ADVERTISEMENT

ಆಕಸ್ಮಿಕ ಬೆಂಕಿ: 10 ಗುಡಿಸಲು ಭಸ್ಮ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2012, 19:30 IST
Last Updated 20 ಏಪ್ರಿಲ್ 2012, 19:30 IST

ಉಡುಪಿ: ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಹತ್ತಕ್ಕೂ ಹೆಚ್ಚು ಗುಡಿಸಲುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಉಡುಪಿ ನಗರದ ಚಿಟ್ಪಾಡಿ ಬಡಾವಣೆಯಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.

ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಬೆಂಕಿ ಹೊತ್ತಿಕೊಂಡ ತಕ್ಷಣ ಮನೆಯಲ್ಲಿದ್ದವರು ಹೊರಗೆ ಓಡಿ ಬಂದಿದ್ದರಿಂದ ಯಾರಿಗೂ ಗಾಯಗಳಾಗಿಲ್ಲ.

ವಿಷಯ ತಿಳಿದ ಕೂಡಲೇ ಎರಡು ವಾಹನಗಳಲ್ಲಿ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಸುಮಾರು ಒಂದೂವರೆ ಗಂಟೆ ಕಾಲ ಸತತ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಬೆಂಕಿ ವ್ಯಾಪಿಸುವುದನ್ನು ತಡೆದರು.

ಬಾಗಲಕೋಟೆ ಜಿಲ್ಲೆಯಿಂದ ನಗರಕ್ಕೆ ವಲಸೆ ಬಂದಿರುವ ಕೂಲಿ ಕಾರ್ಮಿಕರು ಚಿಟ್ಪಾಡಿಯ ಹನುಮಾನ್ ಮೋಟಾರ್ಸ್‌ ಪಕ್ಕದಲ್ಲಿರುವ ಜಾಗದಲ್ಲಿ ಗುಡಿಸಲುಗಳನ್ನು ನಿರ್ಮಿಸಿಕೊಂಡು ವಾಸವಿದ್ದಾರೆ.

ಬೆಳಿಗ್ಗೆ 10.30ರ ಸುಮಾರಿಗೆ ಗುಡಿಸಲಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿತು. ತೆಂಗಿನ ಗರಿ ಮತ್ತು ಪ್ಲಾಸ್ಟಿಕ್‌ನಿಂದ ನಿರ್ಮಾಣಗೊಂಡಿದ್ದ ಗುಡಿಸಲುಗಳು ಕೆಲವೇ ನಿಮಿಷಗಳಲ್ಲಿ ಉರಿದು ಹೋದವು. ಮನೆಯಲ್ಲಿದ್ದ ವಾಹನ, ವಸ್ತು, ಬಟ್ಟೆಗಳೆಲ್ಲವೂ ಬೆಂಕಿಗೆ ಆಹುತಿಯಾಗಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ನಷ್ಟ ಸಂಭವಿಸಿದೆ. ಹತ್ತಕ್ಕೂ ಅಧಿಕ ಕುಟುಂಬಗಳು ಬೀದಿಗೆ ಬಂದಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.