರತಿಭಟನೆ ನಡೆಸಿದರು
ತುಮಕೂರಿನಲ್ಲಿ ಬುಧವಾರ ಉತ್ತರ ಪ್ರದೇಶದಲ್ಲಿ ಯುವತಿ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ ಮಹಿಳೆಯರು ಪ್ರತಿಭಟನೆ ನಡೆಸಿದರು   

ತುಮಕೂರು: ಉತ್ತರ ಪ್ರದೇಶದ ಹಾಥರಸ್ ಜಿಲ್ಲೆಯಲ್ಲಿ ನಡೆದಿರುವ ಯುವತಿ ಮೇಲಿನ ಅತ್ಯಾಚಾರ, ಕೊಲೆಯನ್ನು ಖಂಡಿಸಿ, ಆರೋಪಿಗಳನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿ ಜಿಲ್ಲಾ ಮಹಿಳಾ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಮಹಿಳೆಯರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ರಾಮರಾಜ್ಯ ನಡೆಸುತ್ತಿಲ್ಲ. ಗುಂಡಾರಾಜ್ಯ ನಡೆಸುತ್ತಿದ್ದಾರೆ. ಅತ್ಯಾಚಾರಕ್ಕೆ ಒಳಗಾದ ಯುವತಿ ಹಾಗೂ ಕುಟುಂಬದವರಿಗೆ ರಕ್ಷಣೆ ನೀಡುವ ಬದಲಿಗೆ ಆರೋಪಿಗಳಿಗೆ ಅಲ್ಲಿನ ಸರ್ಕಾರ ರಕ್ಷಣೆ ನೀಡುತ್ತಿದೆ. ಸಂತ್ರಸ್ತ ಕುಟುಂಬಕ್ಕೆ ಶವಸಂಸ್ಕಾರಕ್ಕೂ ಅವಕಾಶ ನೀಡದೆ, ಪೊಲೀಸರೇ ಮುಂದೆ ನಿಂತು ರಾತ್ರೋರಾತ್ರಿ ದಹನಮಾಡುವ ಮೂಲಕ ಸಾಕ್ಷ್ಯನಾಶಪಡಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಬೇಕು. ಕೂಡಲೇ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಶಾಂತಲಾ ರಾಜಣ್ಣ ಆಗ್ರಹಿಸಿದರು.

ರಾಮರಾಜ್ಯದ ಆಡಳಿತ ನೀಡುತ್ತೇವೆ ಎಂದುಅಧಿಕಾರಕ್ಕೆ ಬಂದ ಬಿಜೆಪಿಯು ತದ್ವಿರುದ್ಧವಾದ ಆಡಳಿತ ನೀಡುತ್ತಿದೆ. ಪರಿಶಿಷ್ಟ ಜಾತಿಯ ಮಹಿಳೆಯರು ಸೇರಿದಂತೆ ಯಾವುದೇ ಸಮುದಾಯದ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಸಂತ್ರಸ್ತ ಮಹಿಳೆಯ ಕುಟುಂಬಕ್ಕೆ ರಕ್ಷಣೆ ನೀಡಬೇಕು ಎಂದು ಮಧುಗಿರಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಇಂದಿರಾ ದೇನಾನಾಯಕ್ ಒತ್ತಾಯಿಸಿದರು.

ADVERTISEMENT

ಯೋಗಿ ಆದಿತ್ಯನಾಥ್ ಸರ್ಕಾರ ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ದೇಶದಲ್ಲಿ ಇಷ್ಟು ದೊಡ್ಡ ಘಟನೆ ನಡೆದರೂ ಪ್ರಧಾನಿ ನರೇಂದ್ರ ಮೋದಿ ಬಾಯಿ ಬಿಡದೆ ಮೌನಕ್ಕೆ ಶರಣಾಗಿರುವುದು ನಾಚಿಕೆಗೇಡಿನ ಸಂಗತಿ ಎಂದು ಮುಖಂಡ ಟಿ.ಪಿ.ಮಂಜುನಾಥ್ ಟೀಕಿಸಿದರು.

ಮುಖಂಡರಾದ ಸರಸ್ವತಿ, ಸುವರ್ಣಮ್ಮ, ಪ್ರತಾಪ್ ಮದಕರಿ, ರಾಜೇಶ್ ದೊಡ್ಡಮನಿ, ಅರ್ಜುನ್ ಪಾಳೇಗಾರ, ಪುರುಷೋತ್ತಮ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.