ADVERTISEMENT

`ಅಂಬೇಡ್ಕರ್ ಒಂದು ವರ್ಗದ ನಾಯಕರಲ್ಲ'

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2013, 6:56 IST
Last Updated 15 ಏಪ್ರಿಲ್ 2013, 6:56 IST

ಉಡುಪಿ: `ಅಂಬೇಡ್ಕರ್ ಪರಿಶಿಷ್ಟ ಜಾತಿಗೆ ಸೇರಿದರೂ ಒಂದು ವರ್ಗದ ನಾಯಕರಲ್ಲ, ಅವರನ್ನು ಒಂದು ವರ್ಗದ ನಾಯಕರನ್ನಾಗಿ ಬಿಂಬಿಸುತ್ತಿರುವುದು ದುರದೃಷ್ಟಕರ' ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಎಸ್.ಎ.ಪ್ರಭಾಕರ ಶರ್ಮ ಹೇಳಿದರು.

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ, ಸಮಾಜಕಲ್ಯಾಣ ಇಲಾಖೆ ಸಂಯುಕ್ತವಾಗಿ ಜಿಲ್ಲೆಯ ದಲಿತ ಸಂಘಟನೆಗಳು ಹಾಗೂ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಸಹಯೋಗದಲ್ಲಿ ಆದಿಉಡುಪಿ ಅಂಬೇಡ್ಕರ್ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸ್ವಾತಂತ್ರ್ಯ ಬಂದು ಇಷ್ಟು ವರ್ಷ ಕಳೆದರೂ ಪರಿಶಿಷ್ಟ ಜಾತಿ, ಪಂಗಡಗಳ ಆರ್ಥಿಕ ಸ್ಥಿತಿಗತಿ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ, ಆದರೆ ಅವರ ಜೀವನ ಪದ್ಧತಿ ಬಗ್ಗೆ ಮಂಥನ ಮಾಡಬೇಕಾದ ಅನಿವಾರ್ಯತೆ ಬಂದಿದೆ. ಪರಿಶಿಷ್ಟ ಜಾತಿಯ ಹೆಣ್ಮಕ್ಕಳ ಶಿಕ್ಷಣ ಹಾಗೂ ಸಾಮಾಜಿಕತೆ ಬಗ್ಗೆ ಅಧಿಕಾರಿ ವರ್ಗ ಹೆಚ್ಚು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು ಎಂದರು.

ಪರಿಶಿಷ್ಟ ಜಾತಿ, ಪಂಗಡದವರು ಚುನಾವಣೆಯಲ್ಲಿ ಮುಕ್ತವಾಗಿ ಪಾಲ್ಗೊಳ್ಳಲು, ನಿರ್ಭೀತಿಯಿಂದ ಮತದಾನ ಮಾಡದಂತಹ ಪರಿಸ್ಥಿತಿ ಉಡುಪಿ ಜಿಲ್ಲೆಯಲ್ಲಿಯೂ ಇರುವುದು ಬೇಸರದ ಸಂಗತಿ. ಸಂವಿಧಾನದತ್ತವಾಗಿ ಕೆಲವು ಗ್ರಾಮ ಪಂಚಾಯಿತಿಗಳಿಗೆ ಚುನಾಯಿತರಾಗಿ ಮೀಸಲಾತಿಯಂತೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ  ಸ್ಫರ್ಧಿಸದೇ ಇರುವಂತಹ ವಾತಾವರಣ ನಮ್ಮಲ್ಲಿ ನಡೆಯುತ್ತಿದೆ. ಈ ಬಗ್ಗೆ ನಾವು ಆತ್ಮಾವಲೋಕನ ಮಾಡಬೇಕಾಗಿದೆ. ಅವರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಅಧಿಕಾರಿ ವರ್ಗ ಮಾಡಲು ಮುಂದಾಗಬೇಕು ಎಂದು ಅವರು ಹೇಳಿದರು.

ಜಿಲ್ಲಾಧಿಕಾರಿ ಡಾ.ಎಂ.ಟಿ.ರೇಜು ಅಧ್ಯಕ್ಷತೆ ವಹಿಸಿದ್ದರು. ಎಂಜಿಎಂ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಕೊಕ್ಕರ್ಣೆ ಸುರೇಂದ್ರನಾಥ್ ಶೆಟ್ಟಿ ಅಂಬೇಡ್ಕರ್ ಜೀವನ ಚರಿತ್ರೆ ಬಗ್ಗೆ ಮಾತನಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಂ.ಬಿ.ಬೋರಲಿಂಗಯ್ಯ, ಪೌರಾಯುಕ್ತ ಗೋಕುಲ್‌ದಾಸ್ ನಾಯಕ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಡಾ.ಡಿ.ಪ್ರಭುಲಿಂಗು, ತಾಲ್ಲೂಕು ಅಧಿಕಾರಿ ವಿನಯ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.