ADVERTISEMENT

ನಗರಸಭೆ: ಚುನಾವಣೆ ಇಂದು

ಅಧ್ಯಕ್ಷ– ಉಪಾಧ್ಯಕ್ಷ ಸ್ಥಾನ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2013, 8:52 IST
Last Updated 12 ಸೆಪ್ಟೆಂಬರ್ 2013, 8:52 IST

ಉಡುಪಿ: ಉಡುಪಿ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಆಯ್ಕೆಗೆ ಇಂದು ಚುನಾವಣೆ ನಡೆಯಲಿದ್ದು, ಅಧ್ಯಕ್ಷರಾಗಿ ಕಾಂಗ್ರೆಸ್‌ನ ಯುವರಾಜ್‌ ಆಯ್ಕೆಯಾಗುವ ಸಾಧ್ಯತೆ ಇದೆ.

ಕಾಂಗ್ರೆಸ್‌ನ ಅಮೃತಾ ಕೃಷ್ಣಮೂರ್ತಿ, ಸೆಲಿನಾ ಕರ್ಕಡ, ಗೀತಾ ಶೇಟ್‌ ಅವರ ಮಧ್ಯೆ  ಪೈಪೋಟಿ ಇದೆ. ಈ ಮೂವರಲ್ಲಿ ಯಾರಿಗೆ ಉಪಾಧ್ಯಕ್ಷ ಸ್ಥಾನ ಒಲಿಯಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಅಧ್ಯಕ್ಷ ಸ್ಥಾನವನ್ನು ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಉಪಾಧ್ಯಕ್ಷ ಸ್ಥಾನವನ್ನು ಸಾಮಾನ್ಯ ವರ್ಗದ ಮಹಿಳೆಗೆ ಮೀಸಲಿಡಲಾಗಿದೆ. ಒಟ್ಟು 35 ವಾರ್ಡ್‌ಗಳ ನಗರಸಭೆಯಲ್ಲಿ ಕಾಂಗ್ರೆಸ್ 22 ಸ್ಥಾನಗಳನ್ನು ಪಡೆದು ಬಹುಮತ ಹೊಂದಿದೆ. ಪರಿಶಿಷ್ಟ ಜಾತಿಗೆ ಸೇರಿದ ಯುವರಾಜ್‌ ಮತ್ತು ಸಂಧ್ಯಾಕುಮಾರಿ ಪಕ್ಷದಿಂದ ಆಯ್ಕೆಯಾಗಿದ್ದಾರೆ. ಇವರಲ್ಲಿ ಒಬ್ಬರನ್ನು ಅಧ್ಯಕ್ಷರನ್ನಾಗಿ ಆರಿಸಬೇಕಾಗಿದೆ.

ಉಪಾಧ್ಯಕ್ಷ ಸ್ಥಾನ ಮಹಿಳೆಗೆ ಮೀಸಲಿರುವ ಕಾರಣ ಅಧ್ಯಕ್ಷ ಸ್ಥಾನಕ್ಕೆ ಪುರುಷ ಸದಸ್ಯನನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಇದೆ. ಉಪ ವಿಭಾಗಾಧಿಕಾರಿ ಯೋಗೀಶ್‌ ಅವರನ್ನು ಚುನಾವಣಾ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಬೆಳಿಗ್ಗೆ 11 ಗಂಟೆಗೆ ನಾಮ ಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು. ಮಧ್ಯಾಹ್ನ 3 ಗಂಟೆಗೆ ಚುನಾವಣೆ ನಡೆಯಲಿದೆ.

ಬಹುಮತ ಇಲ್ಲದ ಬಿಜೆಪಿ ಸದಸ್ಯರನ್ನು ಕಣಕ್ಕಿಳಿಸಬಾರದು ಎಂಬ ನಿರ್ಧಾರ ಕೈಗೊಂಡಿರುವುದರಿಂದ ಅವಿರೋಧವಾಗಿ ಆಯ್ಕೆಯಾಗುವ ಸಂಭವ ಹೆಚ್ಚಾಗಿದೆ.

‘ಕೆಲವು ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಆದರೆ ಇದು ಉಡುಪಿ ನಗರಸಭೆಗೆ ಅನ್ವಯಿಸುವುದಿಲ್ಲ. ಸೆಪ್ಟೆಂಬರ್‌ 4ಕ್ಕಿಂತ ಮೊದಲು ಚುನಾವಣಾ ಪ್ರಕ್ರಿಯೆಯ ದಿನಾಂಕ ಪ್ರಕಟಿಸಿದ ಸ್ಥಳೀಯ ಸಂಸ್ಥೆಗಳಿಗೆ ತಡೆಯಾಜ್ಞೆ ಇಲ್ಲ’ ಎಂದು ಜಿಲ್ಲಾಧಿಕಾರಿ ಡಾ.ಎಂ.ಟಿ.ರೇಜು ’ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.